ಡಿ.ಕೆ. ಶಿವಕುಮಾರ ವಿರುದ್ಧ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸಲು ವಿಶೇಷ ನ್ಯಾಯಾಲಯ ಆದೇಶ

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ಮುಖಂಡರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹಂಚಿಕೊಂಡಿದ್ದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಹಾಗೂ ಕಾಂಗ್ರೆಸ್‌ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥ ಬಿ.ಆರ್‌. ನಾಯ್ಡು​ ವಿರುದ್ಧ ಎಫ್​ಐಆರ್​ ದಾಖಲಿಸಿ, ತನಿಖೆ ನಡೆಸುವಂತೆ ಹೈಗ್ರೌಂಡ್ಸ್ ಪೊಲೀಸರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಿರ್ದೇಶನ ನೀಡಿದೆ.
ಬಿಜೆಪಿ ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೊಡಘಟ್ಟ ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ ನಗರದ 42ನೇ ಹೆಚ್ಚುವರಿ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ಜೆ ಪ್ರೀತ್‌ ಆದೇಶ ನೀಡಿದ್ದಾರೆ.

ಈಚೆಗೆ ಹುಬ್ಬಳ್ಳಿಯ ಪೊಲೀಸರು ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯನ್ನು 31 ವರ್ಷದ ಹಿಂದಿನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದರು. ಇದನ್ನು ಖಂಡಿಸಿ ರಾಜ್ಯ ಬಿಜೆಪಿ ಘಟಕದಿಂದ ಪ್ರತಿಭಟನೆಗಳು ನಡೆದಿದ್ದವು. ಧರಣಿಯಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ , ಮಾಜಿ ಸಚಿವರಾದ ವಿ ಸುನೀಲಕುಮಾರ, ಕೆ ಎಸ್​ ಈಶ್ವರಪ್ಪ, ಸಿ.ಟಿ. ರವಿ ಸೇರಿದಂತೆ ಹಲವು ಮುಖಂಡರು ನಾನೂ ಕರಸೇವಕ ನನ್ನನ್ನು ಬಂಧಿಸಿ ಎಂಬುದಾಗಿ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದರು.

ಪ್ರಮುಖ ಸುದ್ದಿ :-   ಬೆಳಗಾವಿ; ಟಿಕೆಟ್​ ತೋರಿಸು ಎಂದಿದ್ದಕ್ಕೆ ರೈಲಿನಲ್ಲಿ ಟಿಸಿ ಸೇರಿ ಐವರ ಮೇಲೆ ಮುಸುಕುಧಾರಿಯಿಂದ ಹಲ್ಲೆ, ಓರ್ವ ಸಾವು

ಈ ಸಂದರ್ಭದಲ್ಲಿ ಬಿಜೆಪಿ ನಾಯಕರ ಪೋಸ್ಟ್‌ ಅನ್ನು ತಿರುಚಿ ಅವಹೇಳನಕಾರಿಯಾಗಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ರಾಜ್ಯ ಕಾಂಗ್ರೆಸ್‌ ಹಾಗೂ ಡಿಕೆ ಶಿವಕುಮಾರ್‌ರ ಪೋಸ್ಟ್‌ ಮಾಡಿದ್ದರು. ಈ ಬಗ್ಗೆ ಬಿಜೆಪಿ ರಾಜ್ಯ ಕಾನೂನು ಪ್ರಕೋಷ್ಠದಿಂದ ಫೋರ್ಜರಿ ಹಾಗೂ ಎರಡು ಗುಂಪುಗಳ‌ ನಡುವೆ ದ್ವೇಷ ಮೂಡಿಸಿದ ಪೋಸ್ಟ್ ಹಾಕಿದ್ದಾರೆ ಎಂದು ಐಪಿಸಿ ಸೆಕ್ಷನ್ 153ಎ, 464, 504 ಮತ್ತು 505(ಬಿ)ರಡಿ ಬೆಂಗಳೂರಿನ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ದೂರು ದಾಖಲಿಸಲಾಗಿತ್ತು. ಡಿ ಕೆ ಶಿವಕುಮಾರ ಮತ್ತು ಬಿ.ಆರ್‌. ನಾಯ್ಡು ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣಾ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಿದೆ.

 

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement