ಬೆಂಗಳೂರು: ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆ ಹಾಗೂ ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಪ್ರದೇಶದಲ್ಲಿ ಜೋರಾದ ಗಾಳಿ ಹಾಗೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಇಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಡಗು, ಚಿಕ್ಕಮಗಳೂರು ಮತ್ತು ಬೆಳಗಾವಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ.
ಉತ್ತರ ಒಳನಾಡಿನ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೀದರ, ಕಲಬುರಗಿ, ಯಾದಗಿರಿ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಬಾಗಲಕೋಟೆಯಲ್ಲಿ ಮಳೆಯಾಗಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ