ಸಕಲ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಜಿತ್ ಪವಾರ್ ಅಂತ್ಯಕ್ರಿಯೆ

ಮುಂಬೈ: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಹಾಗೂ ಎನ್‌ಸಿಪಿ (NCP) ಮುಖ್ಯಸ್ಥ ಅಜಿತ್ ಪವಾರ್ ಅವರ ಅಂತ್ಯಕ್ರಿಯೆಯು ಗುರುವಾರ ಬಾರಾಮತಿಯ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಅವರ ಕುಟುಂಬಸ್ಥರು, ಬೆಂಬಲಿಗರು ಮತ್ತು ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಅಭಿಮಾನಿಗಳು ಹಿರಿಯ ನಾಯಕನಿಗೆ ಕಣ್ಣೀರಿನ ವಿದಾಯ ಹೇಳಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿ ಏಕನಾಥ ಶಿಂಧೆ, ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಕೇಂದ್ರ ಸಚಿವರಾದ ಅಮಿತ್ ಶಾ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೇರಿದಂತೆ ಹಲವು ಪ್ರಮುಖ ನಾಯಕರು ಅಜಿತ್ ಪವಾರ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪಗುಚ್ಛ ಅರ್ಪಿಸಿ ಅಂತಿಮ ನಮನ ಸಲ್ಲಿಸಿದರು. ನಂತರ ಪವಾರ್ ಅವರ ಪುತ್ರರಾದ ಪಾರ್ಥ ಮತ್ತು ಜಯ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.

ಕಣ್ಣೀರಿಟ್ಟ ಬೆಂಬಲಿಗರು
ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬೆಂಬಲಿಗರು “ಅಜಿತ್ ದಾದಾ ಅಮರ್ ರಹೇ” ಮತ್ತು “ಅಜಿತ್ ದಾದಾ ಮರಳಿ ಬನ್ನಿ” ಎಂದು ಘೋಷಣೆಗಳನ್ನು ಕೂಗಿದರು. ”

ಪ್ರಮುಖ ಸುದ್ದಿ :-   ಉದ್ಧವ್‌ಗೆ ಭಾರಿ ಹಿನ್ನಡೆ ; ಶಿಂಧೆ ಬಣದ ಜೊತೆ ಶಿವಸೇನೆ(ಯುಬಿಟಿ) 6 ಸಂಸದರ ವಿಲೀನಕ್ಕೆ ಲೋಕಸಭೆ ಸ್ಪೀಕರ್ ಅನುಮೋದನೆ

ದುರಂತದ ಹಿನ್ನೆಲೆ
ವಿಮಾನ ಅಪಘಾತ: ಟೇಬಲ್‌ಟಾಪ್ ರನ್‌ವೇಯಿಂದ ಕೇವಲ 200 ಮೀಟರ್ ದೂರದಲ್ಲಿ ವಿಮಾನ ಪತನಗೊಂಡು ಅಜಿತ್ ಪವಾರ್ ಸೇರಿದಂತೆ ಐವರು ಮೃತಪಟ್ಟಿದ್ದರು. ಅನುಭವಿ ಪೈಲಟ್ ಕ್ಯಾಪ್ಟನ್ ಸುಮಿತ್ ಕಪೂರ್, ಸಹ-ಪೈಲಟ್ ಕ್ಯಾಪ್ಟನ್ ಶಾಂಭವಿ ಪಾಠಕ್, ಭದ್ರತಾ ಅಧಿಕಾರಿ ವಿದಿಪ್ ಜಾಧವ್ ಮತ್ತು ಫ್ಲೈಟ್ ಅಟೆಂಡೆಂಟ್ ಪಿಂಕಿ ಮಾಲಿ ಈ ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.
ಕಡಿಮೆ ಗೋಚರತೆಯ (Poor visibility) ಕಾರಣದಿಂದ ವಿಮಾನವು ಇಳಿಯಲು ತೊಂದರೆಯಾಗಿತ್ತು. ಎಟಿಸಿ (ATC) ಜೊತೆಗಿನ ಸಂಪರ್ಕ ಕಡಿತಗೊಂಡ ಕೆಲವೇ ಕ್ಷಣಗಳಲ್ಲಿ ವಿಮಾನ ಪತನಗೊಂಡು ವಿಮಾನವು ಬೆಂಕಿಗಾಹುತಿಯಾಗಿತ್ತು.
ಈಗಾಗಲೇ ಪೊಲೀಸರು ಆಕಸ್ಮಿಕ ಸಾವು (ADR) ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಘಟನಾ ಸ್ಥಳದಲ್ಲಿ ವಿಮಾನದ ‘ಬ್ಲ್ಯಾಕ್ ಬಾಕ್ಸ್’ (Black Box) ಪತ್ತೆಯಾಗಿದ್ದು, ಅಪಘಾತಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement