ಪಂಚಮಸಾಲಿ ಸಮಾವೇಶದ ಹಿನ್ನೆಲೆ: ಸಚಿವ ಸಿ.ಸಿ.ಪಾಟೀಲ ನಿವಾಸದಲ್ಲಿ ಮಹತ್ವದ ಸಭೆ

ಬೆಂಗಳೂರು; ಭಾನುವಾರ ಅರಮನೆ ಮೈದಾನದಲ್ಲಿ ಮೀಸಲಾತಿಗಾಗಿ ಲಿಂಗಾಯತ ಪಂಚಮಸಾಲಿ ಸಮುದಾಯದ ಬೃಹತ್ ಸಮಾವೇಶ ನಡೆಯುತ್ತಿದ್ದರೆ, ಇತ್ತ ಸಚಿವ ಸಿ.ಸಿ.ಪಾಟೀಲ್ ನಿವಾಸದಲ್ಲಿ ಬಿಜೆಪಿಯ ಮಹತ್ವದ ಸಭೆ ನಡೆದಿದೆ.
ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಲಿಂಗಾಯತ ಪಂಚಮಸಾಲಿ ಸಮುದಾಯದ ಮುಖಂಡರು, ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಭೆ ಸೇರಿ ಸಮಾಲೋಚನೆ ನಡೆಸಿದರು.
ಸಮಾವೇಶ ಮುಗಿಯುವುದರೊಳಗೆ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಬೇಕೆಂದು ಕೂಡಲಸಂಗಮ ಮಠದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಗಡುವು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ ಮೇರೆಗೆ ಸಚಿವರು ಸಭೆ ಸೇರಿ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಯಾವುದೇ ಸಮುದಾಯಕ್ಕೆ ಮೀಸಲಾತಿ ನೀಡಬೇಕಾದರೆ ಸಮಯಾವಕಾಶ ಬೇಕಾಗುತ್ತದೆ. ಶ್ರೀಗಳು ಗಡುವು ನೀಡುವುದು ಸರಿಯಲ್ಲ. ಈಗಾಗಲೇ ಹಿಂದುಳಿದ ವರ್ಗಗಳ ಆಯೋಗಕ್ಕೆ ಅಧ್ಯಯನ ನಡೆಸಲು ಸೂಚನೆ ಕೊಡಲಾಗಿದೆ.ಆಯೋಗದ ವರದಿ ಬಂದ ನಂತರ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ತಿಳಿಸಿದರು.
ಸಚಿವ ಮುರುಗೇಶ್ ನಿರಾಣಿ ಮಾತನಾಡಿ, ಸರ್ಕಾರಕ್ಕೆ ಗಡುವು ನೀಡುವುದು ಸರಿಯಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮೇಲೆ ನಮಗೆ ವಿಶ್ವಾಸವಿದೆ. ಅವರು ಈ ಬಗ್ಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.
ಹಿಂದೆ ಸಾಮಾನ್ಯ ವರ್ಗದಲ್ಲಿದ್ದ ಪಂಚಮಸಾಲಿ ಸಮುದಾಯವನ್ನು 3ಬಿಗೆ ಸೇರ್ಪಡೆ ಮಾಡಿದವರು ಯಡಿಯೂರಪ್ಪನವರು. ಹಿಂದುಳಿದ ವರ್ಗಕ್ಕೆ ಸೇರ್ಪಡೆ ಮಾಡಲು ಅಂದು ಮಾಜಿ ಸಚಿವ ನಾರಾಯಣಸ್ವಾಮಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿತ್ತು ಎಂದು ಹೇಳಿದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement