ಒಂದು ವಾರದಲ್ಲಿ ರಾಜ್ಯ ನಾಲ್ಕು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಒಂದು ಲೋಕಸಭೆ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಮುಂದಿನ ವಾರ ವೇಳಾ ಪಟ್ಟಿ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗದ ರಾಜ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ.
ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಆಯಾ ರಾಜ್ಯಗಳಲ್ಲಿ ತೆರವಾಗಿರುವ ಲೋಕಸಭಾ ಕ್ಷೇತ್ರಗಳಿಗೆ ಚುನಾವಣಾ ದಿನಾಂಕವನ್ನು ಘೋಷಣೆ ಮಾಡಿತ್ತು.
ಕರ್ನಾಟಕದಲ್ಲಿ ಬೆಳಗಾವಿ ಲೋಕಸಭೆ, ಸಿಂದಗಿ, ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಮೂರು ಕ್ಷೇತ್ರಗಳ ಚುನಾವಣೆಗೆ ಪ್ರತ್ಯೇಕ ಅಧಿಸೂಚನೆ ಹೊರಡಿಸಲಾಗುವುದು ಎಂದು ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸುನೀಲ್ ಅರೋರಾ ಹೇಳಿದ್ದರು.
ರಾಜ್ಯದ ಉಪಚುನಾವಣೆಗೆ ವೇಳಾ ಪಟ್ಟಿ ಪ್ರಕಟವಾಗಲಿದೆ ಎಂದು ಚಾತಕಪಕ್ಷಿಗಳಂತೆ ಕಾದು ಕುಳಿತಿದ್ದವರಿಗೆ ನಿರಾಸೆಯಾಗಿತ್ತು. ಉಪಚುನಾವಣೆಗಳ ವೇಳಾ ಪಟ್ಟಿ ಕುರಿತಂತೆ ಈ ಸಂಜೆಗೆ ಮಾಹಿತಿ ನೀಡಿರುವ ರಾಜ್ಯ ಚುನಾವಣಾ ಆಯೋಗದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಕುಮಾರ್ ಅವರು, ಮುಂದಿನ ವಾರ ವೇಳಾಪಟ್ಟಿ ಪ್ರಕಟವಾಗಲಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭೆ ಕ್ಷೇತ್ರ ತೆರವಾದರೆ, ನಾರಾಯಣರಾವ್ ಅವರ ಸಾವಿನಿಂದ ಬಸವ ಕಲ್ಯಾಣ, ಎಂ.ಸಿ.ಮನಗೋಳಿ ಅವರ ನಿಧನದಿಂದ ಸಿಂದಗಿ ವಿಧಾನಸಭಾ ಕ್ಷೇತ್ರ ಹಾಗೂ ಪ್ರತಾಪ್‍ಗೌಡ ಪಾಟೀಲ್ ಅವರ ರಾಜೀನಾಮೆಯಿಂದ ಮಸ್ಕಿ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಬೇಕಿದೆ.

ಪ್ರಮುಖ ಸುದ್ದಿ :-   ಚಾಮರಾಜನಗರ : ಇಂಡಿಗನತ್ತ ಮತಗಟ್ಟೆ ಮೇಲೆ ಕಲ್ಲು ತೂರಾಟ, ಗಲಾಟೆ, ಮತಯಂತ್ರಕ್ಕೆ ಹಾನಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement