ಮೀಸಲಾತಿ ಬಗ್ಗೆ ಕೂಲಂಕುಷವಾಗಿ ಪರಾಮರ್ಶಿಸಿ ಸುಪ್ರೀಂ ಕೋರ್ಟಿಗೆ ವರದಿ:ಸಚಿವ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಎಸ್ ಸಿ/ಎಸ್ ಟಿ ಮತ್ತು ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಸಂವಿಧಾನಾತ್ಮಕವಾಗಿ  ರಕ್ಷಣೆ ಮಾಡುವ ಕುರಿತು ಕೂಲಂಕುಷವಾಗಿ ಪರಾಮರ್ಶೆ ನಡೆಸಿ ಸುಪ್ರೀಂಕೋರ್ಟಿಗೆ ವರದಿ ಸಲ್ಲಿಸಲಾಗುವುದು ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಹಾರಾಷ್ಟ್ರ ಸರ್ಕಾರ ಮೀಸಲಾತಿ ಪ್ರಮಾಣವನ್ನು ಶೇ. ೫೦ಕ್ಕಿಂತಲೂ ಹೆಚ್ಚು ಮಾಡಿದೆ. ಸುಪ್ರೀಂಕೋರ್ಟ್ ಈ  ಪ್ರಕರಣದ ವಿಚಾರಣೆಯನ್ನು  ಕೈಗೆತ್ತಿಕೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ಹಾಗೂ ಪ್ರಕರಣದ ವಿಚಾರಣೆಯನ್ನು ಉನ್ನತ ಪೀಠಕ್ಕೆ ವರ್ಗಾವಣೆ ಮಾಡುವ ಕುರಿತು ಸುಪ್ರೀಂಕೋರ್ಟ್ ಎಲ್ಲ ರಾಜ್ಯಗಳ  ಅಭಿಪ್ರಾಯ ಕೇಳಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.
ಸಭೆ ನಂತರ ಸುದ್ದಿಗಾರರ ಜತೆ ಮಾತನಾಡಿದ ಸಚಿವ ಬೊಮ್ಮಾಯಿ, ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣ ಶೇ. ೫೦ ಮೀರಬಾರದು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಆದರೆ  ಕೆಲ ತಿದ್ದಿಪಡಿಗಳಿಂದಾಗಿ ಈ ಮೀಸಲಾತಿ ಪ್ರಮಾಣ ಹೆಚ್ಚಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ  ಇದೆ. ಈ ಅಧಿಕಾರವನ್ನು ಹೇಗೆ ರಕ್ಷಣೆ ಮಾಡಬೇಕು ಎಂಬುದು ಸೇರಿದಂತೆ ಹಲವು ಮಹತ್ವದ ಪ್ರಶ್ನೆಗಳನ್ನು ಸುಪ್ರೀಂಕೋರ್ಟ್ ಕೇಳಿದೆ. ಈ ಬಗ್ಗೆ ಸಭೆಯಲ್ಲಿ ವಿಸ್ತ್ರತವಾಗಿ ಚರ್ಚೆ ಮಾಡಿದ್ದೇವೆ. ತಜ್ಞರ ಅಭಿಪ್ರಾಯಗಳನ್ನು ದಾಖಲಿಸಿದ್ದೇವೆ ಎಂದರು.
ರಾಜ್ಯದಲ್ಲಿ ಎಲ್ಲ ವರ್ಗಗಳ ಜನಸಂಖ್ಯೆ ಹೆಚ್ಚಿದೆ. ಅವರ ಆಶೋತ್ತರಗಳೂ ಹೆಚ್ಚಿವೆ. ಅವರ ಬೇಡಿಕೆಗಳಿಗೆ ಸ್ಪಂದಿಸಬೇಕಾದರೆ  ಶೇ. ೫೦ ರಷ್ಟು ಮೀಸಲಾತಿ ಸಾಕಾಗುತ್ತದೆಯೋ ಅಥವಾ ಇಲ್ಲವೋ ಎಂಬುದು ಸೇರಿದಂತೆ ಎಲ್ಲ ಆಯಾಮಗಳ ಕುರಿತು ಚರ್ಚೆ ಮಾಡಿ  ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ವರದಿ ಸಲ್ಲಿಸಲಿದೆ ಎಂದು ಸಚಿವ ಬೊಮ್ಮಾಯಿ ತಿಳಿಸಿದರು.
ಮಾರ್ಚ್ ೨೩ರ ಒಳಗೆ ಸುಪ್ರೀಂಕೋರ್ಟ್ ಕೇಳಿರುವ ಪ್ರಶ್ನೆ ಮತ್ತು ಇತರೆ ಮೀಸಲಾತಿ ವಿಚಾರಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸುಪ್ರೀಂಕೋರ್ಟ್ಗೆ ತಿಳಿಸಲಿದೆ ಎಂದು ಅವರು ಹೇಳಿದರು.
ಬೆಂಗಳೂರಿನ ಕುಮಾರಕೃಪಾ ಅತಿಥಿಗೃಹದಲ್ಲಿ ನಡೆದ ಸಭೆಯಲ್ಲಿ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಸ್ಟಿಸ್ ಕೆ. ಎಲ್ ಮಂಜುನಾಥ, ಮಾಜಿ ಅಡ್ವೋಕೇಟ್ ಜನರಲ್ ಗಳಾದ ಪ್ರೊ. ರವಿವರ್ಮ ಕುಮಾರ್, ಮಧುಸೂಧನ್ ನಾಯಕ್, ಉದಯ ಹೊಳ್ಳ ಸೇರಿದಂತೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement