ಬೆಂಗಳೂರು: ರಾಜ್ಯದಲ್ಲಿ ಘೋಷಣೆಯಾಗಿರುವ ಒಂದು ಲೋಕಸಭೆ ಹಾಗೂ 2 ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ದಾಖಲೆ ಮತಗಳ ಅಂತರದಿಂದ ಜಯ ಗಳಿಸುತ್ತೇವೆ ಎಂದು ಗೃಹ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು..
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅಭ್ಯರ್ಥಿಗಳ ಆಯ್ಕೆಯನ್ನು ಪಕ್ಷದ ಸಮಿತಿಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದರು.
ಕಳೆದ ಬಾರಿ ರಾಜ್ಯದಲ್ಲಿ ೧೫ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ೧೨ ಕ್ಷೇತ್ರಗಳಲ್ಲಿ ಜಯ ಗಳಿಸಿದ್ದೆವು. ನಂತರ ರಾಜರಾಜೇಶ್ವರಿನಗರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕೂಡ ಬಿಜೆಪಿ ಅಭರ್ಥಿ ದಾಖಲೆ ಮತಗಳ ಅಂತರದಿಂದ ಜಯ ಗಳಿಸಿದ್ದರು. ಈ ಬೆಳಗಾವಿ ಲೋಕಸಭೆ ಹಾಗೂ ಮಸ್ಕಿ, ಬಸವಕಲ್ಯಾಣ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಾಯಕತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳು ದಾಖಲೆ ಮತಗಳ ಅಂತರದಿಂದ ಜಯಗಳಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವಕ್ಕೆ ಬೆಳಗಾವಿ ಲೋಕಸಭೆ ಕ್ಷೇತ್ರದ ಜನತೆ ಈಗಾಗಲೇ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ. ಇತ್ತೀಚೆಗೆ ಬೆಳಗಾವಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಂದರ್ಭದಲ್ಲಿ ಸೇರಿದ್ದ ಅಪಾರ ಜನಸ್ತೋಮವೇ ಇದಕ್ಕೆ ನಿದರ್ಶನ ಎಂದರು.


ನಿಮ್ಮ ಕಾಮೆಂಟ್ ಬರೆಯಿರಿ