ಕೇರಳದಲ್ಲಿ  ಬಿಜೆಪಿಗೆ ಹಿನ್ನಡೆ: ಮೂರು ಎನ್‌ಡಿಎ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ

ತಿರುವನಂತಪುರಂ: ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆಯಾಗಿದೆ.
ರಾಜ್ಯದ ತಲಚೇರಿ, ಗುರುವಾಯುರ್ ಮತ್ತು ದೇವಿಕುಲಂ ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳು ಸಲ್ಲಿಸಿದ ನಾಮಪತ್ರ ತಿರಸ್ಕರಿಸಲಾಗಿದೆ.ಏಪ್ರಿಲ್ 6ರಂದು ನಡೆಯಲಿರುವ ಕಣ್ಣೂರು ಜಿಲ್ಲೆಯ ತಲಚೇರಿ, ಗುರುವಾಯುರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಒದಗಿಸದ ಕಾರಣಕ್ಕೆ ನಾಮಪತ್ರ ತಿರಸ್ಕರಿಸಲಾಗಿದೆ ಎಂದು ಹೇಳಲಾಗಿದೆ. ಕೇರಳದಲ್ಲಿ ಎಲ್ ಡಿಎಫ್ ಮತ್ತು ಯುಡಿಎಫ್ ಪಕ್ಷಗಳಿಗೆ ಪರ್ಯಾಯವಾಗಿ ಹೊರಹೊಮ್ಮಲು ಪ್ರಯತ್ನಿಸುತ್ತಿದ್ದ ಬಿಜೆಪಿಗೆ ಇದು ಹಿನ್ನಡೆಗೆ ಕಾರಣವಾಗಿದೆ.
ಇಡುಕ್ಕಿ ಜಿಲ್ಲೆಯ ದೇವಿಕುಲಂ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಐಎಡಿಎಂಕೆ ಅಭ್ಯರ್ಥಿ ಆರ್. ಎಂ. ಧನಲಕ್ಷ್ಮಿ ಅವರ ನಾಮಪತ್ರ ತಿರಸ್ಕರಿಸಲಾಗಿದೆ. ನಾಮಪತ್ರದ ಸಂದರ್ಭದಲ್ಲಿ ಅರ್ಜಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡದ ಕಾರಣಕ್ಕೆ ನಾಮಪತ್ರ ತಿರಸ್ಕೃತಗೊಂಡಿದೆ ಎಂದು ಹೇಳಲಾಗಿದೆ.
ಕಣ್ಣೂರು ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಎನ್ ಹರಿದಾಸ್ ಅವರಿಗೆ ತಲಚೇರಿ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದ್ದು, ಅವರು ಸಲ್ಲಿಸಿದ ನಾಮಪತ್ರ ತಿರಸ್ಕೃತಗೊಂಡಿದೆ. ಇದರಿಂದ 2016ರಲ್ಲಿ ಬಿಜೆಪಿ ಅತಿಹೆಚ್ಚು ಮತಗಳನ್ನು ಪಡೆದ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯೇ ಇಲ್ಲದಂತಾಗಿದೆ. ಸಹಿಯಲ್ಲಿ ಸ್ವಲ್ಪ ವ್ಯತ್ಯಾಸ ಆಗಿರುವ ಚಿಕ್ಕ ವಿಚಾರಕ್ಕೆ ಚುನಾವಣಾ ಅಧಿಕಾರಿಗಳು ಇಂಥ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ. ಈ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೊರೆ ಹೋಗುವುದಾಗಿ ಹರಿದಾಸ್ ತಿಳಿಸಿದ್ದಾರೆ.
ಮಧ್ಯಾಹ್ನ 3 ಗಂಟೆಯೊಳಗೆ ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ತಾಂತ್ರಿಕ ದೋಷ ಕಂಡು ಬಂದಿತ್ತು. ಈ ಹಿನ್ನೆಲೆ ಸರಿಯಾದ ಸಮಯಕ್ಕೆ ಅರ್ಜಿ ಸಲ್ಲಿಸಲು ಆಗಲಿಲ್ಲ ಎಂದು ಗುರುವಾಯುರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಿವೇದಿತಾ ಆರೋಪಿಸಿದ್ದಾರೆ.

ಪ್ರಮುಖ ಸುದ್ದಿ :-   ಸಿಬಿಐ ಜಂಟಿ ನಿರ್ದೇಶಕರಾಗಿ ಐವರು ಡಿಐಜಿಗಳನ್ನು ನೇಮಕ ಮಾಡಿದ ಕೇಂದ್ರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement