ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ಕಡಿವಾಣ: ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮುಂದಿನ ಒಂದು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸಭೆ-ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ತಿಂಗಳು ಅತ್ಯಂತ ಸವಾಲಿನ ಪರಿಸ್ಥಿತಿ ಎದುರಾಗಬಹುದು. ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.2ರಷ್ಟು ಹೆಚ್ಚಾಗುತ್ತಿದ್ದು, ಹೀಗಾಗಿ ಜಿಲ್ಲಾಡಳಿತ ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳು, ರಾಜಕೀಯ ಚಟುವಟಿಕೆಗಳು, ಸಭೆ-ಸಮಾರಂಭಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕೆಂದು ನಿರ್ದೇಶನ ನೀಡಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಜಿಲ್ಲಾಧಿಕಾರಿಗಳ ಜತೆಯೂ ಮಾತುಕತೆ ನಡೆಸಲಾಗಿದೆ. ಗಡಿ ಭಾಗಗಳಲ್ಲಿ ಹೊರರಾಜ್ಯಗಳಿಂದ ಬಂದವರನ್ನು ತಪಾಸಣೆ ಮಾಡುವುದು, ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಸೇರಿದಂತೆ ಹತ್ತು-ಹಲವು ಕ್ರಮಗಳನ್ನು ಕೈಗೊಂಡಿದ್ದೇವೆ. ವಿಶೇಷವಾಗಿ ಧಾರ್ಮಿಕ ಮುಖಂಡರು ಜನರಲ್ಲಿ ಕೋವಿಡ್ ಕುರಿತಂತೆ ಅರಿವು ಮೂಡಿಸುವ ಕಾರ್ಯಕ್ರಮ ಮಾಡಬೇಕು. ಹೆಚ್ಚು ಜನರು ಸೇರದಂತೆ ಅವರು ಭಕ್ತರಿಗೆ ಸೂಚಿಸಬೇಕು ಎಂದು ಸುಧಾಕರ್ ಮನವಿ ಮಾಡಿದರು.
ಚಲನಚಿತ್ರ ನಟರು ತಮ್ಮ ಚಿತ್ರಗಳ ಪ್ರಚಾರ ನಡೆಸುವ ಸಂದರ್ಭದಲ್ಲಿ ಹೆಚ್ಚು ಜನರು ಸೇರದಂತೆ ನೋಡಿಕೊಳ್ಳಬೇಕು. ಸಿನೆಮಾ ನಟರು ತಮ್ಮ ಅಭಿಮಾನಿಗಳಿಗೆ ಮಾಸ್ಕ್ ಧರಿಸುವುದು, ಸ್ಯಾನಿಟೈಜರ್ ಬಳಕೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸಲಹೆ ನೀಡಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಲಸಿಕೆ ಕೊರತೆ ಎದುರಾಗಿಲ್ಲ. ಕೇಂದ್ರ ಸಚಿವ ಡಾ.ಹರ್ಷವರ್ಧನ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಜತೆ ಮಾತುಕತೆ ನಡೆಸಲಾಗಿದೆ. ಪ್ರಸ್ತುತ ರಾಜ್ಯದಲ್ಲಿ 4 ಲಕ್ಷ ಡೋಸ್ ಲಸಿಕೆ ಅಗತ್ಯವಿತ್ತು. ವಿತರಣೆ ಮಾಡುವಷ್ಟು ಲಸಿಕೆಯನ್ನು ಸಂಗ್ರಹಿಸಿಟ್ಟುಕೊಂಡಿದ್ದೇವೆ. ಈ ವಾರದ ಅಂತ್ಯಕ್ಕೆ ಕೇಂದ್ರದಿಂದ ಹನ್ನೆರಡೂವರೆ ಲಕ್ಷ ಡೋಸ್ ಲಸಿಕೆ ರಾಜ್ಯಕ್ಕೆ ಬರಲಿದೆ. ಕೇಂದ್ರ ಸಚಿವರು ಕರ್ನಾಟಕಕ್ಕೆ ಅಗತ್ಯವಿರುವಷ್ಟು ಕೋವಿಡ್ ಲಸಿಕೆ ನೀಡುವ ಭರವಸೆ ಕೊಟ್ಟಿದ್ದಾರೆ ಎಂದು ಸ್ಪಷ್ಟಪಡಿಸಿದರು.
45 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರೂ ವದಂತಿಗಳಿಗೆ ಕಿವಿಗೊಡದೆ ಲಸಿಕೆ ಹಾಕಿಸಿಕೊಳ್ಳಿ ಎಂದು ಸುಧಾಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement