ನವದೆಹಲಿ: ದೇಶಾದ್ಯಂತ ಇಂದಿನಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಕೊರೋನಾ ವೈರಸ್ ವ್ಯಾಕ್ಸಿನೇಷನ್ ಆರಂಭವಾಗಿದ್ದು, ಲಸಿಕೆ ಅಭಿಯಾನವನ್ನು ಮತ್ತಷ್ಟು ವೇಗಗೊಳಿಸಲು ಸರ್ಕಾರಿ ರಜಾ ದಿನ ಸೇರಿದಂತೆ ಎಲ್ಲಾ ದಿನಗಳಲ್ಲೂ ಸರ್ಕಾರಿ ಮತ್ತು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಈ ತಿಂಗಳ ಪೂರ್ತಿ ರಜಾ ದಿನಗಳಂದೂ ಸಹ ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರ ಬರೆದಿರುವ ಕೇಂದ್ರ ಆರೋಗ್ಯ ಸಚಿವಾಲಯ, ಅಗತ್ಯ ವ್ಯವಸ್ಥೆ ಮಾಡಿಕೊಳ್ಳುವಂತೆ ಸೂಚಿಸಿದೆ.
ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳೊಂದಿಗೆ ಮಾರ್ಚ್ 31 ರಂದು ನಡೆದ ಚರ್ಚೆಯ ನಂತರ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿನ ಎಲ್ಲಾ ಕೋವಿಡ್-19 ವ್ಯಾಕ್ಸಿನೇಷನ್ ಕೇಂದ್ರಗಳಲ್ಲಿ ಕೊರೋನಾ ವ್ಯಾಕ್ಸಿನೇಷನ್ ಅನ್ನು ವೇಗಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಲಸಿಕೆ ಆಡಳಿತದ ರಾಷ್ಟ್ರೀಯ ತಜ್ಞರ ತಂಡದ ಶಿಫಾರಸಿನ ಆಧಾರದ ಮೇಲೆ ಏಪ್ರಿಲ್ 1 ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊರೋನಾ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ನಿಮ್ಮ ಕಾಮೆಂಟ್ ಬರೆಯಿರಿ