ಕೊವಿಡ್‌: ಮೋದಿ ಸಿಎಂಗೆ ದೂರವಾಣಿ ಕರೆ ಮಾಡಿದ ಬೆನ್ನಲ್ಲೇ ಕಟ್ಟುನಿಟ್ಟಿನ ಕ್ರಮದ ಮುನ್ಸೂಚನೆ ನೀಡಿದ ಸಚಿವ ಡಾ.ಸುಧಾಕರ

ಬೆಂಗಳೂರು:ಪ್ರಧಾನಿ ಮೋದಿ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಭಾನುವಾರ ಬೆಳಿಗ್ಗೆ ದೂರವಾಣಿಯಲ್ಲಿ ಮಾತನಾಡಿದ ಬೆನ್ನಲ್ಲೇ ರಾಜ್ಯ ಆರೋಗ್ಯ ಸಚಿವ ಕೊವಿಡ್‌-19 ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಅನಿವಾರ್ಯವಾಗಿ ಮಹಾರಾಷ್ಟ್ರದ ರೀತಿ ಲಾಕ್‌ಡೌನ್‌ನಂತಹ ನಿಯಮ ಕಟ್ಟುನಿಟ್ಟಾಗಿ ಜಾರಿಗೆ ತರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ನಗರದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಭಾನುವಾರ (ಏ.೧೧) ಲಸಿಕೆ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಲಾಕ್‍ಡೌನ್ ಜಾರಿ ಮಾಡಬಾರದೆಂದರೆ ಮೊದಲು ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಸರ್ಕಾರ ಅನಿವಾರ್ಯವಾಗಿ ಲಾಕ್‍ಡೌನ್‍ನಂತಹ ನಿಯಮಗಳನ್ನು ಜಾರಿ ಮಾಡಲೇಬೇಕಾಗುತ್ತದೆ ಎಂದು ಹೇಳಿದರು.
ಮಹಾರಾಷ್ಟ್ರದಲ್ಲಿ ಸಾರ್ವಜನಿಕರು ನಿಯಮಗಳನ್ನು ಪಾಲನೆ ಮಾಡದ ಕಾರಣ ಶುಕ್ರವಾರದಿಂದ ಸೋಮವಾರದ ವರಗೆ ಲಾಕ್‍ಡೌನ್ ಜಾರಿ ಮಾಡಲಾಗಿದೆ. ಅಲ್ಲಿ ಒಂದೇ ಒಂದೂ ವಾಹನ ಸಂಚಾರಕ್ಕೂ ಅವಕಾಶ ಕೊಟ್ಟಿಲ್ಲ.ಕೊವಿಡ್‌ ಮಾರ್ಗಸೂಚಿಗಳನ್ನು ಪಾಲಿಸದಿದ್ದರೆ ಇಲ್ಲಿಯೂ ಅದೇ ತರಹದ ಕಠಿಣ ನಿಯಮ ಜಾರಿಗೆ ತರುವುದು ಅನಿವಾರ್ಯವಾಗುತ್ತದೆ ಎಂದು ತಿಳಿಸಿದರು.
ಯಾವ ಯಾವ ರಾಷ್ಟ್ರ ಮತ್ತು ರಾಜ್ಯಗಳಲ್ಲಿ ಜನರು ಉದಾಸೀನ ತೋರಿದ್ದಾರೋ ಅಂತಹ ಕಡೆಗಳಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆ. ಹಾಗಾಗಿ ಅಲ್ಲಿನ ಸರ್ಕಾರಗಳಿಗೆ ಲಾಕ್‍ಡೌನ್ ಜಾರಿ ಮಾಡುವುದು ಅನಿವಾರ್ಯವಾಯಿತು. ನಮ್ಮಲ್ಲಿ ಅಂತಹ ಪರಿಸ್ಥಿತಿ ಬರುವುದು ಬೇಡ ಎಂದು ಹೇಳಿದರು.
80 ಸಾವಿರದಿಂದ ಒಂದು ಲಕ್ಷದವರೆಗೆ ಕೋವಿಡ್ ಪರೀಕ್ಷೆಗಳನ್ನು ಪ್ರತಿನಿತ್ಯ ನಡೆಸಬೇಕೆಂಬ ಗುರಿ ನೀಡಲಾಗಿದ್ದು, ಕಂಟೈನ್ಮೆಂಟ್ ವಲಯದಲ್ಲಿ ಪರೀಕ್ಷೆ ಪ್ರಮಾಣ ಹೆಚ್ಚಳ ಮಾಡಿದರೆ ಸೋಂಕಿತರನ್ನು ಪತ್ತೆಹಚ್ಚಲು ಅನುಕೂಲವಾಗುತ್ತದೆ ಎಂದರು.
ಕಂಟೈನ್ಮೆಂಟ್ ಜೋನ್‍ಗಳಲ್ಲಿ ಕೆಲವು ಬಿಗಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ಸೂಚನೆ ಕೊಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
ಯಾವ ನಗರಗಳಲ್ಲಿ ಹೆಚ್ಚು ಸೋಂಕು ಕಾಣಿಸಿಕೊಂಡಿದೆಯೋ ಅಂತಹ ಕಡೆ ಕ್ರಮ ತೆಗೆದುಕೊಳ್ಳಬೇಕೆಂದು ಸಲಹೆ ಮಾಡಿದ್ದಾರೆ. ಈಗಾಗಲೇ ರಾಜ್ಯದ 8 ಜಿಲ್ಲೆಗಳಲ್ಲಿ ಕೊರೊನಾ ಕರ್ಫ್ಯೂ ವಿಧಿಸಿರುವ ಬಗ್ಗೆ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement