ಸಿಎಂ ಯಡಿಯೂರಪ್ಪಗೆ ಮತ್ತೆ ಕೊರೊನಾ ಪಾಸಿಟಿವ್‌: ಮಣಿಪಾಲ್‌ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದೆರಡು ದಿನಗಳಿಂದ ಜ್ವರ, ಸುಸ್ತಿನಿಂದ ಬಳಲುತ್ತಿದ್ದ ಅವರನ್ನು ಶುಕ್ರವಾರ ಆಸ್ಪತ್ರೆಗೆ ದಾಖಲಿಸಿ ಕೊರೋನಾ ಪರೀಕ್ಷೆಗೆ ಒಳಪಡಿಸಿದಾಗ ಕೊರೋನಾ ಪಾಸಿಟಿವ್ ಬಂದಿದೆ.
ಶುಕ್ರವಾರ ಮಧ್ಯಾಹ್ನ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ತಪಾಸಣೆಗೆ ಹಾಜರಾಗಿದ್ದರು. ಅಲ್ಲಿ ನಿಗದಿಯಂತೆ ಅವರಿಗೆ ಕೊರೋನಾ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಪಾಸಿಟಿವ್ ಬಂದಿದ್ದು ಇದೀಗ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಕುರಿತು ಯಡಿಯೂರಪ್ಪ ಅವರ ಟ್ವಿಟರ್‌ ಖಾತೆಯಲ್ಲಿ ಪ್ರಕಟಿಸಲಾಗಿದ್ದು, ಜ್ವರದ ಹಿನ್ನೆಲೆಯಲ್ಲಿ ತಪಾಸಣೆಗೊಳಪಟ್ಟ ಸಂದರ್ಭದಲ್ಲಿ ಕೊರೊನಾ ದೃಢಪಟ್ಟಿದೆ. ಅಲ್ಪ ಪ್ರಮಾಣದಲ್ಲಿ ರೋಗ ಲಕ್ಷಣಗಳಿರುವುದರಿಂದ ವೈದ್ಯರ ಸಲಹೆಯನ್ವಯ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕ್ವಾರಂಟೈನ್‌ನಲ್ಲಿದ್ದು, ತಪಾಸಣೆ ಮಾಡಿಸಿಕೊಳ್ಳಲು ಕೋರುತ್ತೇನೆ ಎಂದು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಲೋಕಸಭಾ ಉಪಚುನಾವಣೆ ಪ್ರಚಾರ ಸಂದರ್ಭದಲ್ಲಿ ಯಡಿಯೂರಪ್ಪ ಜ್ವರದಿಂದ ಬಳಲಿ ಪ್ರಚಾರ ಮೊಟಕುಗೊಳಿಸಿ ಗುರುವಾರವೇ ಬೆಂಗಳೂರಿಗೆ ಮರಳಿದ್ದರು. ಶುಕ್ರವಾರ ಬೆಳಗ್ಗೆ ಕೊರೊನಾ ಕುರಿತ ತುರ್ತು ಸಭೆ ನಡೆಸಿದ ಅವರು ನಂತರ ತಪಾಸಣೆಗಾಗಿ ಆಸ್ಪತ್ರೆಗೆ ತೆರಳಿದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಅವರಿಗೆ ಕೊರೋನಾ ಬರುತ್ತಿರುವುದು ಇದು ಎರಡನೇ ಸಲ. ಕಳೆದ ವರ್ಷ ಕೂಡ ಕೊರೋನಾ ಬಂದು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement