ಸರ್ಕಾರದ ಮಹತ್ವದ ನಿರ್ಧಾರ…ದ್ವಿತೀಯ ಪಿಯು ಪರೀಕ್ಷೆ ಮುಂದೂಡಿಕೆ… ಪ್ರಥಮ ಪಿಯು ವಿದಾರ್ಥಿಗಳು ಪರೀಕ್ಷೆ ಇಲ್ಲದೆ ತೇರ್ಗಡೆ

ಬೆಂಗಳೂರು : ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ ಮೇ 24ರಿಂದ ಆರಂಭವಾಗಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಮಾತನಾಡಿದ ಅವರು, ಪರೀಕ್ಷಾ ದಿನಾಂಕಗಳನ್ನು ಪರೀಕ್ಷೆಗಳು ಆರಂಭವಾಗುವುದಕ್ಕೆ 15-20 ದಿನಗಳ ಮುನ್ನವೇ ಪ್ರಕಟಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಪರೀಕ್ಷೆಗೆ ಸಜ್ಜಾಗಿದ್ದ ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವುದರಿಂದ ಯಾವುದೇ ಕಾರಣಕ್ಕೂ ವಿಚಲಿತರಾಗದೇ ಶ್ರದ್ಧೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಎಂದಿನಂತೆ ಮುಂದುವರೆಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಮೊದಲನೇ ಪಿಯು ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೆ ತೇರ್ಗಡೆ:
ದ್ವಿತೀಯ ಪಿಯು ಪರೀಕ್ಷೆಗಳ ನಂತರ ನಡೆಸಬೇಕೆಂದು ನಿರ್ಧರಿಸಲಾಗಿದ್ದ ಸಭೆಯಲ್ಲಿಯೇ ಪ್ರಥಮ ಪಿಯು ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ರದ್ದುಪಡಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಪ್ರಥಮ ವರ್ಷದ ಪಿಯು ವಿದ್ಯಾರ್ಥಿಗಳನ್ನು ಪರೀಕ್ಷೆಯಿಲ್ಲದೆ ಮುಂದಿನ ತರಗತಿಗೆ ತೇರ್ಗಡೆ ಮಾಡುವ ನಿರ್ಧಾರವನ್ನೂ ಇದೇ ಸಂದರ್ಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ಆರಂಭಕ್ಕೆ ಮುಹೂರ್ತ ನಿಗದಿ

2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿಗೆ ದಾಖಲಾದ ಎಲ್ಲಾ ವಿದ್ಯಾರ್ಥಿಗಳನ್ನು ದ್ವಿತೀಯ ಪಿಯುಸಿಗೆ ತೇರ್ಗಡೆ ಎಂದು ಪರಿಗಣಿಸುವುದು. ಸದರಿ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಪಿಯುಸಿಯಲ್ಲಿ ಶೇ.30ರಷ್ಟು ಕಡಿತಗೊಳಿಸಿದ ಪಠ್ಯಕ್ರಮವನ್ನು ಸೇತು ಬಂಧ ತರಗತಿಗಳನ್ನಾಗಿ ನಡೆಸುವುದು. ಈ ಕುರಿತು ಹೆಚ್ಚಿನ ವಿವರಗಳನ್ನು ಮುಂದಿನ ದಿನಗಳಲ್ಲಿ ನೀಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭದ ಮುನ್ನ ಬ್ರಿಡ್ಜ್ ಕೋರ್ಸುಗಳನ್ನು ನಡೆಸಲಾಗುತ್ತದೆ. ಇಲಾಖೆಯ ಯೂ-ಟ್ಯೂಬ್ ಚಾನಲ್ಲುಗಳ ಮೂಲಕ ಈಗಿನಿಂದಲೇ ಈ ಬ್ರಿಡ್ಜ್ ಕೋರ್ಸುಗಳು ವಿದ್ಯಾರ್ಥಿಗಳಿಗೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.
ಪರೀಕ್ಷೆಗಳನ್ನು ಮುಂದೂಡಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸತತವಾಗಿ ಸಂಪರ್ಕದಲ್ಲಿರುವಂತೆ ಉಪನ್ಯಾಸಕರು ವರ್ಕ್ ಫ್ರಂ ಹೋಂ ಕೆಲಸ ಮಾಡಲು ಸೂಚಿಸಲಾಗಿದೆ.
ವಿದ್ಯಾರ್ಥಿಗಳೊಂದಿಗೆ ನಿರಂತರ ಸಂಪರ್ಕ, ಇಲಾಖೆಯ ಪಠ್ಯ ಬೋಧನಾ ಕ್ರಮಗಳನ್ನು ಅವರೊಂದಿಗೆ ಚರ್ಚಿಸುವುದು ಸೇರಿದಂತೆ ಎಲ್ಲ ಆಡಳಿತಾತ್ಮಕ ಕ್ರಮಗಳಲಿಗೆ ಅವರು ಸದಾ ಲಭ್ಯವಾಗಬೇಕಿದೆ. ಹಾಗೆಯೇ ಕೋವಿಡ್ ಕರ್ತವ್ಯಗಳಲ್ಲಿ ತೊಡಗಿಸಿಕೊಂಡಿರುವ ಉಪನ್ಯಾಸಕರು ತಮ್ಮ ಕೋವಿಡ್ ಜವಾಬ್ದಾರಿಗಳನ್ನು ಪೂರೈಸಬೇಕಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.
ಮೇ 24ರಿಂದ ಜೂ.16ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ನಡೆಸಲು ಈ ಮೊದಲು ನಿರ್ಧರಿಸಲಾಗಿತ್ತು. ರಾಜ್ಯಾದ್ಯಂತ 1047 ಕೇಂದ್ರಗಳಲ್ಲಿನ 5562 ಕಾಲೇಜುಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು.
ಪ್ರಾಯೋಗಿಕ ಪರೀಕ್ಷೆಗಳನ್ನು ಈಗಾಗಲೇ ಮುಂದೂಡಲಾಗಿದೆ. ರಾಜ್ಯಾದ್ಯಂತ ಕೋವಿಡ್ ಎರಡನೇ ಅಲೆ ತೀವ್ರವಾಗುತ್ತಿರುವ ಹರಡುತ್ತಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಕುಮಾರ ನಾಯಕ್, ಪಿಯು ಮಂಡಳಿ ನಿರ್ದೇಶಕಿ ಆರ್. ಸ್ನೇಹಲ್ ಮತ್ತಿತರರು ಭಾಗವಹಿಸಿದ್ದರು.

ಪ್ರಮುಖ ಸುದ್ದಿ :-   ಹಿಂಗಾರು ಮಳೆ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಶ್ರೀಗಳು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement