ತೌಕ್ಟೆ ಚಂಡಮಾರುತ: ಕರ್ನಾಟಕದ ಕರಾವಳಿ-ಮಲೆನಾಡಿನಲ್ಲಿ ಇಂದಿನಿಂದ ಮೂರ್ನಾಲ್ಕು ದಿನ ಭಾರೀ ಗಾಳಿಮಳೆ ಸಾಧ್ಯತೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವಾರದಿಂದ ಮಳೆಯಾಗುತ್ತಿದೆ.  ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಮೇ 15 ಮತ್ತು 16ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಮೈಸೂರು, ಹಾಸನ, ರಾಮನಗರ ಜಿಲ್ಲೆಗಳಲ್ಲಿ ಒರೆಂಜ್ ಅಲರ್ಟ್​ ಘೋಷಿಸಲಾಗಿದೆ.
ಮೇ 16ರಂದು ತೌಕ್ಟೆ ಚಂಡಮಾರು ಕರ್ನಾಟಕಕ್ಕೆ ಅಪ್ಪಳಿಸುವ ಸಾಧ್ಯತೆಯಿರುವುದರಿಂದ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಇಂದಿನಿಂದ ಮೂರು ದಿನ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆ ಶುಕ್ರವಾರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಇದರ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಶುಕ್ರವಾರದದಿಂದ ಮೇ 17ರ ವರೆಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದ ಕೆಲವು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮೇ 16ರಂದು ಅರಬ್ಬಿ ಸಮುದ್ರದಲ್ಲಿ ಈ ವರ್ಷದ ಮೊದಲ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ ಒಂದು ವಾರಗಳ ಕಾಲ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕರ್ನಾಟಕದಲ್ಲಿ ಚಂಡಮಾರುತ ಮೇ 16ರಂದು ತಾಸಿಗೆ 40ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ತಿಳಿಸಲಾಗಿದೆ.
ಕೊಡಗಿನಲ್ಲಿ ಶುಕ್ರವಾರದಿಂದ ಎರಡು ದಿನ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮಡಿಕೇರಿ ನಗರದ ಚಾಮುಂಡೇಶ್ವರಿ ನಗರ ಮತ್ತು ಇಂದಿರಾನಗರದ ನಿವಾಸಿಗಳು ತಾತ್ಕಾಲಿಕವಾಗಿ ಮನೆಗಳನ್ನು ಖಾಲಿ ಮಾಡಿ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮಡಿಕೇರಿ ನಗರ ಸಭೆ ನೊಟೀಸ್ ನೀಡಿದೆ. ಮೇ 14 ಮತ್ತು 15ರಂದು ಚಂಡಮಾರುತದ ಪರಿಣಾಮ ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ದೊರೆತಿದೆ. ಹೀಗಾಗಿ ಜನರು ಕೂಡಲೇ ಸುರಕ್ಷಿತ ಸ್ಥಳಗಳಿಗೆ ತೆರಳಬೇಕು ಎಂದು ನೋಟಿಸ್ ನೀಡಲಾಗಿದೆ.
ಲಕ್ಷದ್ವೀಪ, ಕೇರಳ, ಕರ್ನಾಟಕ, ಗೋವಾ, ಮಹಾರಾಷ್ಟ್ರದ ಕರಾವಳಿ ಭಾಗದಲ್ಲಿ ತೌಕ್ಟೆ ಚಂಡಮಾರುತದ ಅಬ್ಬರ ಹೆಚ್ಚಾಗಿರಲಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಗದಗದ ಕೆಲವು ಭಾಗಗಳಲ್ಲಿ ಮೇ 15 ಮತ್ತು 17ರಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಮೇ 15 ಮತ್ತು 16ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ,ಕೊಪ್ಪಳ, ವಿಜಯಪುರ ಹಾಗೂ ಬಾಗಲಕೋಟೆಯ ಕೆಲವು ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.
ಮೇ 15 ಮತ್ತು 16 ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಸ್ಥಳಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಶಿವಮೊಗ್ಗ , ಚಿಕ್ಕಮಗಳೂರು, ಹಾಸನ, ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಶುಕ್ರವಾರದಿಂದ 7ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ‌ಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಮುಖ ಸುದ್ದಿ :-   ಕರ್ನಾಟಕದ 17 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

3 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement