ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ನಿರ್ಧಾರ ಸದ್ಯಕ್ಕಿಲ್ಲ

ಬೆಂಗಳೂರು: ಕೋವಿಡ್-‌19 ಸದ್ಯದ ಪರಿಸ್ಥಿತಿಯಲ್ಲಿ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಲು ಸಾಧ್ಯವಾಗದಿದ್ದರೂ, ಪರೀಕ್ಷೆಯನ್ನು ಸಂಪೂರ್ಣವಾಗಿ ರದ್ದು ಪಡಿಸುವ ಚಿಂತನೆ ಶಿಕ್ಷಣ ಇಲಾಖೆ ಮುಂದಿಲ್ಲ. ಪದವಿಪೂರ್ವ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ದ್ವಿತೀಯ ಪಿಯು ಪರೀಕ್ಷೆಗಳನ್ನು ನಡೆಸುವುದು ಉಚಿತ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯು ಆಯೋಜಿಸಿದ್ದ ಎಲ್ಲ ರಾಜ್ಯಗಳ ಶಿಕ್ಷಣ ಸಚಿವರ ಸಭೆಯಲ್ಲಿ ಮಾತನಾಡಿದ ಅವರು, ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕು. ಕೋವಿಡ್ ಸಂಪೂರ್ಣವಾಗಿ ತಹಬಂದಿಗೆ ಬಂದ ನಂತರ ಪ್ರಕ್ರಿಯೆ ಸರಳಗೊಳಿಸಿಯಾದರೂ ಪರೀಕ್ಷೆಗಳನ್ನು ನಡೆಸುವುದು ಸಮರ್ಪಕ ಎಂದು ಅಭಪ್ರಾಯಪಟ್ಟರು.
ಪ್ರಸ್ತುತ ಕೋವಿಡ್ ಪ್ರಸರಣವು ಎಲ್ಲೆಡೆ ತೀವ್ರವಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಎರಡನೇ ಅಲೆ ತಹಬಂದಿಗೆ ಬಂದ ಕೂಡಲೇ 15-20 ದಿನಗಳ ಕಾಲಾವಕಾಶ ನೀಡಿ ಮುಂಚೆಯೇ ಪರೀಕ್ಷೆಗಳ ದಿನಾಂಕ ಪ್ರಕಟಿಸಲು ಸದ್ಯಕ್ಕೆ ತೀರ್ಮಾನಿಸಲಾಗಿದೆ. ಕೋವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸಹ ಕರ್ನಾಟಕ ಸರ್ಕಾರವು ಯೋಜಿಸಿದೆ ಎಂದು ಈ ಸಂದರ್ಭದಲ್ಲಿ ಅವರು ಹೇಳಿದರು.
ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳ್ಳಬೇಕೆಂದು ಹಲವರ ಪ್ರತಿಪಾದನೆಯಾಗಿದೆ. ಸರಳೀಕೃತ ಮಾದರಿಯಲ್ಲಿ ಇಡೀ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನಗಳ ಕಾಲಾವಕಾಶದ ಅಗತ್ಯವಿದೆ. ಕೇಂದ್ರ ಸರ್ಕಾರದ ಶಿಕ್ಷಣ ಇಲಾಖೆಯೂ ಕಡಿಮೆ ಅವಧಿಯ ಪರೀಕ್ಷೆಗಳನ್ನು ನಡೆಸುವ ಯೋಜನೆ ಸಲಹಾತ್ಮಕವಾಗಿ ಹೇಳಿದೆ ಎಂದರು.
ಕರ್ನಾಟಕ ರಾಜ್ಯವು ಕಳೆದ ಸಾಲಿನಲ್ಲಿ ಕೋವಿಡ್ ಸಂದರ್ಭದಲ್ಲಿಯೂ ಎಸ್ಎಸ್ಎಲ್ ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಹೊಂದಿದ್ದು, ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸುವುದು ಹೆಚ್ಚಿನ ಸಮಸ್ಯೆಯಾಗದಿದ್ದರೂ, ವಿದ್ಯಾರ್ಥಿಗಳ ಕಲಿಕೆ, ಪೋಷಕರ ಮಃಸ್ಥಿತಿ, ಕೇಂದ್ರ ಸರ್ಕಾರದ ಸಲಹೆಗಳು ಹಾಗೂ ಪ್ರಸ್ತುತ ಪೂರ್ವಸಿದ್ಧತಾ ಕಾರ್ಯಗಳನ್ನು ಸಮಗ್ರವಾಗಿ ಅವಲೋಕಿಸಲಾಗುವುದು. ಒಟ್ಟಾರೆ ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ದ್ವಿತೀಯ ಪಿಯು ಪರೀಕ್ಷೆಗಳಿಗೆ ಕರ್ನಾಟಕದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಒಂದು ವೇಳೆ ಜುಲೈ ಮಾಹೆಯಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ ತಿಂಗಳಲ್ಲಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲು ಸಾಧ್ಯ ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ನಂತರ ಸೂಕ್ತ ದಿನಾಂಕಗಳಂದು ಆಯೋಜಿಸಬಹುದು ಸಚಿವ ಸುರೇಶಕುಮಾರ್ ಸಲಹೆ ನೀಡಿದರು.
ವಿವಿಧ ರಾಜ್ಯಗಳ ಶಿಕ್ಷಣ ಸಚಿವರು ತಮ್ಮ ರಾಜ್ಯಗಳ ಸ್ಥಿತಿಗತಿಗಳನ್ನು ಗಮನಕ್ಕೆ ತಂದರು. ಹಾಗೂ ಸಿ.ಬಿ.ಎಸ್.ಇ. ಮಂಡಳಿಯು ಸೇರಿದಂತೆ ಬಹುತೇಕ ರಾಜ್ಯಗಳು ಪರೀಕ್ಷೆ ನಡೆಸುವ ಪರವಾಗಿ ವಿಚಾರ ಮಂಡಿಸಿದರು.
ಸಭೆಯಲ್ಲಿ ಕೇಂದ್ರ ರಕ್ಷಣಾ ಮಂತ್ರಿ ರಾಜನಾಥ ಸಿಂಗ್, ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್, ಜವಳಿ ಸಚಿವೆ ಸ್ಮೃತಿ ಇರಾನಿ, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೇರಿದಂತೆ ಹಲವು ರಾಜ್ಯಗಳ ಶಿಕ್ಷಣ ಸಚಿವರು ಹಾಜರಿದ್ದರು.

ಪ್ರಮುಖ ಸುದ್ದಿ :-   ವಿಡಿಯೊಗಳು | ಶಿವಮೊಗ್ಗ ದಸರಾ ಜಂಬೂ ಸವಾರಿ ವೇಳೆ ದಿಕ್ಕಾಪಾಲಾಗಿ ಓಡಿದ ಅಂಬಾರಿ ಹೊತ್ತ ಆನೆ ; ಬೆಳ್ಳಿ ಅಂಬಾರಿ ಕೆಳಕ್ಕೆ, ವಾಹನ ಜಖಂ

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement