ಮಾಜಿ ಸಚಿವ, ಹಾನಗಲ್ ಶಾಸಕ ಸಿ.ಎಂ.ಉದಾಸಿ ನಿಧನ

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದಂತ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ನಿಧರಾಗಿದ್ದಾರೆ.
ಸಿಎಂ ಉದಾಸಿ ಮಧ್ಯಾಹ್ನ 2.54ಕ್ಕೆ ಕೊನೆಯುಸಿರೆಳೆದಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್‌ನಲ್ಲಿ ನಾಳೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಉದಾಸಿ ಪುತ್ರ ಹಾಗೂ ಹಾವೇರಿ ಕ್ಷೇತ್ರದ ಸಂಸದ ಶಿವಕುಮಾರ್ ಉದಾಸಿ ಹೇಳಿಕೆ ನೀಡಿದ್ದಾರೆ.
ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ(86) ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಅವರು ವೆಂಟಿಲೇಟರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಅವರು ಇದು (ಮಂಗಳವಾರ) ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ರಾಜ್ಯದ ಹಿರಿಯ ರಾಜಕಾರಣಿಗಳಲ್ಲಿ ಸಿ. ಎಂ. ಉದಾಸಿ ಅವರೂ ಒಬ್ಬರಾಗಿದ್ದರು.
ಮಾಜಿ ಸಚಿವ ಚನ್ನಬಸಪ್ಪ ಮಹಾಲಿಂಗಪ್ಪ ಉದಾಸಿ (ಸಿ.ಎಂ. ಉದಾಸಿ) ಒಟ್ಟು ಆರು ಬಾರಿ ಶಾಸಕರಾಗಿ ಆಯ್ಕೆ ಆಗಿದ್ದರು. ಪ್ರಸ್ತುತ ಹಾವೇರಿ ಜಿಲ್ಲೆ ಹಾನಗಲ್ ವಿಧಾನಸಭಾ ಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿದ್ದರು. ಫೆಬ್ರವರಿ 2,1937ರಲ್ಲಿ ಸಾವಿತ್ರಮ್ಮ ಮತ್ತು ಮಹಾಲಿಂಗಪ್ಪ ದಂಪತಿಗೆ ಜನಿಸಿದ್ದರು. ಎಂಟನೆ ತರಗತಿ ವಿದ್ಯಾಭಾಸ ಮಾಡಿದ್ದರು. ಮೃತರು ಉದಾಸಿಗೆ ಓರ್ವ ಪುತ್ರ ಮತ್ತು ಓರ್ವ ಪುತ್ರಿ ಇದ್ದಾರೆ. ಪುತ್ರ ಶಿವಕುಮಾರ ಉದಾಸಿ ಹಾವೇರಿ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.
ಸಿ.ಎಂ.ಉದಾಸಿ ಒಟ್ಟು ಆರು ಬಾರಿ ಶಾಸಕರಾಗಿದ್ದರು. 1974ರಲ್ಲಿ ಹಾನಗಲ್ ಪುರಸಭೆ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗಿದ್ದರು. 1974ರಿಂದ 1980ರ ವರೆಗೆ ಪುರಸಭೆ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. 1983ರಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಮೊದಲ ಸಲ ವಿಧಾನಸಭೆ ಪ್ರವೇಶಿಸಿದ್ದರು. 1985ರಲ್ಲಿ ಜನತಾ ಪಕ್ಷದಿಂದ ಸ್ಪರ್ಧಿಸಿ ಎರಡನೆ ಬಾರಿಗೆ ಶಾಸಕರಾಗಿ ಆಯ್ಕೆ ಆಗಿದ್ದರು. 1989ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 1994ರಲ್ಲಿ ಜನತಾದಳದಿಂದ ಸ್ಪರ್ಧಿಸಿ ಮೂರನೆ ಬಾರಿಗೆ ಶಾಸಕರಾಗಿದ್ದರು. 1999ರಲ್ಲಿ ಜೆಡಿಯುನಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. 2004 ಮತ್ತು 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2013ರಲ್ಲಿ ಕೆಜೆಪಿಯಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ, 2018ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಆರನೆ ಬಾರಿಗೆ ಗೆಲುವು ಸಾಧಿಸಿದ್ದರು.
ಅಲ್ಲದೆ, ಸಿ.ಎಂ. ಉದಾಸಿ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕೆಲಸ ನಿರ್ವಹಿಸಿದ್ದರು. ದಿ.ರಾಮಕೃಷ್ಣ ಹೆಗಡೆ ಸಚಿವ ಸಂಪುಟದಲ್ಲಿ ಸಚಿವರಾಗಿದ್ದರು. 1994ರಲ್ಲಿ ದಿವಂಗತ ಜೆ.ಎಚ್.ಪಟೇಲರ ಸಂಪುಟದಲ್ಲಿ ಲೋಕೋಪಯೋಗಿ ಸಚಿವರಾಗಿದ್ದರು. 2004ರಲ್ಲಿ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿ ಕೆಲಸ ಮಾಡಿದ್ದರು. ಜವಳಿ ಸಚಿವರಾಗಿ ಮತ್ತು‌ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. ರಾಜಕೀಯಕ್ಕೆ ಬರುವ ಮೊದಲು ಭತ್ತದ ವ್ಯಾಪಾರ ಮಾಡುತ್ತಿದ್ದ ಉದಾಸಿ, ನಂತರ ಹಾನಗಲ್ ಪಟ್ಟಣದಲ್ಲಿ ರೈಸ್ ಮಿಲ್ ಆರಂಭಿಸಿದ್ದರು. ಆ ಬಳಿಕ ಹಿರಿಯರ ಒತ್ತಾಯಕ್ಕೆ ಮಣಿದು ಪುರಸಭೆ ಚುನಾವಣೆಗೆ ಸ್ಪರ್ಧೆ ಮಾಡುವ ಮೂಲಕ ರಾಜಕೀಯ ರಂಗಕ್ಕೆ ಪ್ರವೇಶಿಸಿದ್ದರು.
ಉದಾಸಿ ನಿಧನಕ್ಕೆ ಸಿಎಂ ಸಂತಾಪ ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರಮುಖ ಸುದ್ದಿ :-   ಸಚಿವ ಸಂಪುಟ ವಿಸ್ತರಣೆ ಅಂತಿಮ ಹಂತಕ್ಕೆ ? ದೆಹಲಿಗೆ ತೆರಳಲಿರುವ ಸಿಎಂ ಡಿಕೆ ಶಿವಕುಮಾರ

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement