ಚಿಕ್ಕೋಡಿ ಕೋವಿಡ್ ಪ್ರಯೋಗಾಲಯ ತಕ್ಷಣ ಆರಂಭಿಸಲು ಡಿಸಿಎಂ ಕಾರಜೋಳ ಸೂಚನೆ

ಬೆಳಗಾವಿ : ಚಿಕ್ಕೋಡಿಯಲ್ಲಿ ಕೋವಿಡ್ ಪರೀಕ್ಷೆಯ ಆರ್.ಟಿ-ಪಿಸಿಆರ್ ಪ್ರಯೋಗಾಲಯ ಸ್ಥಾಪನೆಗೆ ಅನುಮತಿ ಲಭಿಸಿರುವುದರಿಂದ ಸಿವಿಲ್ ಕಾಮಗಾರಿಗೆ ಕಾಲಹರಣ ಮಾಡದೇ ಲಭ್ಯವಿರುವ ಕಟ್ಟಡಗಳನ್ನು ಬಳಸಿಕೊಂಡು ಕೂಡಲೇ ಪ್ರಯೋಗಾಲಯ ಆರಂಭಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಸೂಚನೆ ನೀಡಿದರು.
ಕೋವಿಡ್ ಹಾಗೂ ನೆರೆಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪ್ರವಾಸಿಮಂದಿರದಲ್ಲಿ ಬುಧವಾರ (ಜೂ.9) ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
ಚಿಕ್ಕೋಡಿಯಲ್ಲಿ ಸಾಕಷ್ಟು ಸರಕಾರಿ ಕಟ್ಟಡಗಳು ಲಭ್ಯವಿರುವುದರಿಂದ ಅದರಲ್ಲಿಯೇ ಪ್ರಯೋಗಾಲಯವನ್ನು ಆರಂಭಿಸಬೇಕು. ಸಣ್ಣಪುಟ್ಟ ದುರಸ್ತಿ ಅಗತ್ಯವಿದ್ದರೆ ತಕ್ಷಣವೇ ಕೈಗೊಂಡು ಕಟ್ಟಡವನ್ನು ಆರೋಗ್ಯ ಇಲಾಖೆಗೆ ಹಸ್ತಾಂತರಿಸಬೇಕು.ಬಿಮ್ಸ್ ಪ್ರಯೋಗಾಲಯದ ಮಾದರಿಯಲ್ಲಿ ಚಿಕ್ಕೋಡಿಯಲ್ಲಿ ಪ್ರಯೋಗಾಲಯವನ್ನು ಎರಡು ದಿನಗಳಲ್ಲಿ ಸಿದ್ಧಪಡಿಸಿ ಕೊಡುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯವಿರುವ ಖಾಸಗಿ ವೈದ್ಯರನ್ನು ಅಥವಾ ನಿವೃತ್ತ ವೈದ್ಯರನ್ನು ಕೂಡ ಪಾವತಿ ಆಧಾರದ ಮೇಲೆ ನೇಮಕ ಮಾಡಿಕೊಳ್ಳಬೇಕು.ವೈದ್ಯಕೀಯ ಮೂಲಸೌಕರ್ಯಗಳನ್ನು ಕಲ್ಪಿಸಲು ಹಣದ ಕೊರತೆಯಿಲ್ಲ. ವಿವಿಧ ಮೂಲಗಳಿಂದ ಅನುದಾನ ಕೂಡ ಲಭ್ಯವಿದೆ. ತುರ್ತು ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಇದನ್ನು ಬಳಸಿಕೊಳ್ಳಬೇಕು ಎಂದು ಬಿಮ್ಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮಕ್ಕಳ ಚಿಕಿತ್ಸೆಗೆ ಸಿದ್ಧತೆಗೆ ಸೂಚನೆ:
ಸಂಭವನೀಯ ಮೂರನೇ ಅಲೆಯ ವೇಳೆ ಮಕ್ಕಳಿಗೆ ಸೋಂಕು ತಗುಲಬಹುದು ಎಂಬ ವರದಿಗಳಿರುವುದರಿಂದ ಈ ಬಗ್ಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಬಿಮ್ಸ್ ಸೇರಿದಂತೆ ಎಲ್ಲ ತಾಲ್ಲೂಕುಗಳಲ್ಲಿ ಕೂಡ ಸೂಕ್ತ ವೈದ್ಯಕೀಯ ವ್ಯವಸ್ಥೆ ಸಿದ್ಧಪಡಿಸಿಕೊಳ್ಳಬೇಕು ಎಂದು ಕಾರಜೋಳ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರವಾಹ ನಿರ್ವಹಣೆ ಸಿದ್ಧತೆಗೆ ನಿರ್ದೇಶನ:
ಹವಾಮಾನ ವರದಿ ಪ್ರಕಾರ ಮಳೆಯಾಗುವ ಸಾಧ್ಯತೆಗಳಿವೆ. ಆದರೆ ಮಹಾರಾಷ್ಟ್ರದ ಜಲಾಶಯಗಳಲ್ಲಿ ಶೇ.30 ರಷ್ಟು ನೀರು ಸಂಗ್ರಹ ಇರುವುದರಿಂದ ಸದ್ಯಕ್ಕೆ ಪ್ರವಾಹ ಸ್ಥಿತಿ ಉದ್ಭವಿಸುವುದಿಲ್ಲ. ಆದಾಗ್ಯೂ ನೆರೆಯ ಮಹಾರಾಷ್ಟ್ರ ಸೇರಿದಂತೆ ಎಲ್ಲ ಜಲಾಶಯ ಮಟ್ಟ ಹಾಗೂ ಮಳೆಯ ಪ್ರಮಾಣದ ಮೇಲೆ ನಿಗಾ ವಹಿಸಬೇಕು.
ಬಿತ್ತನೆ ಬೀಜ ಹಾಗೂ ಗೊಬ್ಬರ ಸಮರ್ಪಕ ವಿತರಣೆಯಾಗಬೇಕು. ಹೆಚ್ಚಿನ ದರಕ್ಕೆ ಬೀಜ ಮಾರಾಟವಾಗದಂತೆ ಎಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ನಿಗದಿತ ವೇಳೆಯಲ್ಲಿ ಲಸಿಕೆ ಹಾಕಬೇಕು. ಮೇವು ಕೊರತೆ ಇದ್ದರೆ ಖರೀದಿಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು.
ಪ್ಯಾಕೇಜ್ ನೆರವು ತಲುಪಿಸಲು ಸೂಚನೆ:
ಲಾಕಡೌನ್ ಸಂದರ್ಭದಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ವಿವಿಧ ವರ್ಗಗಳ ಜನರಿಗೆ ಎರಡು ಪ್ಯಾಕೇಜ್ ಗಳಲ್ಲಿ 1750 ಕೋಟಿ ರೂಪಾಯಿ ಪರಿಹಾರ ಧನ ಪ್ರಕಟಿಸಿದೆ. ಅವರಿಗೆ ಕೂಡಲೇ ಪರಿಹಾರಧನ ತಲುಪಿಸಲು ಕ್ರಮ ಕೈಗೊಳ್ಳಬೇಕು. ಸಂಘಟಿತ ಕಾರ್ಮಿಕರ ಪಟ್ಟಿ ಇರುವುದರಿಂದ ಅವರಿಗೆ ನೇರವಾಗಿ ನೆರವು ತಲುಪಲಿದೆ. ಉಳಿದಂತೆ 11 ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಪರಿಹಾರಧನ ವಿತರಿಸಬೇಕು ಎಂದರು.

ಪ್ರಮುಖ ಸುದ್ದಿ :-   ಹತ್ಯೆಗೀಡಾದ ನೇಹಾ ಹಿರೇಮಠ ಮನೆಗೆ ಸಿಎಂ ಸಿದ್ದರಾಮಯ್ಯ ಭೇಟಿ ; ಕುಟುಂಬಸ್ಥರಿಗೆ ಸಾಂತ್ವನ

ಆಕ್ಸಿಜನ್ ಕೊರತೆ ಇಲ್ಲ-ಜಿಲ್ಲಾಧಿಕಾರಿ ಹಿರೇಮಠ:
ಜಿಲ್ಲೆಯ ಮರಣ ಪ್ರಮಾಣ ಶೇ.1.60 ರಷ್ಟಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಒಟ್ಟಾರೆ 976 ಜನರು ಕೋವಿಡ್ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರತಿದಿನ 16 ಕೆ.ಎಲ್. ಆಕ್ಸಿಜನ್ ಬಳಕೆಯಾಗುತ್ತಿದ್ದು, ಸಾಕಷ್ಟು ಆಕ್ಸಿಜನ್ ದಾಸ್ತಾನು ಲಭ್ಯವಿದೆ. ರೆಮಿಡಿಸಿವಿರ್ ಸೇರಿದಂತೆ ಯಾವುದೇ ಕೊರತೆ ಇಲ್ಲ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದರು.
ಪಾಸಿಟಿವಿಟಿ ದರ ಕ್ರಮೇಣ ಕಡಿಮೆಯಾಗಿದ್ದು, ಪಾಸಿಟಿವಿಟಿ ದರ ಹೆಚ್ಚಾಗಿರುವ ಕಡೆಗಳಲ್ಲಿ ರ್ಯಾಟ್ ಪ್ರಮಾಣ ಹೆಚ್ಚಿಸಲಾಗಿದೆ.ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪೂರೈಸುವಂತೆ ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.
ಜಿಲ್ಲೆಯಲ್ಲಿ ಇದುವರೆಗೆ ಒಟ್ಟಾರೆ 204 ಬ್ಲ್ಯಾಕ್ ಫಂಗಸ್ ಪ್ರಕರಣಗಳು ವರದಿಯಾಗಿವೆ. ಬಿಮ್ಸ್ ನಲ್ಲಿ 136 ರೋಗಿಗಳು ದಾಖಲಾಗಿದ್ದರು ಎಂದು ಮಾಹಿತಿಯನ್ನು ನೀಡಿದರು.
ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವೈದ್ಯರ ನಿಯೋಜನೆಗೆ ಕ್ರಮ:
ಬ್ಲ್ಯಾಕ್ ಫಂಗಸ್ ಸರ್ಜರಿಗೆ ಎರಡರಿಂದ ಮೂರು ಗಂಟೆ ಬೇಕಾಗುತ್ತದೆ. ಹುಬ್ಬಳ್ಳಿ ಕಿಮ್ಸ್ ಹಾಗೂ ಗದಗ ವೈದ್ಯಕೀಯ ಕಾಲೇಜಿನಿಂದ ತಲಾ ಒಬ್ಬ ತಜ್ಞರನ್ನು ಕೂಡ ಬಿಮ್ಸ್ ಗೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಮ್ಸ್ ಆಡಳಿತ ಮೇಲುಸ್ತುವಾರಿ ಅಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತರು ಆಮ್ಲಾನ್ ಆದಿತ್ಯ ಬಿಸ್ವಾಸ್ ಹೇಳಿದರು.

ಪ್ರಮುಖ ಸುದ್ದಿ :-   ಬೆಂಗಳೂರು: ರೈಲಿಗೆ ಸಿಲುಕಿ ಮೂವರು ಸಾವು

5 / 5. 3

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement