ತೈಲ ಬೆಲೆ ಏರಿಕೆ: ರಾಜ್ಯಾದ್ಯಂತ ಪೆಟ್ರೋಲ್ ಬಂಕ್‌ಗಳ ಮುಂದೆ ಕಾಂಗ್ರೆಸ್ ಪ್ರತಿಭಟನೆ

posted in: ರಾಜ್ಯ | 0

ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರದ ನಿರಂತರ ಏರಿಕೆ ಖಂಡಿಸಿ ಕಾಂಗ್ರೆಸ್ ಇಂದು (ಶುಕ್ರವಾರ) 100 ನಾಟ್‌ಔಟ್ ಎಂಬ ವಿನೂತನ ಪ್ರತಿಭಟನೆಯನ್ನು ಪೆಟ್ರೋಲ್ ಬಂಕ್‌ಗಳ ಮುಂದೆ ನಡೆಸಿತು.
ಕೋವಿಡ್ ಮಹಾಮಾರಿ ಪಿಡುಗಿನಿಂದ ತತ್ತರಿಸಿರುವ  ಜನಸಾಮಾನ್ಯರ ಮೇಲೆ ಕೇಂದ್ರ ಸರ್ಕಾರವು ಪೆಟ್ರೋಲ್-ಡೀಸಲ್ ಬೆಲೆ ಹೆಚ್ಚಳದ ಗದಾ ಪ್ರಹಾರ ನಡೆಸಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಪಕ್ಷ, ದರ ಏರಿಕೆ ಖಂಡಿಸಿ 100 ನಾಟ್‌ಔಟ್ ಹೆಸರಿನಲ್ಲಿ ದೇಶದಾದ್ಯಂತ ಚಳವಳಿ ನಡೆಸಿದೆ.ರಾಜ್ಯದಲ್ಲೂ ೧೦೦ ನಾಟ್‌ಔಟ್ ಆಂದೋಲನದ ಭಾಗವಾಗಿ
ಐದು ಸಾವಿರಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳ ಮುಂದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ನಿಷೇಧಾಜ್ಞೆ ಜಾರಿ ಇದ್ದರೂ ನಿಷೇಧಾಜ್ಞೆ ಉಲ್ಲಂಘಿಸಿ ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ನಂತರ ಬಿಡುಗಡೆ ಮಾಡಿದರು.
ಬೆಂಗಳೂರಿನ ಬಹುತೇಕ ಪೆಟ್ರೋಲ್ ಬಂಕ್‌ಗಳ ಮುಂದೆ ಇಂದು (ಶುಕ್ರವಾರ) ಬೆಳಿಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್‌ನ ಧ್ವಜ ಹಿಡಿದು, ಬಿತ್ತಿ ಪತ್ರಗಳನ್ನು ಪ್ರದರ್ಶಿಸಿ ಪೆಟ್ರೋಲ್ ಬೆಲೆ ಏರಿಸಿರುವ ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.
ಪೆಟ್ರೋಲ್-ಡೀಸೆಲ್ ದರ ವಿರೋಧಿಸಿ ರಾಜ್ಯಾದ್ಯಂತ ಐದು ದಿನಗಳ ಕಾಲ ಪೆಟ್ರೋಲ್ ಬಂಕ್ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಲಿದೆ.
ಡಿಕೆಶಿ-ಸಿದ್ದರಾಮಯ್ಯ ಭಾಗಿ
ಬೆಂಗಳೂರಿನ ಶೇಷಾದ್ರಿಪುರಂನ ಶಿವಾನಂದ ಸರ್ಕಲ್‌ನ ಸಮೀಪದಲ್ಲಿರುವ ರೆಡ್ಡಿ ಪೆಟ್ರೋಲ್ ಬಂಕ್ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿರಿಯ ಮುಖಂಡರಾದ ಆರ್.ವಿ. ದೇಶ್‌ಪಾಂಡೆ, ದಿನೇಶ ಗುಂಡೂರಾವ್ ಸೇರಿದಂತೆ ಹಲವು ನಾಯಕರು, ಕಾರ್ಯಕರ್ತರುಗಳು ಭಾಗವಹಿಸಿದ್ದರು. .
ಪೆಟ್ರೋಲ್-ಡೀಸೆಲ್ ದರ ಏರಿಕೆಯನ್ನು ಅಣಕಿಸುವಂತೆ ಕಾಂಗ್ರೆಸ್ ಕಾರ್ಯಕರ್ತರು ವೃತ್ತಕಾರಾವಾಗಿ ನಿಂತು ತಟ್ಟೆ ಬಡಿದು ದರ ಏರಿಕೆ ಅಣಕಿಸಿದರು.
ಬಂಧನ
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ದರು.
ನಂತರ ಈ ನಾಯಕರುಗಳನ್ನು ಬಿಡುಗಡೆ ಮಾಡಲಾಯಿತು.
ಬೆಂಗಳೂರಿನಲ್ಲಿ ಸೆಕ್ಷೆನ್ 144 ಜಾರಿಯಲ್ಲಿದ್ದು, ನಿಷೇಧಾಜ್ಞೆ ಉಲ್ಲಂಘಿಸಿ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಿದ ವಿರೋಧ ಪಕ್ಷದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲ ಕೈ ನಾಯಕರನ್ನು ವಶಕ್ಕೆ ಪಡೆದ ಪೊಲೀಸರು ನಂತರ ಬಿಡುಗಡೆ ಮಾಡಿದರು.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

4.7 / 5. ಒಟ್ಟು ವೋಟುಗಳು 3

ನಿಮ್ಮ ಕಾಮೆಂಟ್ ಬರೆಯಿರಿ