ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿಯಲ್ಲಿ ಭಾರೀ ಪ್ರಮಾಣದಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಇಂದಿನಿಂದ ಮಳೆಯ ಆರ್ಭಟ ತೀವ್ರಗೊಳ್ಳಲಿದೆ.
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಇನಷ್ಟು ಜೋರಾಗಲಿದ್ದು ಈ ಮೂರು ಜಿಲ್ಲೆಗಳಲ್ಲಿ ಇಂದು (ಸೋಮವಾರ) ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ ೧೭ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ೧ ವಾರಗಳ ಕಾಲ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ ೧೬ ಹಾಗೂ ೧೭ರಂದು ಕಿತ್ತಳೆ ಅಲರ್ಟ್ ಘೋಷಿಸಲಾಗಿದ್ದು, ಉಳಿದ ದಿನಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೀಗಾಗಿ, ಉತ್ತರ ಒಳನಾಡಿನಲ್ಲಿ ಜೂನ್ ೧೪ರಿಂದ ೨ ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇನ್ನೂ ೩ ದಿನ ಅಧಿಕ ಮಳೆಯಾಗಲಿದೆ.
ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇಂದಿನಿಂದ ೧ ವಾರ ಹಳದಿ ಅಲರ್ಟ್ ಘೋಷಿಸಲಾಗಿದೆ.
ಉತ್ತಮ ಮಳೆಯಾಗುತ್ತಿರುವುದರಿಂದ ರಾಜ್ಯದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ.


ನಿಮ್ಮ ಕಾಮೆಂಟ್ ಬರೆಯಿರಿ