ಬೆಂಗಳೂರು: ದೇಶಾದ್ಯಂತ ನಾಳೆ (ಜೂನ್ 21) ಲಸಿಕಾ ಅಭಿಯಾನ ನಡೆಸಲು ಪ್ರಧಾನಿ ನರೇಂದ್ರ ಮೋದಿ ಸೂಚಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಭಾನುವಾರ ವೀಡಿಯೊ ಸಂವಾದ ನಡೆಸಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಸಹ ಈ ವೀಡಿಯೊ ಸಂವಾದದಲ್ಲಿ ಪಾಲ್ಗೊಂಡಿದ್ದರು.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ವೀಡಿಯೊ ಸಂವಾದದಲ್ಲಿ ಭಾಗವಹಿಸಿದ್ದರು.
ನಾಳಿನ ಕೊರೊನಾ ಲಸಿಕಾ ಅಭಿಯಾನ, ಯೋಗ ದಿನಾಚರಣೆ ಸಂಬಂಧ ಜೆ.ಪಿ. ನಡ್ಡಾ ಅವರು ಕೆಲ ಸಲಹೆ ಸೂಚನೆಗಳನ್ನು ನೀಡಿ ಕೇಂದ್ರ ಸರ್ಕಾರ 7 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸಲು ಅಗತ್ಯ ಕ್ರಮಕೈಗೊಳ್ಳುವಂತೆಯೂ ಸಲಹೆ ಮಾಡಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದ ಕೊರೊನಾ ಸ್ಥಿತಿಗತಿ, ಸೋಂಕು ನಿಯಂತ್ರಣ, ಲಾಕ್ಡೌನ್ ಸಡಿಲಿಕೆ ಎಲ್ಲವನ್ನೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಗಮನಕ್ಕೆ ತಂದರು.
ನಾಳೆಯ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಒಂದೇ ದಿನ 7 ಲಕ್ಷ ಡೋಸ್ ಲಸಿಕೆ ನೀಡುವ ಗುರಿಯನ್ನು ಹೊಂದಲಾಗಿದ್ದು, ಅದಕ್ಕೆ ಮಾಡಿಕೊಂಡಿರುವ ಸಿದ್ಧತೆ ಎಲ್ಲದರ ಬಗ್ಗೆಯೂ ಮುಖ್ಯಮಂತ್ರಿಗಳು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಮಾಹಿತಿ ನೀಡಿದರು.
ಮುಖ್ಯಮಂತ್ರಿಗಳ ಜತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಸಹ ಪಾಲ್ಗೊಂಡಿದ್ದರು.


ನಿಮ್ಮ ಕಾಮೆಂಟ್ ಬರೆಯಿರಿ