ಜಲಜೀವನ್ ಮಿಷನ್ ಯೋಜನೆಯಡಿ ಈ ವರ್ಷ 25 ಲಕ್ಷ ಗ್ರಾಮೀಣ ಮನೆಗಳಿಗೆ ನಲ್ಲಿ ನೀರಿನ ಸಂಪರ್ಕ: ಸಿಎಂ ಬಿಎಸ್‌ವೈ

ಬೆಂಗಳೂರು: ಪ್ರತಿ ಮನೆಗೆ ನಲ್ಲಿ ನೀರಿನ ಸಂಪರ್ಕ ಒದಗಿಸುವ ಜಲಜೀವನ್ ಮಿಷನ್ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 25 ಲಕ್ಷ ಮನೆಗಳಿಗೆ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಜಲಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ 91.91 ಲಕ್ಷ ಗ್ರಾಮೀಣ ಕುಟುಂಬಗಳಿದ್ದು, ಈಗಾಗಲೇ 28 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಕ್ರಿಯಾತ್ಮಕ ನಳಗಳ ಸಂಪರ್ಕ ಒದಗಿಸಲಾಗಿದೆ. 2021-22ರಲ್ಲಿ ಇನ್ನೂ 25.17 ಲಕ್ಷ ಮನೆಗಳಿಗೆ ಸಂಪರ್ಕ ಒದಗಿಸುವ ಗುರಿಯನ್ನು ಕಾಲಮಿತಿಯಲ್ಲಿಒದಗಿಸಬೇಕು ಎಂದು ನಿರ್ದೇಶನ ನೀಡಿದರು.
ರಾಜ್ಯದಲ್ಲಿ ಈವರೆಗೆ 435 ಬಹುಗ್ರಾಮ ಯೋಜನೆಗಳು ಪೂರ್ಣಗೊಂಡಿವೆ. 69 ಯೋಜನೆಗಳು ಪ್ರಗತಿಯಲ್ಲಿವೆ. 30 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. 2021-22ನೇ ಸಾಲಿನಲ್ಲಿ 161 ಯೋಜನೆಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ರಾಜ್ಯದಲ್ಲಿ ನದಿ ಮೂಲದಿಂದ ನೀರು ದೊರೆಯುವ ಸ್ಥಳದಲ್ಲಿ ಆದ್ಯತೆಯ ಮೇರೆಗೆ ಬಹುಗ್ರಾಮ ಯೋಜನೆ ಅನುಷ್ಠಾನಗೊಳಿಸುವಂತೆ ಯಡಿಯೂರಪ್ಪ ಸೂಚಿಸಿದರು.ಈ ಕುರಿತು ಎಲ್ಲ ಜಿಲ್ಲೆಗಳ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸುವುದಾಗಿ ಅವರು ತಿಳಿಸಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಇತರ ಹಿರಿಯ ಅಧಿಕಾರಿಗಳಿದ್ದರು.

ಪ್ರಮುಖ ಸುದ್ದಿ :-   ಎಸ್‌ಐಟಿ ನೋಟಿಸ್​: ವಿಚಾರಣೆಗೆ ಹಾಜರಾಗಲು ಸಮಯ ಕೇಳಿದ ಪ್ರಜ್ವಲ್‌ ; ಪತ್ರದಲ್ಲೇನಿದೆ..?

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement