ಕೋವಿಡ್ ಪ್ಯಾಕೇಜ್: 20,713 ಕಲಾವಿದರಿಗೆ ತಲಾ 3 ಸಾವಿರ ರೂ.ಗಳ ನೆರವಿಗೆ ಸಿಎಂ ಬಿಎಸ್‌ವೈ ಚಾಲನೆ

ಬೆಂಗಳೂರು: ಕೊರೊನಾ 2ನೇ ಅಲೆಯಿಂದ ಸಂಕಷ್ಟಕ್ಕೆ ಸಿಲುಕಿದ ಕಲಾವಿದರಿಗೆ 3,000 ರೂ.ಗಳ ಆರ್ಥಿಕ ನೆರವು ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. 20 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೇರ ಬ್ಯಾಂಕ್ ವರ್ಗಾವಣೆ ವ್ಯವಸ್ಥೆ ಮೂಲಕ ಒಟ್ಟು 6.23 ಕೋಟಿ ರೂ. ನೆರವು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಮಂಗಳವಾರ ಕೋವಿಡ್-19ರ 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರುಗಳಿಗೆ ಸರ್ಕಾರದಿಂದ ಆರ್ಥಿಕ ನೆರವು ನೀಡುವುದಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೊರೊನಾ 2ನೇ ಅಲೆಯಿಂದ ಸಂಕಷ್ಟಕ್ಕೀಡಾದ ದುರ್ಬಲ ವರ್ಗದವರಿಗೆ ಒಟ್ಟು 2,050 ಕೋಟಿ ರೂ.ಗಳಿಗೂ ಅಧಿಕ ಮೊತ್ತದ ಆರ್ಥಿಕ ನೆರವಿನ ಪ್ಯಾಕೇಜ್ ಘೋಷಿಸಲಾಗಿದೆ, ಈಗಾಗಲೇ ಹೂವು, ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ, ಬೀದಿಬದಿ ವ್ಯಾಪಾರಿಗಳು ಮೊದಲಾದವರಿಗೆ ಡಿ.ಬಿ.ಟಿ. ಮೂಲಕ ಆರ್ಥಿಕ ನೆರವನ್ನು ನೇರವಾಗಿ ಅವರ ಖಾತೆಗೆ ವರ್ಗಾಯಿಸಲಾಗಿದೆ. ಉಳಿದ ವರ್ಗಗಳಿಗೂ ಶೀಘ್ರವೇ ನೆರವು ನೀಡಲು ಕ್ರಮ ಕೈಗೊಳ್ಳಾಗುತ್ತದೆ ಎಂದರು.
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿ, ಕಲಾವಿದರ ದಾಖಲೆಗಳನ್ನು ಪರಿಶೀಲಿಸಿ, ಅತ್ಯಂತ ಪಾರದರ್ಶಕವಾಗಿ ನೆರವು ನೀಡಲು ಮಂಜೂರಾತಿ ನೀಡಲಾಗಿದೆ. ಫಲಾನುಭವಿಗಳು ಡಿಬಿಟಿ ಆಯಪ್ ಮುಖಾಂತರ ತಮ್ಮ ಆಧಾರ್ ಸಂಯೋಜಿತ ಬ್ಯಾಂಕ್ ಖಾತೆಗೆ ನೆರವು ವರ್ಗಾವಣೆ ಆಗಿರುವುದನ್ನು ಖಾತರಿ ಪಡಿಸಿಕೊಳ್ಳಬಹುದು ಎಂದು ಯಡಿಯೂರಪ್ಪ ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಸಚಿವ ಅರವಿಂದ ಲಿಂಬಾವಳಿ ಮಾತನಾಡಿ, ಮೊದಲ ಅಲೆಯ ಸಂದರ್ಭದಲ್ಲಿಯೂ 17 ಸಾವಿರಕ್ಕೂ ಹೆಚ್ಚು ಕಲಾವಿದರಿಗೆ ನೆರವು ನೀಡಲಾಗಿತ್ತು. ಈಗ ಮತ್ತೆ ಕಲಾವಿದರಿಗೆ ತಲಾ 3 ಸಾವಿರ ರೂ. ನೆರವು ನೀಡಲಾಗುತ್ತಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಜೆ.ರವಿಶಂಕರ್, ನಿರ್ದೇಶಕ ಎಸ್. ರಂಗಪ್ಪ, ಮೊದಲಾದವರು ಭಾಗವಹಿಸಿದ್ದರು.

ಪ್ರಮುಖ ಸುದ್ದಿ :-   ವಿಧಾನಸೌಧ ಸ್ಫೋಟದ ಎಐ ವಿಡಿಯೊ ಸೃಷ್ಟಿಸಿ ಹಂಚಿಕೊಂಡ ಆರೋಪ : ಕಿಡಿಗೇಡಿ ಬಂಧನ

4 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement