ಉನ್ನತ ಶಿಕ್ಷಣದ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳ ವಿತರಣೆಗೆ ಇಂದು ಸಿಎಂ ಚಾಲನೆ

ಬೆಂಗಳೂರು: ಉನ್ನತ ಶಿಕ್ಷಣ ಕಲಿಕೆಯಲ್ಲಿ ಇಡೀ ದೇಶದಲ್ಲೇ ಮೊದಲು ಎನ್ನುವ ಹೆಗ್ಗಳಿಕೆಗೆ ಹೊಂದಿರುವ ಕಲಿಕಾ ನಿರ್ವಹಣಾ ವ್ಯವಸ್ಥೆ(Learning Management System) ಬೋಧನೆ-ಕಲಿಕೆಗೆ ಅನುಕೂಲವಾಗುವಂತೆ 1.55 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡುವ ಮಹತ್ವದ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಜೂನ್‌ 23ರಂದು ಬೆಳಗ್ಗೆ 11 ಗಂಟೆಗೆ ಚಾಲನೆ ನೀಡಲಿದ್ದಾರೆ.
ಕೋವಿಡ್‌ ಸಂಕಷ್ಟದ ಹಿನ್ನೆಲೆಯಲ್ಲಿ ನಗರ ಮತ್ತು ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಯಲ್ಲಿ ತಾರತಮ್ಯ ನಿವಾರಣೆ ಹಾಗೂ ಡಿಜಿಟಲ್‌ ಅಂತರವೂ ಅಳಿಸಿ ಹಾಕುವ ಧ್ಯೇಯದೊಂದಿಗೆ ಸರ್ಕಾರ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಿಸುತ್ತಿದೆ. ಈ ಯೋಜನೆಗೆ ಉನ್ನತ ಶಿಕ್ಷಣ ಇಲಾಖೆ ಜೊತೆಗೆ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳು ಕೈಜೋಡಿಸಿವೆ ಎಂದು ಉಪಮುಖ್ಯಮಂತ್ರಿ ಡಾ.ಸಿಎ.ನ್.‌ಅಶ್ವತ್ಥನಾರಾಯಣ ತಿಳಿಸಿದರು.
ಮುಖ್ಯಮಂತ್ರಿಗಳು ಬೆಂಗಳೂರಿನಲ್ಲಿ ಸಾಂಕೇತಿಕವಾಗಿ ಟ್ಯಾಬ್ಲೆಟ್‌ ಪಿಸಿಗಳನ್ನು ವಿತರಣೆ ಮಾಡುವರು. ಬಳಿಕ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗಳು, ಶಾಸಕರು ಆಯಾ ಜಿಲ್ಲೆಗಳಲ್ಲಿ ವಿತರಣೆ ಮಾಡುವರು. ವರ್ಚುಯಲ್‌ ವೇದಿಕೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೆಲ ವಿದ್ಯಾರ್ಥಿಗಳು ಕೂಡ ಅಭಿಪ್ರಾಯ ಹಂಚಿಕೊಳ್ಳುವರು ಎಂದು ಅವರು ಮಾಹಿತಿ ನೀಡಿದರು.
ರಾಜ್ಯದ 430 ಸರಕಾರಿ ಪ್ರಥಮ ದರ್ಜೆ ಕಾಲೇಜು, 87 ಸರಕಾರಿ ಪಾಲಿಟೆಕ್ನಿಕ್ ಹಾಗೂ 14 ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 1.55 ಲಕ್ಷ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ ಪಿಸಿಗಳನ್ನು ನೀಡಲಾಗುವುದು ಎಂದು ತಿಳಿಸಿದರು.
ಈ ಯೋಜನೆಗಾಗಿ ರಾಜ್ಯ ಸರಕಾರ 163 ಕೋಟಿ ರೂ. ವೆಚ್ಚ ಮಾಡಿದೆ. ಇದರ ಜತೆಯಲ್ಲೇ ಸರ್ಕಾರಿ ಕಾಲೇಜುಗಳಲ್ಲಿ 2,500 ಸ್ಮಾರ್ಟ್‌ ಕ್ಲಾಸ್‌ ರೂಂಗಳಿಗೆ ಚಾಲನೆ ನೀಡಲಾಗುತ್ತಿದ್ದು, ನಾಳೆಯ ಕಾರ್ಯಕ್ರಮದ ನಿಮಿತ್ತ ಬ್ಯಾಂಕ್ವೆಟ್‌ ಹಾಲ್‌ನಲ್ಲಿ ಸ್ಮಾರ್ಟ್‌ ಕ್ಲಾಸ್‌ ರೂಂ ಒಂದರ ಪ್ರಾತ್ಯಕ್ಷಿಕೆಯೂ ಇರುತ್ತದೆ ಎಂದರು.
ಈ ಟ್ಯಾಬ್ಲೆಟ್‌ಗಳಿಗೆವೈಫೈ, ಸಿಮ್‌ ಬಳಕೆಯಿಂದ ಇವುಗಳಿಗೆ ಇಂಟರ್‌ನೆಟ್‌ ಸಂಪರ್ಕ ಕಲ್ಪಿಸಬಹುದು. ವೈಫೈ ಲಭ್ಯತೆ ಇಲ್ಲದ ಕಡೆಗಳಲ್ಲಿ ಸಿಮ್‌ ಬಳಕೆಯ ಮೂಲಕವೇ ಆನ್‌ಲೈನ್‌ ತರಗತಿಯಲ್ಲಿ ಪಾಲ್ಗೊಳ್ಳಬಹುದು ಎಂದು ಅವರು ತಿಳಿಸಿದರು.
ಸರ್ಕಾರಿ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಬಹುತೇಕ ಎಲ್ಲ ವಿದ್ಯಾರ್ಥಿಗಳು ಸಾಮಾಜಿಕ, ಆರ್ಥಿಕವಾಗಿ ಹಿಂದುಳಿದವರಾಗಿದ್ದು ಅವರ ಕಲಿಕೆಗೆ ಹೆಗಲು ಕೊಡಬೇಕಾದ ಹೊಣೆಗಾರಿಕೆ ಸರಕಾರದ್ದು. ಇಂಥ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್‌ಗಳನ್ನು ನೀಡುವ ಮೂಲಕ ಗ್ರಾಮೀಣ ಕರ್ನಾಟಕದಲ್ಲಿ ಸರ್ಕಾರಿ-ಖಾಸಗಿ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ನಡುವಿನ ಡಿಜಿಟಲ್‌ ತಾರತಮ್ಯವನ್ನು ಸಂಪೂರ್ಣವಾಗಿ ಅಳಿಸಿ ಹಾಕಿದಂತಾಗಿದೆ ಎಂದು ಹೇಳಿದ್ದಾರೆ.

ಪ್ರಮುಖ ಸುದ್ದಿ :-   ಸಿಎಂ ಸಿದ್ದರಾಮಯ್ಯ ಹೇಳಿಕೆಯಿಂದ ನಮ್ಮ ಮನೆತನದ ಗೌರವ ಹಾಳಾಗುತ್ತಿದೆ : ನೇಹಾ ತಂದೆ ನಿರಂಜನ ಹಿರೇಮಠ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement