ಕರ್ನಾಟಕದಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಶೇ.11ರಷ್ಟು ಕೊರತೆ..!

posted in: ರಾಜ್ಯ | 0

ಬೆಂಗಳೂರು: ರಾಜ್ಯದಲ್ಲಿ ಜೂನ್ 1ರಿಂದ ನಿನ್ನೆಯವರೆಗೆ (ಜುಲೈ 6ರ ವರೆಗೆ) ನೈರುತ್ಯ ಮುಂಗಾರಿನಲ್ಲಿ ಶೇ.11ರಷ್ಟು ಕೊರತೆ ಉಂಟಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಈ ಬಾರಿಯ ಮುಂಗಾರು ಮಳೆ ವಾಡಿಕೆ ಪ್ರಮಾಣದಷ್ಟು ರಾಜ್ಯದಲ್ಲಿ ಆಗಿಲ್ಲ. ವಾಡಿಕೆಗಿಂತ ಶೇ.11ರಷ್ಟು ಮಳೆ ಕೊರತೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ವಿಶೇಷ ನಿರ್ದೇಶಕ ವಿ.ಎಸ್. ಪ್ರಕಾಶ್ ತಿಳಿಸಿದ್ದಾರೆ ಎಂದು ಈ ಸಂಜೆ ವರದಿ ಮಾಡಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಕೊರತೆ ಶೇ.10ಕ್ಕಿಂತ ಹೆಚ್ಚಾಗಿದೆ. ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಚದುರಿದಂತೆ ಅಲ್ಲಲ್ಲಿ ಮಳೆಯಾಗುತ್ತಿದೆ. ಆದರೆ ರೈತರ ನಿರೀಕ್ಷೆಗೆ ತಕ್ಕಂತಹ ಮಳೆಯಾಗುತ್ತಿಲ್ಲ ಎಂದು ಅವರು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.
ಕಳೆದ ಜೂ.29ರಿಂದ ಜುಲೈ 5ರ ನಡುವಿನ ಅವಧಿಯಲ್ಲಿ ರಾಜ್ಯದಲ್ಲಿ ಶೇ.76ರಷ್ಟು ಮಳೆ ಕೊರತೆ ಉಂಟಾಗಿದೆ. ಉತ್ತರ ಒಳನಾಡಿನಲ್ಲಿ ಶೇ.72, ಅತಿಹೆಚ್ಚು ಮಳೆಯಾಗುತ್ತಿದ್ದ ಮಲೆನಾಡು ಭಾಗದಲ್ಲಿ ಶೇ.89 ಹಾಗೂ ಕರಾವಳಿ ಭಾಗದಲ್ಲಿ ಶೇ.83ರಷ್ಟು ಮಳೆ ಕೊರತೆ ಉಂಟಾಗಿದೆ.
ಕೃಷ್ಣಾನದಿ ಪಾತ್ರ ಹೊರತುಪಡಿಸಿದರೆ ಉಳಿದ ನದಿಗಳ ಜಲಾಶಯಗಳಿಗೂ ನಿರೀಕ್ಷಿತ ಪ್ರಮಾಣದಲ್ಲಿ ಒಳ ಹರಿವಿಲ್ಲ. ಮುಂಗಾರು ಹಂಗಾಮಿನ ಬಿತ್ತನೆ ಕಾಲವಾಗಿದೆ. ಮಳೆಯ ಕಣ್ಣಾಮುಚ್ಚಾಲೆ ಆಟದಿಂದ ರೈತರು ಕಂಗಾಲಾಗಿದ್ದಾರೆ. ಭೂಮಿಯಲ್ಲಿ ತೇವಾಂಶ ಕೊರತೆ ಇದೆ.
ಮಳೆಯ ಅನಿಶ್ಚಿತತೆಯಿಂದಾಗಿ ರೈತರ ಆತಂಕ ಇಮ್ಮಡಿಸಿದೆ. ಸದ್ಯಕ್ಕೆ ರಾಜ್ಯದ ಕೆಲವೆಡೆ ಚದುರಿದಂತೆ ಮಳೆಯಾಗುತ್ತಿದ್ದು, ಇನ್ನು ಎರಡು ದಿನ ಮುಂದುವರೆಯುವ ಸಾಧ್ಯತೆಯಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಉತ್ತಮ ಮಳೆಯಾಗದಿದ್ದರೆ ಬಿತ್ತನೆಗೆ ತೊಂದರೆಯಾಗಲಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ