ಎಸ್​ಎಸ್​ಎಲ್​ಸಿ ಪರೀಕ್ಷೆ- 2021: ಭಯ ಬಿಡಿ..ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿಗೆ ಪ್ರವೇಶ

ಬೆಂಗಳೂರು: ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ನೋಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿಯುಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಎಸ್​ಎಸ್​ಎಲ್​ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ” ಎಂಬ ಧ್ಯೇಯದೊಂದಿಗೆ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳೊಂದಿಗೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ನಡೆದ ಮುಕ್ತ ಸಂವಾದದಲ್ಲಿ ವಿದ್ಯಾರ್ಥಿಗಳ ಪ್ರಶ್ನೆ ಮತ್ತು ಸಲಹೆಗಳಿಗೆ ಉತ್ತರಿಸಿದ ಅವರು, ಎಲ್ಲರೂ ಪಾಸಾಗುವುದರಿಂದ ಪಿಯು ಪ್ರವೇಶ ಸಮಸ್ಯೆ ಬಗ್ಗೆ ಯಾರಿಗೂ ಯಾವುದೇ ಆತಂಕ ಬೇಡ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಿದ್ಧವಾಗಿರುವುದರಿಂದ ಧೈರ್ಯದಿಂದ ಪರೀಕ್ಷೆ ಬರೆಯುವುದರತ್ತ ಗಮನ ಹರಿಸಿ. ನಾವು ನಿಮ್ಮನ್ನು ಪಿಯುಸಿ ತರಗತಿಗಳಿಗೆ ಪ್ರವೇಶ ನೀಡಲು ಎಲ್ಲ ವ್ಯವಸ್ಥೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.
ರಾಜ್ಯದ ಸರ್ಕಾರಿ ಪಿಯು ಕಾಲೇಜಗಳಲ್ಲಿ ಪಿಯು ಸೀಟುಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಖಾಸಗಿ ಶಾಲೆಗಳಿಂದ ಪಿಯು ಸೀಟುಗಳ ಹೆಚ್ಚಳದ ಕೋರಿಕೆಗಳು ಬಂದರೆ ಪರಿಗಣಿಸಿ ಎಲ್ಲ ವಿದ್ಯಾರ್ಥಿಗಳಿಗೂ ಪ್ರವೇಶ ದೊರೆಯುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಸುರೇಶಕುಮಾರ್ ತಿಳಿಸಿದರು.

ಕೊರೋನಾ- ಭಯ ಬೇಡ:
ನಾವು ಪರೀಕ್ಷೆ ಮಾಡಲು ಮುಂದಾದಾಗ ನಮ್ಮ ಮುಖ್ಯಮಂತ್ರಿಯವರು ಕೊವಿಡ್ ಪ್ರಕರಣಗಳು ಕಡಿಮೆಯಾದರೆ ಮಾತ್ರವೇ ಪರೀಕ್ಷೆ ಮಾಡಲು ಮುಂದಾಗುತ್ತೇವೆ ಎಂದು ಹೇಳಿದಂತೆ ಈಗ ನಾವು ಪರೀಕ್ಷೆ ನಡೆಸಲು ಮುಂದಾಗಿದ್ದೇವೆ ಎಂದು ಸುರೇಶಕುಮಾರ್ ತಿಳಿಸಿದರು.
ಕಳೆದ ವರ್ಷ ಪರೀಕ್ಷೆ ನಡೆಸಿದಾಗ ಕೊವಿಡ್ ಪಾಸಿಟಿವಿಟಿ ದರ 13.2ರಷ್ಟಿದ್ದರೆ ಅದು ಈ ವರ್ಷ 1.7ರ ಆಸುಪಾಸಿನಲ್ಲಿದೆ, ಈ ಬಾರಿಯ ಪರೀಕ್ಷೆ ಕಳೆದ ಬಾರಿಯ ಪರೀಕ್ಷೆಗಿಂತ ಹೆಚ್ಚಿನ ಸುರಕ್ಷಿತ ವಾತಾವರಣದಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಳು ದ್ವಿಗುಣವಾಗಿವೆ. ಪರೀಕ್ಷಾ ಕೊಠಡಿಗಳು ಮೂರು ಪಟ್ಟು ಹೆಚ್ಚಾಗಿವೆ. ಪ್ರಶ್ನೆ ಪತ್ರಿಕೆಗೆ ಉತ್ತರಿಸಲು ಸಾಕಷ್ಟು ಸಮಯಾವಕಾಶ ದೊರೆಯಲಿದೆ. ಕೇವಲ ಎರಡೇ ದಿನಗಳ ಕಾಲ ಪರೀಕ್ಷೆ ನಡೆಯುವುದರಿಂದ ಯಾವುದೇ ತೊಂದರೆಗೆ ಅವಕಾಶವೇ ಇಲ್ಲ ಎಂದು ತಿಳಿಸಿದರು.
ರಾಜ್ಯದ 34ಶೈಕ್ಷಣಿಕ ಜಿಲ್ಲೆಗಳ ಡಿಡಿಪಿಐ ಕಚೇರಿ ಮತ್ತು ಡಯಟ್ ಕೇಂದ್ರಗಳಲ್ಲಿ ಹಾಜರಿದ್ದ ಮಕ್ಕಳು ಸಚಿವರೊಂದಿಗೆ ಪರೀಕ್ಷೆ ಕುರಿತ ತಮ್ಮ ಶಂಕೆಗಳನ್ನು ನಿವಾರಿಸಿಕೊಂಡರು. 90 ಮಕ್ಕಳು ನೇರವಾಗಿ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಪರೀಕ್ಷೆ ನಡೆಸಲು ರಹಸ್ಯ ಕಾರ್ಯಸೂಚಿ ಇಲ್ಲ:
ಪರೀಕ್ಷೆ ನಡೆಸುವುದು ಸರ್ಕಾರಕ್ಕೆ ಪ್ರತಿಷ್ಠೆ ಇಲ್ಲವೇ ಹಠದ ವಿಷಯವಲ್ಲ. ಪರೀಕ್ಷೆ ಕೈಬಿಡುವುದು ಯಾರಿಗೇ ಆಗಲಿ ಸುಲಭದ ಸಂಗತಿ. ಆದರೆ ನಾವು ನಮ್ಮ ಮಕ್ಕಳ ಭವಿಷ್ಯ ಮತ್ತು ಹಿತದೃಷ್ಟಿಯಿಂದ ಅವರ ಮುಂದಿನ ಶಿಕ್ಷಣ ಅಯ್ಕೆಯ ಅನುಕೂಲಕ್ಕಾಗಿ ಪರೀಕ್ಷೆ ನಡೆಸುತ್ತಿದ್ದೇವೆ ಎಂದು ಸಚಿವರು ಪುನರುಚ್ಛರಿಸಿದರು. ಪರೀಕ್ಷೆ ನಡೆಸುವುದರಲ್ಲಿ ಶಿಕ್ಷಣ ಇಲಾಖೆಯ ಯಾವುದೇ ರಹಸ್ಯ ಕಾರ್ಯಸೂಚಿಯೇನಿಲ್ಲ ಎಂದೂ ಅವರು ಸ್ಪಷ್ಟಪಡಿಸಿದರು.
ರಾಜ್ಯದ ಆರೋಗ್ಯ ಇಲಾಖೆ ಮತ್ತು ರಾಜ್ಯದ ಕೊವಿಡ್ ತಾಂತ್ರಿಕ ಸಲಹಾ ಸಮಿತಿ ನೀಡಿದ ನಿರ್ದೇಶನದ ಆಧಾರದಲ್ಲೇ ಅವರು ರೂಪಿಸಿದ ಎಸ್‌ಒಪಿಯನ್ವಯವೇ ಪರೀಕ್ಷೆ ನಡಯುತ್ತಿದೆ. ಅದಕ್ಕೆ ರಾಜ್ಯದ ಮುಖ್ಯಮಂತ್ರಿಯವರೂ ಅನುಮೋದನೆ ನೀಡಿದ್ದಾರೆಂದೂ ಸುರೇಶ್ ಕುಮಾರ್ ತಿಳಿಸಿದರು.
ಶೀಘ್ರ ಕಾರ್ಯಪಡೆ ಕಾರ್ಯಾರಂಭ:
ಬರುವ ಶೈಕ್ಷಣಿಕ ವರ್ಷದಲ್ಲಿ ಕಲಿಕಾ ನಿರಂತರತೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ವರದಿ ನೀಡಲು ಸಾಶಿಇ ಆಯುಕ್ತರ ನೇತೃತ್ವದಲ್ಲಿ ಶಿಕ್ಷಣ ತಜ್ಞರು, ಅಧಿಕಾರಿಗಳು, ಪೋಷಕರು, ಖಾಸಗಿ ವಿದ್ಯಾಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಶಿಕ್ಷಣದ ಮುಂದುವರಿಕೆ ಕುರಿತಂತೆ ಕ್ರಿಯಾಯೋಜನೆಯನ್ನು ರೂಪಿಸಲಿದೆ ಎಂದು ಸಚಿವರು ವಿವರಿಸಿದರು.
ಶಾಲೆಗಳಿಗೆ ಕುಡಿಯುವ ನೀರು-ಶೌಚಾಲಯ ವ್ಯವಸ್ಥೆ..:
ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆಗಳಿಲ್ಲದ ಗ್ರಾಮೀಣ ಪ್ರದೇಶದ ಶಾಲೆಗಳಲ್ಲಿ ಈ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪಕ ಕಾರ್ಯಕ್ರಮ ಹಾಕಿಕೊಂಡಿದ್ದು, ಅದನ್ನು ಸಾಕಾರಗೊಳಿಸಲಾಗುತ್ತದೆ ಎಂದು ಸಚಿವರು ಹೇಳಿದರು.
ಇಂಟರ್ನೆಟ್ ಬಲಪಡಿಸಲು ಕ್ರಮ:
ಗ್ರಾಮೀಣ ಪ್ರದೇಶದ ಹಲವಾರು ಮಕ್ಕಳು ಈ ಪರ್ಯಾಯ ಬೋಧನೆಯ ವಿಧಾನಗಳಾದ ದೂರದರ್ಶನ ಚಂದನ, ಮೊಬೈಲ್, ಲ್ಯಾಪ್ ಟಾಪ್ ಸೌಲಭ್ಯದ ಮೂಲಕ ನೀಡುವ ತರಗತಿಗಳಿಗೆ ಉಪಕರಣಗಳಿಲ್ಲದ ಕಾರಣ ವಂಚಿತವಾಗಿದ್ದಾರೆ. ಸೌಲಭ್ಯವಿದ್ದವರಿಗೆ ಇಂಟರ್ನೆಟ್-ಅಂತರ್ಜಾಲ ವ್ಯವಸ್ಥೆ ಬಲಯುತವಾಗಿರದ ಕಾರಣ ತರಗತಿ ಕೇಳಲು ಆಗುತ್ತಿಲ್ಲ ಎಂಬ ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು ಇಲ್ಲದ ಕಡೆ ಇಂತಹ ಸೌಲಭ್ಯಗಳನ್ನು ಹೇಗೆ ಒದಗಿಸಬೇಕೆಂಬ ಕುರಿತು ಚಿಂತನೆ ನಡೆಯುತ್ತಿದೆ. ಹಲವಾರು ತಾಲೂಕುಗಳಲ್ಲಿ ಬಿಇಒ ಹಂತದಲ್ಲಿ ಮೊಬೈಲ್ ಬ್ಯಾಂಕ್ ಮೂಲಕ ದಾನಿಗಳಿಂದ ಮೊಬೈಲ್ ಫೋನ್​ಗಳನ್ನು ಸಂಗ್ರಹಿಸಲಾಗುತ್ತಿದೆ. ರೋಟರಿ ಮತ್ತಿತರ ಸಂಸ್ಥೆಗಳಿಂದ ಅಗತ್ಯ ಉಪಕರಣ ಪಡೆಯಲು ಕ್ರಮ ಕೈಗೊಳ್ಳಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇಂಟರ್ನೆಟ್ ಬಲಯುತಗೊಳಿಸಲು ಇಂಟರ್ನೆಟ್ ಒದಗಿಸುವ ಸಂಸ್ಥೆಗಳ ಸಭೆ ಕರೆದು ಚರ್ಚಿಸುವಂತೆ ಮುಖ್ಯಮಂತ್ರಿಗಳು ಮತ್ತು ಮುಖ್ಯ ಕಾರ್ಯದರ್ಶಿಯವರೊಂದಿಗೆ ಚರ್ಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.
ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಟಿ.ವಿ. ವ್ಯವಸ್ಥೆ ಮಾಡಿ ಅಲ್ಲಿಗೆ ಯಾರ ಮನೆಯಲ್ಲಿ ಟಿ.ವಿ. ಸೆಟ್ ಇಲ್ಲವೋ ಅಂತಹ ಮಕ್ಕಳು ತಮ್ಮ ತರಗತಿಗೆ ನಿಗದಿಪಡಿಸಿದ ಪಠ್ಯಗಳನ್ನು ದೂರದರ್ಶನ ಚಂದನ ವಾಹಿನಿ ವೀಕ್ಷಿಸುವಂತಹ ವೇದಿಕೆಯನ್ನು ಕಲ್ಪಿಸುವ ಕುರಿತು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು ಅದು ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಅನೇಕ ರಾಜ್ಯಗಳು ಮಂಡಳಿ ಪರೀಕ್ಷೆ ರದ್ದು ಮಾಡಿದ ಸಂದರ್ಭದಲ್ಲಿ ಯಾವುದೇ ರೂಪದಲ್ಲಾಗಲಿ ಪರೀಕ್ಷೆ ನಡೆಸುವ ಮೂಲಕ ನಮ್ಮ ಆತ್ಮವಿಶ್ವಾಸ ಮೂಡಿಸಿ ನಮ್ಮ ಸಾಮರ್ಥ್ಯ ಪ್ರದರ್ಶನಕ್ಕೆ ಸರ್ಕಾರ ಅವಕಾಶ ಕಲ್ಪಿಸಿಕೊಟ್ಟು, ಪರೀಕ್ಷೆಯಿಲ್ಲದೇ ಉತ್ತೀರ್ಣರಾದವರೆಂದು ಜೀವನವಿಡೀ ಕಾಡುವ ಭಾವನೆಯಿಂದ ಮುಕ್ತಗೊಳಿಸಿದ್ದಕ್ಕೆ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ ಎಂದು ಸಂವಾದದಲ್ಲಿ ಭಾಗಿಯಾದ ಅನೇಕ ಮಕ್ಕಳು ಹರ್ಷ ವ್ಯಕ್ತಪಡಿಸಿದರು.
ಪರೀಕ್ಷಾ ಮಂಡಳಿಯಿಂದ ಕಳಿಸಿದ ಮಾದರಿ ಪ್ರಶ್ನೆಪತ್ರಿಕೆಗಳು ಮತ್ತು ಒಎಂಆರ್ ಶೀಟ್​ಗಳನ್ನು ಉತ್ತರಿಸಿದ್ದೇವೆ. ನಮಗೆ ಪರೀಕ್ಷೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದು ಮಕ್ಕಳು ಹೇಳಿದರು. ಪರೀಕ್ಷೆ ಅಂಕಗಳು, ಪರೀಕ್ಷಾ ಸಮಯ ಕುರಿತು ತಮ್ಮ ಆತಂಕ/ಗೊಂದಲಗಳನ್ನು ನಿವಾರಿಸಿಕೊಂಡ ಮಕ್ಕಳು ರಫ್ ವರ್ಕ್​ಗೆ ಪ್ರಶ್ನೆ ಪತ್ರಿಕೆಯೊಂದಿಗೆ ಹೆಚ್ಚುವರಿ ಹಾಳೆಗಳನ್ನು ಒದಗಿಸುವ ಮಂಡಳಿ ಕ್ರಮವನ್ನು ಸ್ವಾಗತಿಸಿದರು. ಬಹುತೇಕ ಮಕ್ಕಳು ಪರೀಕ್ಷಾ ವೇಳೆ ನಿಗದಿ ಕುರಿತು ಸಮಾಧಾನ ವ್ಯಕ್ತಪಡಿಸಿದರು. ಪರೀಕ್ಷೆ ಕುರಿತು ಕೈಗೊಂಡ ವಿವಿಧ ಕ್ರಮಗಳು, ಪರೀಕ್ಷಾ ಪಾವಿತ್ರ್ಯತೆಯ ಕ್ರಮಗಳನ್ನು ಮಕ್ಕಳು ಶ್ಲಾಘಿಸಿದರು.
ಚಿಕ್ಕಮಗಳೂರು ಜಿಲ್ಲೆಯ ವಿದ್ಯಾರ್ಥಿನಿಯೊಬ್ಬಳು ತಮ್ಮೂರಿಗೆ ಇನ್ನು ಪೂರ್ಣಪ್ರಮಾಣದಲ್ಲಿ ಬಸ್ ಸಂಚಾರವಿಲ್ಲದೇ ಇರುವುದರಿಂದ ಬಸ್ ಸೌಲಭ್ಯ ಒದಗಿಸುವ ಕುರಿತ ಪ್ರಶ್ನೆಗೆ ಆತಂಕ ನಿವಾರಿಸಿದ ಸಚಿವರು ಬಸ್ ಸೌಲಭ್ಯ ಒದಗಿಸುವ ಕುರಿತು ನಿಮ್ಮ ಜಿಲ್ಲಾಧಿಕಾರಿಗಳ ಗಮನಕ್ಕೆ ವಿಷಯ ತರಲಾಗುವುದು. ನೀವು ಪರೀಕ್ಷೆ ತಯಾರಾಗುವುದಕ್ಕೆ ಮಾತ್ರವೇ ತಮ್ಮ ಏಕಾಗ್ರತೆ ಇರಲಿ ಎಂದು ಅಭಯ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಪ್ರದೇಶದ ಸಾಕ್ಷಿ ಎಂಬ ವಿದ್ಯಾರ್ಥಿನಿ, ʼನೀವು ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಪರೀಕ್ಷೆ ಬರೆಯುವ ಮೂಲಕವೇ ನಮ್ಮ ಸಾಮರ್ಥ್ಯ ಸಾಬೀತು ಪಡಿಸಲು ಅವಕಾಶ ನೀಡಿರುವುದರಿಂದ ನಾವೆಲ್ಲ ಧೈರ್ಯವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆಯಲು ಸಿದ್ಧವಾಗಿರುವುದಕ್ಕೆ ನಾನೇ ಸಾಕ್ಷಿʼ ಎಂದು ಆತ್ಮವಿಶ್ವಾಸ ಪ್ರದರ್ಶಿಸಿದಾಗ ಮುಕ್ತ ಸಂವಾದದಲ್ಲಿ ಭಾಗಿಯಾದ ರಾಜ್ಯದ 1000ಕ್ಕೂ ಹೆಚ್ಚು ಮಕ್ಕಳು ಖುಷಿಯಿಂದ ಚಪ್ಪಾಳೆ ತಟ್ಟಿದರು. ತಾವೆಲ್ಲ ಪರೀಕ್ಷೆ ಬರೆಯಲು ದಿನಗಣನೆ ಮಾಡುತ್ತಿರುವುದನ್ನು ಹಂಚಿಕೊಂಡರು.

ಪ್ರಮುಖ ಸುದ್ದಿ :-   ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿದ್ದಕ್ಕೆ ವಿರೋಧ : ಕಾಂಗ್ರೆಸ್ಸಿಗೆ ರಾಜೀನಾಮೆ ನೀಡಿದ ಪಕ್ಷದ ರಾಷ್ಟ್ರೀಯ ವಕ್ತಾರೆ ರಾಧಿಕಾ ಖೇರಾ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement