ಬೆಂಗಳೂರು: ಈಗಾಗಲೇ ನಿಗಧಿಯಾಗಿರುವ ಸಿಇಟಿ ಪರೀಕ್ಷೆಯನ್ನು ಬರೆಯಲು ಕೊರೊನಾ ಸೋಂಕಿತರಿಗೂ ಪ್ರತ್ಯೇಕ ವ್ಯವಸ್ಥೆ ಮಾಡುವ ಮೂಲಕ ಅವಕಾಶ ಕಲ್ಪಿಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ಮಾಡಿಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ, ಡಿಸಿಎಂ ಡಾ.ಸಿ.ಎಸ್. ಅಶ್ವತ್ಥ್ ನಾರಾಯಣ ಹೇಳಿದ್ದಾರೆ.
ಕೊರೊನಾ ಅಬ್ಬರದ ಹಿನ್ನೆಲೆಯಲ್ಲಿ ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಲಾಗಿದೆ. ಎಂಜಿನಿಯರಿಂಗ್ ಸೇರಿದಂತೆ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯಲು ಸಿಇಟಿ ಪರೀಕ್ಷೆಯಲ್ಲಿ ಗಳಿಸುವ ಅಂಕಗಳೇ ಅಂತಿಮವಾಗಿರುವುದರಿಂದ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯುವುದು ಅವಶ್ಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಕೊರೊನಾ ಸೋಂಕಿತರಿಗೆ ಪರೀಕ್ಷೆ ಬರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುವುದು. ಅಭ್ಯರ್ಥಿಗಳ ಸೋಂಕಿನ ತೀವ್ರತೆಯನ್ನು ಆಧರಿಸಿ ಅಗತ್ಯವಿರುವ ಎಲ್ಲ ಸೋಂಕಿತರಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗುತ್ತದೆ. ಒಟ್ಟಾರೆ ಸಂಪೂರ್ಣ ಕೋವಿಡ್ ಸುರಕ್ಷತೆ ಹಾಗೂ ಮುಂಜಾಗೃತೆ ಕ್ರಮಗಳನ್ನು ಅನುಸರಿಸಿಯೇ ಸಿಇಟಿ ಪರೀಕ್ಷೆ ನಡೆಸಲಾಗುತ್ತದೆ ಎಂದು ಡಿಸಿಎಂ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ನಿಮ್ಮ ಕಾಮೆಂಟ್ ಬರೆಯಿರಿ