ರೈತರ ಆದಾಯ ದ್ವಿಗುಣಗೊಳಿಸುವುದೇ ಸರ್ಕಾರದ ಪ್ರಥಮಾದ್ಯತೆ: ಸಿಎಂಯಡಿಯೂರಪ್ಪ

ಕಲಬುರಗಿ:ಅನ್ನದಾತ ರೈತನ ಬದುಕು ಹಸನಗೊಳಿಸಲು ಹತ್ತಾರು ರೈತಾಪಿ ಯೋಜನೆಗಳನ್ನು ನಮ್ಮ ಸರ್ಕಾರ ಜಾರಿಗೊಳಿಸಿದ್ದು, ರೈತರ ಆದಾಯ ದ್ವಿಗುಣಗೊಳಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ನಗರದ ಎಂ.ಎಸ್.ಕೆ ಮಿಲ್ ವಾಣಿಜ್ಯ ಬಡಾವಣೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಜಂಟಿ ಅನುದಾನದಡಿಯಲ್ಲಿ 2 ಎಕರೆ ಪ್ರದೇಶದಲ್ಲಿ ಸುಮಾರು 26.30 ಕೋಟಿ ರೂ.ಗಳ ವೆಚ್ಚದಲ್ಲಿ ನೂತನ ಮಾದರಿಯ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣಕ್ಕೆ ಶನಿವಾರ ಅಡಿಗಲ್ಲು ಹಾಕಿ ಮಾತನಾಡಿದ ಅವರು, ಅನ್ನದಾತ ಬೆಳೆದ ಬೆಳೆ ಸೂಕ್ತ ಮಾರುಕಟ್ಟೆ ದೊರಕಬೇಕು ಎಂಬ ನಿಟ್ಟಿನಲ್ಲಿ ಕೃಷಿ ಮತ್ತು ತೋಟಗಾರಿಕೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಲಾಗುತ್ತಿದೆ. ಕೋವಿಡ್ ಸಂದರ್ಭದಲ್ಲಿ ಹೂವು ಬೆಳೆಗಾರರಿಗೆ ಹಾಗೂ ತರಕಾರಿ ಮಾರಾಟಗಾರರು ಸೂಕ್ತ ಮಾರುಕಟ್ಟೆ ಸಿಗದೆ ಕಷ್ಟ ಅನುಭವಿಸಿದ್ದರು. ಇದನ್ನರಿತ ಕೇಂದ್ರ ಸರ್ಕಾರ ದೂರದ ಪ್ರದೇಶದಲ್ಲಿಯೂ ತರಕಾರಿ, ಹಣ್ಣುಗಳನ್ನು ಮಾರಾಟ ಮಾಡಲು ಸಾಗಾಣಿಕೆಗೆ “ಕಿಸಾನ್ ರೈಲು” ಯೋಜನೆ ಜಾರಿಗೆ ತಂದಿದ್ದು, ಇದರಿಂದ ರೈತರಿಗೆ ಅನುಕೂಲವಾಗಿದೆ. ಮುಂದಿನ ದಿನಗಳಲ್ಲಿ ರೈತರ ಆದಾಯ ದ್ವಿಗುಣ ಮಾಡುವ ನಿಟ್ಟಿನಲ್ಲಿ ಮತ್ತಷ್ಟು ಹೊಸ ಯೋಜನೆಗಳನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ರಾಜ್ಯದಲ್ಲಿ ರೈತ ಬೆಳೆದ ಬೆಳೆಗೆ ವೈಜ್ಞಾನಿಕವಾಗಿ ಬೆಲೆ ದೊರಕಿಸುವಲ್ಲಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಕೃಷಿ ನಮ್ಮ ಆದ್ಯತಾ ವಲಯವಾಗಿದ್ದು, ಕೃಷಿಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡಿದೆ. ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಹೂ ಬೆಳೆಗಾರರಿಗೆ ಪ್ರತಿ ಹೆಕ್ಟೇರ್ಗೆ ತಲಾ 10000 ರೂ. ಗಳಂತೆ 20 ಸಾವಿರ ರೈತರಿಗೆ ಪರಿಹಾರ ನೀಡಲಾಗಿದೆ. ಅದೇ ರೀತಿ ಹಣ್ಣು ಮತ್ತು ತರಕಾರಿ ಬೆಳೆಗಾರರಿಗೆ ಗರಿಷ್ಠ 1 ಹೆಕ್ಟೇರ್ಗೆ ತಲಾ 10000 ರೂ. ಗಳಂತೆ 69000 ಸಾವಿರ ರೈತರಿಗೆ ಆರ್ಥಿಕ ನೆರವು ನೀಡಲಾಗಿದೆ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ 20 ಕೊಟಿ ರೂ.ಗಳು ಹಾಗೂ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದಿಂದ 6.30 ಕೋಟಿ ರೂ. ಗಳುಹೀಗೆ ಒಟ್ಟು 26.30 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಯಿಪಲ್ಲೆ ಮಾರುಕಟ್ಟೆ ಸಂಕೀರ್ಣ ರಾಜ್ಯದ ಇತಿಹಾಸದಲ್ಲೇ ಮೊದಲ ಕಟ್ಟಡವಾಗಿದ್ದು, ಈ ತರಹದ ಮಾದರಿ ತರಕಾರಿ ಮಾರುಕಟ್ಟೆ ನಿರ್ಮಾಣದ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೂ ತರಲಾಗುವುದು ಎಂದರು.
ನೂತನ ತರಕಾರಿ ಮಾರುಕಟ್ಟೆ ಕಾಂಪ್ಲೆಕ್ಸ್ ಬೇಸ್ಮೆಂಟ್ ಮಹಡಿ, ನೆಲ ಮಹಡಿ ಹಾಗೂ ಮೊದಲನೇ ಮಹಡಿ ಒಳಗೊಂಡಿದೆ. ಬೇಸ್ಮೆಂಟ್ ಮಹಡಿಯಲ್ಲಿ ವಾಹನ ನಿಲುಗಡೆ, ಲಿಫ್ಟ್, ಸ್ಟೇರ್ಕೇಸ್, ಸಂಪ್ ಟ್ಯಾಂಕ್, ಎಲೆಕ್ಟ್ರಿಕಲ್ ಕೋಣೆ ಇರಲಿದೆ. ನೆಲ ಮಹಡಿಯಲ್ಲಿ 62 ಅಂಗಡಿಗಳು, ತರಕಾರಿ ಮಾರಾಟಕ್ಕೆ 192 ಮಳಿಗೆ, ಸಗಟು ವ್ಯಾಪಾರ ಹರಾಜು ಪ್ರಕ್ರಿಯೆಗೆ ಪ್ಲಾಟ್ಫಾರ್ಮ್, ಘನತ್ಯಾಜ್ಯ ಸಂಗ್ರಹಣೆಗೆ ಸ್ಥಳ, ಕೋಲ್ಟ್ ಸ್ಟೋರೇಜ್ ಕೋಣೆ ಹಾಗೂ ಶೌಚಾಲಯ ಇರಲಿವೆ. ಮೊದಲನೇ ಮಹಡಿಯಲ್ಲಿ 47 ಅಂಗಡಿಗಳು, ಇತರೆ ಕಾರ್ಯಾಲಯ, ಬ್ಯಾಂಕ್ ಇರಲಿದ್ದು ಒಟ್ಟಾರೆ ಸಂಕೀರ್ಣದಲ್ಲಿ 301 ಅಂಗಡಿಗಳಿರಲಿವೆ ಎಂದು ಸಿ.ಎಂ. ಯಡಿಯೂರಪ್ಪ ವಿವರಿಸಿದರು.
ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ 600 ಕೋಟಿ ರೂ.ಗಳ ವೆಚ್ಚದಲ್ಲಿ ದಿನದ 24 ಗಂಟೆಯು ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಕಲಬುರಗಿ ಮಹಾನಗರ ಪ್ರದೇಶದಲ್ಲಿ ಘನ ತ್ಯಾಜ್ಯ ವಸ್ತು ನಿರ್ವಹಣೆಗಾಗಿ ಇಂದು 41 ವಾಹನಗಳನ್ನು ಸಹ ಲೋಕಾರ್ಪಣೆ ಮಾಡಲಾಗಿದೆ ಎಂದರು.
ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಮಾತನಾಡಿ, ಸರ್ಕಾರ ನುಡಿದಂತೆ ನಡೆದಿದೆ. ಈ ನೂತನ ಮಾರುಕಟ್ಟೆಯಿಂದ ಪ್ರದೇಶದ ರೈತರು ಸುಲಲಿತವಾಗಿ ವ್ಯಾಪಾರ ಮಾಡಬಹುದು. ಮಳಿಗೆಗಳು ಅರ್ಹ ಫಲಾನುಭವಿಗಳಿಗೆ ಸಿಗುವಂತಾಗಲಿ ಎಂದು ಆಶಿಸಿದರು.
ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಮತ್ತು ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಸಿ. ಪಾಟೀಲ ರೇವೂರ ಪ್ರಾಸ್ತಾವಿಕವಾಗಿ ಮಾತನಾಡಿದರು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವರಾದ ಮುರುಗೇಶ ನಿರಾಣಿ, ಬಿ.ಶ್ರೀರಾಮುಲು, ಎಸ್.ಟಿ ಸೋಮಶೇಖರ್, ಶಾಸಕರಾದ ಎಂ.ವೈ.ಪಾಟೀಲ, ಸುಭಾಷ ಗುತ್ತೇದಾರ, ಬಸವರಾಜ ಮತ್ತಿಮಡು, ಖನೀಜ್ ಫಾತೀಮಾ, ಡಾ. ಅವಿನಾಶ ಜಾಧವ, ಸುನೀಲ್ ವಲ್ಲ್ಯಾಪುರೆ, ಶಶೀಲ ಜಿ. ನಮೋಶಿ, ಬಿ.ಜಿ.ಪಾಟೀಲ ಮೊದಲಾದವರಿದ್ದರು.

ಪ್ರಮುಖ ಸುದ್ದಿ :-   ಭಟ್ಕಳ : ಮೀನುಗಾರಿಕಾ ಬೋಟ್ ಮುಳುಗಡೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement