ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಿ: ಸಿದ್ದರಾಮಯ್ಯ ಒತ್ತಾಯ

posted in: ರಾಜ್ಯ | 0

ಬಾದಾಮಿ: ರಾಷ್ಟ್ರೀಕೃತ ಬ್ಯಾಂಕುಗಳ ನೇಮಕಾತಿ ಪರೀಕ್ಷೆಗಳಲ್ಲಿ ರಾಜ್ಯದ ಯುವಜನರಿಗೆ ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ನೂತನವಾಗಿ ನಿರ್ಮಿಸಿರುವ ಕೊಠಡಿಗಳ ಉದ್ಘಾಟನೆ ನೆರವೇರಿಸಿದ ಸಿದ್ದರಾಮಯ್ಯ, ಬಾದಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಟ್ಯಾಬ್ ವಿತರಿಸಿ ಅವರು ಮಾತನಾಡಿದರು.

ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿಯ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡದೆ ಪ್ರಧಾನಿ  ನರೇಂದ್ರ ಮೋದಿ ಸರ್ಕಾರ ಕನ್ನಡಿಗರಿಗೆ ದ್ರೋಹ ಬಗೆಯುತ್ತಾ ಬಂದಿದೆ. ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್)ಯ ಇತ್ತೀಚಿನ ಸುತ್ತೋಲೆ ಈ ದ್ರೋಹಕ್ಕೆ ಸಾಕ್ಷಿಯಾಗಿದೆ. ಕೇಂದ್ರ ಸರ್ಕಾರ ತಕ್ಷಣ ಗಮನಹರಿಸಿ  ಸರಿಪಡಿಸಿ ಕನ್ನಡಿಗರಿಗೆ ನ್ಯಾಯದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು.

ಐಬಿಪಿಎಸ್ ಇದೀಗ ಹನ್ನೊಂದು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ೩,೦೦೦ ಕಾರಕೂನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಇವುಗಳಲ್ಲಿ ೪೦೭ ಹುದ್ದೆಗಳು ಕರ್ನಾಟಕ ರಾಜ್ಯಕ್ಕೆ ಸೇರಿದ್ದಾಗಿದೆ. ಕನ್ನಡಕ್ಕೆ ಆಗಿರುವ ಅನ್ಯಾಯದಿಂದಾಗಿ ಯುವಕರು ಉದ್ಯೋಗದ ಅವಕಾಶದಿಂದ ವಂಚಿತರಾಗಲಿದ್ದಾರೆ.೨೦೧೪ಕ್ಕಿಂತ ಮೊದಲು ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ ನಡೆಸುತ್ತಿದ್ದ ಪರೀಕ್ಷೆಗಳಲ್ಲಿ ರಾಜ್ಯಭಾಷೆಗಳಲ್ಲಿಯೂ ಬರೆಯುವ ಅವಕಾಶ ಇತ್ತು. ೨೦೧೪ರಲ್ಲಿ ಕೇಂದ್ರ ಸರ್ಕಾರ ನಿಯಮಾವಳಿಗೆ ತಿದ್ದುಪಡಿ ಮಾಡಿ ಇಂಗ್ಲೀಷ್ ಮತ್ತು ಹಿಂದಿಯೇತರ ಭಾಷಿಕರಿಗೆ  ಅನ್ಯಾಯವೆಸಗಿದೆ. ಈ ಅನ್ಯಾಯವನ್ನು ಪ್ರತಿಭಟಿಸಿ ಹಿಂದಿನ ನಮ್ಮ ಸರ್ಕಾರ, ಕೇಂದ್ರ ಸರ್ಕಾರಕ್ಕೆ ಪತ್ರವನ್ನೂ ಬರೆದಿತ್ತು ಎಂದರು.

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬ್ಯಾಂಕಿಂಗ್ ಪರೀಕ್ಷೆಗಳನ್ನು ಕನ್ನಡದಲ್ಲಿಯೂ ನಡೆಸುವ ಭರವಸೆಯನ್ನು ಲೋಕಸಭೆಯಲ್ಲಿ ನೀಡಿದ್ದರೂ ಆ ಭರವಸೆಯನ್ನು ಇಂದಿಗೂ ಈಡೇರಿಸಿಲ್ಲ.

ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಬಹುತೇಕ ಯೋಜನೆಗಳ ಅನುಷ್ಠಾನ ಬ್ಯಾಂಕ್ ಗಳ ಮೂಲಕವೇ ನಡೆಯುವುದರಿಂದ ರೈತರು, ಕಾರ್ಮಿಕರು, ಮಹಿಳೆಯರು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿನ ಜನತೆ ಹೆಚ್ಚುಹೆಚ್ಚು ಬ್ಯಾಂಕುಗಳನ್ನು ಅವಲಂಬಿಸಿದ್ದಾರೆ. ಕನ್ನಡ ಬಾರದ ಸಿಬ್ಬಂದಿಯಿಂದಾಗಿ ತೊಂದರೆ ಅನುಭವಿಸುತ್ತಿದ್ದಾರೆ.

ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಹೋಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೆ ಮತ್ತೆ ಕನ್ನಡ-ಕರ್ನಾಟಕಕ್ಕೆ ಅನ್ಯಾಯ ಎಸಗುತ್ತಾ ಬಂದಿದ್ದಾರೆ. ಇದೀಗ ಬ್ಯಾಂಕಿಂಗ್ ಪರೀಕ್ಷೆಗಳಲ್ಲಿಯೂ ಸಚಿವರು ಈ ಅನ್ಯಾಯವನ್ನು ಮುಂದುವರಿಸಿದ್ದಾರೆ. ಬಿಜೆಪಿಯಿಂದ ಆಯ್ಕೆಯಾದ ೨೫ ಸಂಸದರು ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವಾಗುತ್ತಿದ್ದರೂ  ಬಾಯಿಗೆ ಬೀಗ ಹಾಕಿಕೊಂಡು ಕೂತಿದ್ದಾರೆ ಎಂದು ಟೀಕಿಸಿದರು.

5 / 5. 2

ನಿಮ್ಮ ಕಾಮೆಂಟ್ ಬರೆಯಿರಿ

advertisement