ಕರ್ನಾಟಕದ ಶಾಲೆಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ; ಅದರಲ್ಲಿ ರಾಜಿ ಇಲ್ಲ: ಸಚಿವ ಸುರೇಶಕುಮಾರ

ಬೆಂಗಳೂರು: ಕನ್ನಡ ನೆಲದಲ್ಲಿರುವಶಾಲೆಗಳಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವ ಸಂಬಂಧದ ಕನ್ನಡ ಕಲಿಕಾ ಅಧಿನಿಯಮ-2015ರ ಕಾಯ್ದೆ ಅನುಷ್ಠಾನದಲ್ಲಿ ಯಾವುದೇ ರಾಜಿಯೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ಹೊರರಾಜ್ಯ ಮೂಲದ ಪೋಷಕರ ಒಂದು ವರ್ಗ ರಾಜ್ಯದಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ ಎಂಬ ಹಿನ್ನೆಲೆಯಲ್ಲಿ ಅಧಿನಿಯಮ ಅನುಷ್ಠಾನಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಬುಧವಾರ ಶಿಕ್ಷಣ ಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುರೇಶಕುಮಾರ, ರಾಜ್ಯದಲ್ಲಿರುವ ಯಾವುದೇ ಪಠ್ಯಕ್ರಮದ ಶಾಲೆಗಳೇ ಆಗಲಿ ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯವಾಗಿದ್ದು, ಸರ್ಕಾರ ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಕನ್ನಡವನ್ನು ಒಂದು ಭಾಷೆಯನ್ನಾಗಿ ಕಲಿಸುವುದು ಕಡ್ಡಾಯ. ಒಂದರಿಂದ ಹತ್ತನೇ ತರಗತಿಯವರಿಗೆ ಹಂತಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸಬೇಕು. ಕೇಂದ್ರ ಪಠ್ಯಕ್ರಮದ ಶಾಲೆಗಳಲ್ಲಿ (Central Syllabus Schools) ಕನ್ನಡವನ್ನು ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದನ್ನು ಹೊರ ರಾಜ್ಯದ ಪೋಷಕರ ಒಂದು ವರ್ಗ ವಿರೋಧಿಸಿ ಈ ಕಡ್ಡಾಯ ಕನ್ನಡ ಕಲಿಕೆಯನ್ನು ಕೈಬಿಡಬೇಕೆಂದು ಸಾಮಾಜಿಕ ಜಾಲತಾಣದ ಮೂಲಕ ಒತ್ತಾಯಿಸುತ್ತಿದ್ದು, ಇದು ಕನ್ನಡ ಭಾಷಾ ಕಲಿಕಾ ಅಧಿನಿಯಮ-2015ಕ್ಕೆ ವಿರುದ್ಧವಾಗಿದೆ. ಅಲ್ಲದೇ ಈ ನೆಲದ ಸಂಸ್ಕೃತಿಗೆ ವಿರೋಧವಾಗಿದೆ. ಈ ಕುರಿತು ರಾಜ್ಯದ ಯಾವುದೇ ಪಠ್ಯಕ್ರಮದ ಶಾಲೆಗಳು ಯಾವುದೇ ಆಗ್ರಹಕ್ಕೂ ಮಣಿಯದೇ ಕನ್ನಡ ಕಲಿಕೆಯನ್ನು ಕಡ್ಡಾಯವಾಗಿ ಕಲಿಸಲು ಸೂಚನೆ ನೀಡಲಾಗಿದೆ ಎಂದು ಸುರೇಶ್ಕುಮಾರ್ ಹೇಳಿದರು.
ಪೋಷಕರೂ ಸಹ ತಮ್ಮ ಜವಾಬ್ದಾರಿ ಅರಿತು ಸರ್ಕಾರದ ಆಶಯವನ್ನು ಗೌರವಿಸಬೇಕು. ತಮ್ಮ ಮಕ್ಕಳನ್ನು ನೆಲದ ಭಾಷೆ ಕಲಿಯಲು ಪ್ರೇರೇಪಿಸಬೇಕು ಎಂದು ಶಿಕ್ಷಣ ಸಚಿವರು ಹೇಳಿದರು.
ಇಲಾಖೆಯ ವಿಚಕ್ಷಣ ಅಧಿಕಾರಿಗಳು ಎಲ್ಲ ಶಾಲೆಗಳಿಗೂ ಭೇಟಿ ನೀಡಿ ಕಾಯ್ದೆಯ ಜಾರಿ ಕುರಿತು ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುವಂತೆ ಸಹ ಕೂಡಲೇ ನಿರ್ದೇಶನ ನೀಡಲಾಗಿದೆ ಎಂದೂ ಸಚಿವರು ತಿಳಿಸಿದ್ದಾರೆ.
ಈಗಾಗಲೇ ಬೆಂಗಳೂರಿನ ಕೇಂದ್ರ ಪಠ್ಯಕ್ರಮದ ಶಾಲೆಗಳ ಪ್ರಾಚಾರ್ಯರು ಮತ್ತು ಮುಖ್ಯಸ್ಥರ ಸಭೆಯನ್ನೂ ನಡೆಸಿ ಈ ಕುರಿತು ಕನ್ನಡ ಭಾಷಾ ಕಲಿಕೆಯನ್ನು ಕಡ್ಡಾಯವಾಗಿ ಅನುಸರಿಸುವಂತೆ ನಿರ್ದೇಶನ ನೀಡಲಾಗಿದೆ. ಯಾರೇ ಆಗಲಿ ಯಾವುದೇ ಭಾಷೆಯನ್ನು ಕಲಿಯುವುದರಿಂದ ಹೆಚ್ಚಿನ ಶಕ್ತಿ ಬರುತ್ತದೆ. ಹೆಚ್ಚಿನ ಭಾಷೆಗಳನ್ನು ಕಲಿಯುವುದರಿಂದ ಸಮೃದ್ಧ ಸಂಸ್ಕೃತಿಯನ್ನು ಮೈಗೂಡಿಸಿಕೊಂಡಂತಾಗುತ್ತದೆ. ಇದನ್ನು ನಮ್ಮ ಪೋಷಕರು ಅರಿತುಕೊಳ್ಳಬೇಕು ಎಂದೂ ಅವರು ಹೇಳಿದ್ದಾರೆ

ಪ್ರಮುಖ ಸುದ್ದಿ :-   ಹುಬ್ಬಳ್ಳಿ : ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಕಾಲಿಗೆ ಗುಂಡೇಟು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement