28,000 ಕೋಟಿ ರೂ.ಗಳ ಹೂಡಿಕೆ ಒಪ್ಪಂದಗಳಿಗೆ ಸಹಿ ಹಾಕಿದ ರಾಜ್ಯ ಸರ್ಕಾರ

ಬೆಂಗಳೂರು: ಇಲೆಕ್ಟ್ರಿಕ್‌ ವಾಹನ, ಡೇಟಾ ಸೇಂಟರ್‌, ಏರೋಸ್ಪೇಸ್‌ ಹಾಗೂ ರಕ್ಷಣಾ ಕಂಪನಿಗಳು ಸೇರಿದಂತೆ 23 ಕಂಪನಿಗಳಿಂದ ರಾಜ್ಯದಲ್ಲಿ ಸುಮಾರು 28,000 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದಕ್ಕೆ ರಾಜ್ಯ ಸರ್ಕಾರ ಗುರುವಾರ ಸಹಿ ಹಾಕಿದೆ.
ಇನ್ವೆಸ್ಟ್‌ ಕರ್ನಾಟಕ ವೇದಿಕೆಯ ಸಹಯೋಗದೊಂದಿಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯೋಜಿಸಿದ್ದ ಸಮಾರಂಭದಲ್ಲಿ ಈ ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು, ಕಾಲಮಿತಿಯಲ್ಲಿ ಯೋಜನೆಗಳನ್ನು ಜಾರಿಗೊಳಿಸಿ ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ.
ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, “ಕೊವಿಡ್‌ ಸಂಕಷ್ಟದ ನಡುವೆಯೂ ರಾಜ್ಯ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಿದೆ. ಅದರ ಫಲವಾಗಿಯೇ ವಿವಿಧ ಕಂಪನಿಗಳು ಹೂಡಿಕೆ ಮಾಡಲು ಬಂದಿವೆ, ಸರ್ಕಾರದ ಉದ್ಯಮ ಸ್ನೇಹಿ ನೀತಿಗಳಿಂದ ಇದು ಸಾಧ್ಯವಾಗಿದೆ” ಎಂದರು.
“ಕೊವಿಡ್‌ ಸಂಕಷ್ಟದ ನಡುವೆಯೂ ಕಳೆದ ವರ್ಷದ ಮಾರ್ಚ್‌ನಿಂದ ಕರ್ನಾಟಕ ಸರ್ಕಾರ 77,000 ಕೋಟಿ ರೂ. ಹೂಡಿಕೆಯ 520ಕ್ಕೂ ಹೆಚ್ಚು ಯೋಜನೆಗಳಿಗೆ ಅನುಮೋದನೆ ನೀಡಿದೆ. 23,000 ಕೋಟಿ ರೂ. ಮೊತ್ತದ ಒಪ್ಪಂದವೂ ಸೇರಿ ಒಟ್ಟು 1 ಲಕ್ಷ ಕೋಟಿ ರೂ. ಹೂಡಿಕೆ ಆಗಿದೆ. .
ಹೂಡಿಕೆದಾರರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಭೂ, ಕಾರ್ಮಿಕ ವಲಯದಲ್ಲಿ ಹಲವು ಸುಧಾರಣೆಗಳನ್ನು ತರಲಾಗಿದೆ,” ಎಂದು ಯಡಿಯೂರಪ್ಪ ಹೇಳಿದರು.
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್‌, “ಕರ್ನಾಟಕ ಹೂಡಿಕೆದಾರರ ನೆಚ್ಚಿನ ತಾಣವನ್ನಾಗಿಸುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ನಾನಾ ವಲಯಗಳಲ್ಲಿ ಬಂಡವಾಳ ಹೂಡಿಕೆ ಉತ್ತೇಜಿಸಲು ಹಲವು ಪೂರಕ ಕ್ರಮಗಳನ್ನು ಕೈಗೊಂಡಿದೆ. ಆನ್‌ಲೈನ್‌ ಮೂಲಕವೇ ಹೂಡಿಕೆ ಅನುಮೋದನೆಗಳು ಸಾಧ್ಯವಾಗಿದ್ದರಿಂದ ಕೊವಿಡ್ ಸಾಂಕ್ರಾಮಿಕದ ಮಧ್ಯೆಯೂ ಈ ಪ್ರಮಾಣದ ಹೂಡಿಕೆ ಸಾಧ್ಯವಾಗಿದೆ. ನೂತನ ಕೈಗಾರಿಕಾ ನೀತಿ 2020-2025 ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹೀ ರಾಜ್ಯಗಳ ಪಟ್ಟಿಯಲ್ಲಿ ಪ್ರಮುಖ ಸ್ಥಾನ ಪಡೆದುಕೊಂಡಿದೆ ಎಂದರು.
ಜಾಗತಿಕ ಹೂಡಿಕೆದಾರರ ಸಮಾವೇಶ
ಮುಂದಿನ ವರ್ಷ ಫೆಬ್ರವರಿ 9ರಿಂದ 11ರವರೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಲು ಸಚಿವ ಸಂಪುಟ ಸಭೆಯಲ್ಲಿ ಗುರುವಾರ (ಇಂದು) ನಿರ್ಧಾರಿಸಲಾಗಿದೆ. ಬಂಡವಾಳ ಆಕರ್ಷಿಸಲು ವಲಯ ನಿರ್ದಿಷ್ಟ ಕ್ಲಸ್ಟರ್‌ಗಳನ್ನು ರೂಪಿಸಿದ ಮೊದಲ ರಾಜ್ಯ ಕರ್ನಾಟಕ. ಆಟಿಕೆ, ಜವಳಿ ಮತ್ತು ಇಎಸ್‌ಡಿಎಂ ಕ್ಲಸ್ಟರ್‌ಗಳಿಗೆ ಈಗಾಗಲೇ ಪ್ರತ್ಯೇಕ ನೀತಿ ರೂಪಿಸಲಾಗಿದೆ.
ಕೊಪ್ಪಳದಲ್ಲಿ ಆಟಿಕೆ ಕ್ಲಸ್ಟರ್‌, ಧಾರವಾಡದಲ್ಲಿ ಎಲೆಕ್ಟ್ರಾನಿಕ್‌ ಕ್ಲಸ್ಟರ್‌, ಯಾದಗಿರಿಯಲ್ಲಿ ಫಾರ್ಮಾ ಕ್ಲಸ್ಟರ್‌ ಇದೆ. ಇಂಥ ಹಲವು ಕ್ಲಸ್ಟರ್‌ಗಳ ನಿರ್ಮಾಣಕ್ಕೆ ನಮ್ಮ ಸರ್ಕಾರ ಆದ್ಯತೆ ನೀಡಲಿದೆ,”ಎಂದು ಹೇಳಿದರು.
ಉದ್ಯಮಗಳಿಗೆ ನುರಿತ ಕೆಲಸಗಾರರನ್ನು ಒದಗಿಸುವ ನಿಟ್ಟಿನಲ್ಲಿ ಕೌಶಲ ಅಭಿವೃದ್ಧಿಗೆ ಒತ್ತು ನೀಡಲಾಗುವುದು. ರಾಷ್ಟ್ರೀಯ ಶಿಕ್ಷಣ ನೀತಿ ಇದಕ್ಕೆ ಪೂರಕವಾಗಿರಲಿದೆ,”ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದರು.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಡಾ. ರಾಜ್‌ ಕುಮಾರ್‌ ಖತ್ರಿ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣಾ, ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಬಿ.ಕೆ.ಶಿವಕುಮಾರ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ಹೆಚ್‌. ಎಂ. ರೇವಣ್ಣಗೌಡ, ಹೂಡಿಕೆ ಒಪ್ಪಂದಕ್ಕೆ ಸಹಿ ಹಾಕಿದ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement