ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಸಿಎಂ ಬಿಎಸ್‌ವೈ

ನವದೆಹಲಿ: ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿ ಮಾಡಿದರು. ಕರ್ನಾಟಕ ಭವನದಿಂದ ತೆರಳಿದ ಯಡಿಯೂರಪ್ಪ ದೆಹಲಿ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿ ಅವರನ್ನು ಭೇಟಿಯಾದರು.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು (ಜು.16) ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ರಾಜ್ಯದ ಕೆಲ ಯೋಜನೆಗಳ ವಿಷಯದಲ್ಲಿ ಕೇಂದ್ರ ಸರ್ಕಾರದ ನೆರವು ಒದಗಿಸುವಂತೆ ಮನವಿ ಮಾಡಿದರು.

ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಣೆ ಮಾಡಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ 6 ಸಾವಿರ ಕೋಟಿ ಅನುದಾನ ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮೇಕೆದಾಟು ಯೋಜನೆ, ಬೆಂಗಳೂರಿನಲ್ಲಿ ಯುಎಸ್ ಕಾನ್ಸುಲೇಟ್ ಸ್ಥಾಪನೆ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಿದರು. ಈ ವೇಳೆ ಮುಖ್ಯಮಂತ್ರಿಯವರ ಕಾರ್ಯದರ್ಶಿ ಗಿರೀಶ್ ಹೊಸೂರ್ ಜೊತೆಗಿದ್ದರು.

ಭೇಟಿಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಅವಕಾಶ ಕೇಳಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹೇಳಿದರು.
ದೆಹಲಿಯಲ್ಲಿ ಇಂದು ರಾತ್ರಿ ಕರ್ನಾಟಕ ಮೂಲದ ಸಚಿವರ ಜೊತೆಗೆ ಯಡಿಯೂರಪ್ಪ ಊಟ ಮಾಡಲಿದ್ದಾರೆ.

ಪ್ರಮುಖ ಸುದ್ದಿ :-   ಶ್ರೀರಂಗಪಟ್ಟಣ: ಐಸ್‌ ಕ್ರೀಂ ತಿಂದ ಬಳಿಕ ಅವಳಿ ಮಕ್ಕಳ ಸಾವು

ಮೇಕೆದಾಟು ಯೋಜನೆ ಚರ್ಚೆ..?: 
ಇದಕ್ಕೂ ಮೊದಲು ಮಾಧ್ಯಮದವರ ಜೊತೆ ಮಾತನಾಡದ ಯಡಿಯೂರಪ್ಪ ಅವರು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮೇಕೆದಾಟು ಯೋಜನೆ ಕುರಿತು ಚರ್ಚಿಸುವುದಾಗಿ ಹೇಳಿದ್ದರು. ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯೂ ಇಲ್ಲ. ಆದರೂ ತಮಿಳುನಾಡು ಸರ್ಕಾರ ಮೇಕೆದಾಟು ಯೋಜನೆ ವಿರೋಧಿಸುತ್ತಿದೆ. ಮೇಕೆದಾಟು ಯೋಜನೆ ಜಾರಿಗೆ ನಮಗೆ ಅವಕಾಶ ಇದೆ. ನಾವು ಮೇಕೆದಾಟು ಯೋಜನೆಯನ್ನು ಜಾರಿ ಮಾಡಿಯೇ ಮಾಡುತ್ತೇವೆ ಎಂದು ದೆಹಲಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಆರು ತಿಂಗಳ ಬಳಿಕ ದೆಹಲಿಗೆ ಬರುತ್ತಿದ್ದೇನೆ. ರಾಜ್ಯದ ಅಭಿವೃದ್ಧಿ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ಸಂಪುಟದ ಹೊಸ ಸಚಿವರನ್ನು ಭೇಟಿ ಮಾಡುತ್ತೇನೆ. ಜತೆಗೆ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್​ರನ್ನು ಭೇಟಿ ಮಾಡುತ್ತೇನೆ ಎಂದು ಅವರು ಇದೇ ವೇಳೆ ತಿಳಿಸಿದರು.
ಮೇಕೆದಾಟು ಯೋಜನೆ ಬಗ್ಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗುತ್ತಿದ್ದೇನೆ ಎಂದು ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಆದರೆ ರಾಜ್ಯ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಯಡಿಯೂರಪ್ಪ ದೆಹಲಿ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ಪ್ರಮುಖ ಸುದ್ದಿ :-   ಕುಣಿಗಲ್ : ರಾಮನವಮಿ ಪಾನಕ ಸೇವಿಸಿದ 42 ಮಂದಿ ಅಸ್ವಸ್ಥ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement