ದೆಹಲಿಯ ಬಿಜೆಪಿ ವರಿಷ್ಠರ ಅಂಗಳದಲ್ಲಿ ನಿಂತು ಸಿಎಂ ಸ್ಥಾನಕ್ಕೆ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದ ಬಿಎಸ್‌ವೈ: ವಿರೋಧಿ ಬಣಕ್ಕೆ ಖಡಕ್ ಸಂದೇಶ

ನವದೆಹಲಿ: ಬಿಜೆಪಿ ಹೈಕಮಾಂಡ್‌ ರಾಜೀನಾಮೆ ನೀಡುವಂತೆ ನನಗೆ ಕೇಳಿಲ್ಲ. ಹೀಗಾಗಿ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಯಕತ್ವಗೊಂದಲಗಳಿಗೆ ದೆಹಲಿಯಲ್ಲೇ ತೆರೆ ಎಳೆದಿದ್ದಾರೆ.

ದೆಹಲಿಯಿಂದಲೇ ತಮ್ಮ ವಿರೋಧಿಗಳಿಗೆ ಯಡಿಯೂರಪ್ಪ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ.
ದೆಹಲಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ಕೊಡುವಂತೆ ಪಕ್ಷದ ವರಿಷ್ಠರು ನನ್ನನ್ನು ಕೇಳಿಲ್ಲ. ಈ ಬಗ್ಗೆ ಎದ್ದಿರುವ ವದಂತಿಗಳಲ್ಲಿ ಹುರುಳಿಲ್ಲ. ನಾನು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಸ್ಪಷ್ಟಪಡಿಸಿದರು.
ವರಿಷ್ಠರು ರಾಜೀನಾಮೆ ಕೊಡುವಂತೆ ನನಗೆ ಸೂಚಿಸಿದ್ದಾರೆ ಎಂಬುದು ಸತ್ಯಕ್ಕೆ ದೂರವಾದ ಮಾತು. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ಪ್ರಧಾನಿಯವರನ್ನು ನಿನ್ನೆ (ಶುಕ್ರವಾರ) ಭೇಟಿಯಾದ ವೇಳೆ ರಾಜ್ಯದ ಅಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚೆ ಮಾಡಲಾಗಿದೆ. ಮತ್ತೆ ಮುಂದಿನ ತಿಂಗಳು ದೆಹಲಿಗೆ ಆಗಮಿಸುತ್ತಿದ್ದೇನೆ ಎಂದು ಮಾಹಿತಿ ನೀಡಿದರು.
ನನಗೆ ರಾಷ್ಟ್ರೀಯ ನಾಯಕರು ಸಂಪೂರ್ಣವಾದ ಸಹಕಾರವನ್ನು ಕೊಡುತ್ತಿದ್ದಾರೆ. ಈ ಕ್ಷಣದವರೆಗೂ ನನ್ನನ್ನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಿ ಎಂದು ಯಾರೊಬ್ಬರೂ ಕೇಳಿಲ್ಲ. ವದಂತಿಗಳಿಗೆ ನಾನು ಯಾವುದೇ ಉತ್ತರವನ್ನು ಕೊಡುವುದಿಲ್ಲ. ರಾಜ್ಯದ ಅಭಿವೃದ್ಧಿಯ ಕಡೆ ಗಮನಕೊಡುತ್ತೇನೆ ಎಂದು ತಿಳಿಸಿದರು.
ಅಡ್ಡಿಪಡಿಸಬೇಡಿ:
ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಿಪಡಿಸುವುದು ಸರಿಯಲ್ಲ. ಈ ಯೋಜನೆ ಜಾರಿಯಿಂದ ತಮಿಳುನಾಡಿಗೆ ಯಾವುದೇ ತೊಂದರೆಯಿಲ್ಲ. ಈ ಬಗ್ಗೆ ಸಂಬಂಧಪಟ್ಟವರಿಗೆ ಮನವರಿಕೆ ಮಾಡಿ ಯೋಜನೆಯನ್ನು ಆದಷ್ಟು ಶೀಘ್ರ ಆರಂಭಿಸುತ್ತೇವೆ. ಎರಡೂ ರಾಜ್ಯಗಳು ಪರಸ್ಪರ ಸೌಹಾರ್ದದಿಂದ ನಡೆದುಕೊಳ್ಳಬೇಕೆಂಬುದು ನನ್ನ ಆಶಯ.ಈ ನಿಟ್ಟಿನಲ್ಲಿ ಎಲ್ಲ ಪ್ರಯತ್ನ ಮಾಡುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.
ತಮ್ಮ ವಿರೋಧಿಗಳಿಗೆ ಸಂದೇಶ ರವಾನೆ:
ರಾಜ್ಯದಲ್ಲಿ ನಾಯಕತ್ವ ಬದಲಾಗುತ್ತದೆ, ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಿಎಂ ಕುರ್ಚಿಯಿಂದ ಕೆಳಗಿಳಿಸಲಾಗುತ್ತದೆ ಎಂದು ಎಂಬ ಊಹಾಪೋಹದ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ದೆಹಲಿಯ ವರಿಷ್ಟರ ಅಂಗಳದಲ್ಲಿ ನಿಂತು ಹೇಳುವ ಮೂಲಕ ಪಕ್ಷದೊಳಗಿನ ತಮ್ಮ ವಿರೋಧಿಗಳಿಗೆ ಖಡಕ್‌ ಸಂದೇಶ ನೀಡಿದ್ದಾರೆ.
ತನಗೆ ರಾಜೀನಾಮೆ ನೀಡುವಂತೆ ಪಕ್ಷದ ವರಿಷ್ಠರು ಕೇಳಿಲ್ಲ. ಹೀಗಾಗಿ ನನ್ನ ಸ್ಥಾನಕ್ಕೆ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಯಲ್ಲಿ ಶನಿವಾರ ಮಾಧ್ಯಮದವರ ಮುಂದೆ ಸ್ಪಷ್ಟಪಡಿಸಿರುವುದು ಬಿಜೆಪಿ ಸರ್ಕಾರಕ್ಕೆ ತಮ್ಮ ನಾಯಕತ್ವ ಅಬಾಧಿತ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ಬಿಜೆಪಿ ವರಿಷ್ಠರು ಹೊಸ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಿದ್ದಾರೆ, ಯಡಿಯೂರಪ್ಪ ಆಂಧ್ರ ರಾಜ್ಯಪಾಲರಾಗಿ ನೇಮಕಗೊಳ್ಳಲಿದ್ದಾರೆ ಎಂಬ ಊಹಾಪೋಹದ ಸುದ್ದಿಗಳು ಹರಿದಾಡಿದ್ದವು. ಇದಕ್ಕೆ ಯಡಿಯೂರಪ್ಪ ಸ್ಪಷ್ಟ ಉತ್ತರವನ್ನು ದೆಹಲಿಯಲ್ಲೇ ನೀಡಿದ್ದಾರೆ. ಅ ಎಲ್ಲ ರಾಜಕೀಯ ವಿದ್ಯಮಾನಗಳ ಬಗ್ಗೆ ಅರಿವು ಇದ್ದ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಮನವಿ ಮಾಡುವ ಮೂಲಕ ತಮ್ಮ ರಾಜಕೀಯ ವಿರೋಧಿಗಳಿಗೆ ಅಚ್ಚರಿ ಮೂಡಿಸಿದ್ದಾರೆ.

ಪ್ರಮುಖ ಸುದ್ದಿ :-   ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ...!?

5 / 5. 2

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement