ರಾಜ್ಯದಲ್ಲಿ ಇನ್ನೂ ೨ ದಿನ ವರುಣನ ಅಬ್ಬರ

posted in: ರಾಜ್ಯ | 0

ಬೆಂಗಳೂರು: ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಕಳೆದ ಹದಿನೈದು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದು, ಶಿವಮೊಗ್ಗ, ಉಡುಪಿ, ಮಂಗಳೂರು, ಚಿಕ್ಕಮಗಳೂರು, ಕೊಡಗು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಇನ್ನೂ ಎರಡು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.

ಆಗುಂಬೆ ಸುತ್ತಮುತ್ತಲೂ ಕಳೆದ ಮೂರು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಅಧಿಕ ಪ್ರಮಾಣದ ಮಳೆಯಾಗುತ್ತಿದ್ದು ಜುಲೈ ೨೩ರ ತನಕವೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ.

ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲೂ ಮಳೆಯ ವಾತಾವರಣವಿದ್ದು ನಿತ್ಯವೂ ಸುರಿವ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.

ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿರುವ ಪ್ರದೇಶ ವಿಸ್ತರಿಸಿರುವುದರಿಂದಾಗಿ ಜುಲೈ ೨೩ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಜುಲೈ ೨೪ರವರೆಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ  ತಿಳಿಸಿದೆ.

ಪ್ರಮುಖ ಸುದ್ದಿ :-   ಸುಳ್ಳು ಚುನಾವಣಾ ಅಫಿಡವಿಟ್‌ ಪ್ರಕರಣ : ಬಿಜೆಪಿ ಶಾಸಕ ಗರುಡಾಚಾರಗೆ ವಿಧಿಸಿದ್ದ ಜೈಲು ಶಿಕ್ಷೆ ರದ್ದುಮಾಡಿದ ಹೈಕೋರ್ಟ್

ಕರ್ನಾಟಕದಲ್ಲಿ ಇನ್ನೂ ಎರಡು ಮೂರು ದಿನ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಜುಲೈ ೨೩ ಅಥವಾ ೨೪ರ ತನಕವೂ ಮಳೆಯ ವಾತಾವರಣ ಮುಂದುವರೆಯಲಿದ್ದು, ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಸದ್ಯಕ್ಕೆ ನಿಲ್ಲುವುದು ಅನುಮಾನ ಎನ್ನಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಂದರೆ ಜುಲೈ ೨೧, ೨೨ ಮತ್ತು ೨೩ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದಿನಿಂದ ಎರಡು ದಿನ ಅಧಿಕ ಪ್ರಮಾಣದ ಮಳೆಯಾಗಲಿದೆ. ಇಂದು ಮತ್ತು ನಾಳೆ (ಜುಲೈ ೨೧ ಮತ್ತು ೨೨) ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಜುಲೈ ೨೩ರಂದು ಮಳೆ ಹೆಚ್ಚಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಪ್ರಮುಖ ಸುದ್ದಿ :-   ಯಕ್ಷಗಾನದ ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಜುಲೈ ೨೨ ಮತ್ತು ೨೩ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಮುಂದಿನ ಎರಡು ದಿನಗಳ ಕಾಲ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement