ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಸುಧಾರಣೆಗೆ ಮುಂದಾಗಿದ್ದು ಈ ಬಗ್ಗೆ ಶೀಘ್ರ ಅಂತಿಮ ತೀರ್ಮಾನ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಜರುಗಿದ ಎಲ್ಲ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ರಾಜ್ಯದ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದ್ದಾರೆ.
ಕೈಗಾರಿಕೆಗಳ ಮೇಲೆ ಹಾಕಲಾಗುತ್ತಿರುವ ತೆರಿಗೆಗಳು ಬಹಳ ಹೆಚ್ಚಾಗಿವೆ. ಖಾಲಿ ಇರುವ ಜಾಗದ ಮೇಲೂ ಬಹಳಷ್ಟು ತೆರಿಗೆ ಹಾಕಲಾಗುತ್ತಿದೆ. ತೆರಿಗೆ ಪದ್ದತಿಯಲ್ಲಿ ರಾಜ್ಯಾದ್ಯಂತ ಪಾರದರ್ಶಕ ಹಾಗೂ ಒಂದೇ ರೀತಿಯ ತೆರಿಗೆ ಪದ್ದತಿ ಅಳಡಿಸಿಕೊಳ್ಳುವುದು ಬಹಳ ಅವಶ್ಯವಾಗಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಮೂವರು ಸಚಿವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಸಮಸ್ಯೆಗಳ ಬಗ್ಗೆಯೂ ಶೀಘ್ರವಾಗಿ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದ್ದಾರೆ.
ಸಭೆಯಲ್ಲಿ ಎಲ್ಲ ಕೈಗಾರಿಕಾ ಸಂಸ್ಥೆಗಳ ಪ್ರತಿನಿಧಿಗಳು ತಮ್ಮ ಸಮಸ್ಯೆಗಳನ್ನು ತಿಳಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ತೆರಿಗೆ ಪದ್ದತಿಯ ಅನುಷ್ಠಾನಕ್ಕೆ ಅಗತ್ಯವಿರುವ ಸುಧಾರಣೆಗಳನ್ನು ಶೀಘ್ರ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಮುಂದಿನ ವಾರ ಜಿಲ್ಲೆಯ ಜಿಲ್ಲಾಧಿಕಾರಿಗಳು, ಮಹಾನಗರ ಪಾಲಿಕೆಯ ಆಯುಕ್ತರುಗಳನ್ನು ಒಳಗೊಂಡ ಸಭೆಯನ್ನು ಆಯೋಜಿಸಬೇಕು. ಆ ಸಭೆಯಲ್ಲಿ ರಾಜ್ಯಾದ್ಯಂತ ಕೈಗಾರಿಕೆಗಳಿಂದ ಬಾಕಿ ಇರುವ ತೆರಿಗೆಯ ಬಗ್ಗೆ ಮಾಹಿತಿಯನ್ನು ಪಡೆದುಕೊಂಡು, ಒಂದು ಬಾರಿಯ ವಿಶೇಷ ಯೋಜನೆಯನ್ನು ಘೋಷಿಸುವ ನಿರ್ಧಾರಗಳನ್ನು ತಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಜಗದೀಶ ಶಟ್ಟರ ನಿರ್ದೇಶಿಸಿದ್ದಾರೆ.
ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಮಾತನಾಡಿ, ಕಳೆದ ಹಲವಾರು ಸಭೆಗಳಲ್ಲಿ ಚರ್ಚೆ ನಡೆಸಿರುವಂತೆ ಕೈಗಾರಿಕೆಗಳಿಗೆ ಪ್ರತ್ಯೇಕವಾಗಿ ಇನ್ನೊಂದು ಸ್ಲ್ಯಾಬನ್ನು ರಚಿಸುವ ನಿಟ್ಟಿನಲ್ಲಿ, ಹಳೆಯ ತೆರಿಗೆಯನ್ನು ಒನ್ ಟೈಂ ಸೆಟಲ್ಮೆಂಟ್ ಬಗ್ಗೆ ಹಾಗೂ ತೆರಿಗೆಯಲ್ಲಿ ರಿಬೇಟ್ ನೀಡುವ ನಿಟ್ಟಿನಲ್ಲಿ ಅಂತಿಮ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಇದನ್ನು ಮುಂದಿನ ಸಚಿವ ಸಂಪುಟ ಸಭೆಯ ಮುಂದಿಡಲಾಗುವುದು ಎಂದರು.
ಪೌರಾಡಳಿತ ಸಚಿವರಾದ ಎಂ.ಟಿ.ಬಿ ನಾಗರಾಜ್ ಮಾತನಾಡಿ, ಕೈಗಾರಿಕೆಗಳಿಗೆ ಕರೋನಾ ಸಾಂಕ್ರಾಮಿಕದ ಸಂಧರ್ಭದಲ್ಲಿ ತೀವ್ರ ತೊಂದರೆ ಆಗಿದೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಅಗತ್ಯವಿರುವಂತಹ ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಫ್.ಕೆ.ಸಿ.ಸಿ.ಐ. ಅಧ್ಯಕ್ಷ ಪೆರಿಕಾಲ್ ಎಂ. ಸುಂದರ್ ತೆರಿಗೆ ಸುಧಾರಣೆಯಲ್ಲಿ ಗಮನಿಸಬೇಕಾದ ಅಂಶಗಳ ಬಗ್ಗೆ ಸಚಿವರುಗಳಿಗೆ ಮನವಿ ಸಲ್ಲಿಸಿದರು.
ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಜಕುಮಾರ್ ಖತ್ರಿ, ನಗರಾಭಿವೃದ್ದಿ ಇಲಾಖೆ ಕಾರ್ಯದರ್ಶಿ ಅಜಯ್ ನಾಗಭೂಷಣ್, ನಿರ್ದೇಶಕಿ ಕಾವೇರಿ, ಕೈಗಾರಿಕಾಭಿವೃದ್ದಿ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ ಡಾ.ಎನ್.ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ರೇವಣ್ಣಗೌಡ, ಎಫ್.ಕೆ.ಸಿ.ಸಿ.ಐ. ಹಿರಿಯ ಉಪಾಧ್ಯಕ್ಷ ಡಾ.ಐ.ಎಸ್ ಪ್ರಸಾದ್ ಮತ್ತಿತರರು ಸಭೆಯಲ್ಲಿದ್ದರು.
ನಿಮ್ಮ ಕಾಮೆಂಟ್ ಬರೆಯಿರಿ