ಮಹಾರಾಷ್ಟ್ರದಲ್ಲಿ ಭಾರಿ ಮಳೆ : ರೈಲಿನಲ್ಲೇ ಸಿಲುಕಿದ 6,000 ಪ್ರಯಾಣಿಕರು..!

ಮುಂಬೈ: ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದಾಗಿ ರೈಲು ಸಂಚಾರ ಸ್ಥಗಿತಗೊಂಡಿದ್ದು, ಮಾರ್ಗ ಮಧ್ಯೆಯೇ ರೈಲಿನಲ್ಲೇ 6 ಸಾವಿರಕ್ಕೂ ಹೆಚ್ಚು ಪ್ರಯಾಣಿಕರು ಸಿಲುಕಿಕೊಂಡಿರುವ ಘಟನೆ ನಡೆದಿದೆ.
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮಹಾರಾಷ್ಟ್ರದ ಹಲವೆಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಹಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಕೊಂಕಣ ರೈಲು ಮಾರ್ಗದ ವಿವಿಧ ನಿಲ್ದಾಣಗಳಲ್ಲಿ ರೈಲು ಸಂಚಾರ ಬಂದ್ ಆಗಿದೆ. ರೈಲುಗಳಲ್ಲಿ ಸುಮಾರು 6000 ಪ್ರಯಾಣಿಕರು ಸಿಲುಕಿಕೊಳ್ಳುವಂತಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಹಾರಾಷ್ಟ್ರದಲ್ಲಿ ಈವರೆಗೆ 9 ರೈಲುಗಳನ್ನು ಸ್ಥಗಿತಗೊಳಿಸಲಾಗಿದ್ದು, ಅದರಲ್ಲಿ ಸಿಲುಕಿಕೊಂಡಿರುವ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಸಿಲುಕಿಕೊಂಡವರಿಗೆ ಆಹಾರ, ನೀರು ಹಾಗೂ ಅಗತ್ಯವಸ್ತುಗಳನ್ನು ಪೂರೈಸಲಾಗುತ್ತಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಮಳೆಯಿಂದಾಗಿ ಕೊಂಕಣ ಪ್ರದೇಶದ ರತ್ನಗಿರಿ ಹಾಗೂ ರಾಯಗಡ್ ಜಿಲ್ಲೆಗಳಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

5 / 5. ಒಟ್ಟು ವೋಟುಗಳು 1

ನಿಮ್ಮ ಕಾಮೆಂಟ್ ಬರೆಯಿರಿ