ಹುಬ್ಬಳ್ಳಿ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೈಕಮಾಂಡ್ ಸಂದೇಶಕ್ಕಾಗಿ ಕಾಯುತ್ತಿರುವ ಬೆನ್ನಲ್ಲೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು ಹುಬ್ಬಳ್ಳಿಯಲ್ಲಿ ದಿಢೀರ್ ಭೇಟಿ ಮಾಡಿ ರಹಸ್ಯ ಮಾತುಕತೆ ನಡೆಸಿದ್ದಾರೆ.ಇದು ಕುತೂಹಲಕ್ಕೆ ಕಾರಣವಾಗಿದೆ.
ಹುಬ್ಬಳ್ಳಿಯ ಮಯೂರಿ ಎಸ್ಟೇಟ್ ಪ್ರಹ್ಲಾದ್ ಜೋಶಿ ಮನೆಗೆ ದಿಢೀರ್ ಭೇಟಿ ನೀಡಿದ ಸಚಿವ ಬಸವರಾಜ ಬೊಮ್ಮಾಯಿ, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ. ಶನಿವಾರ ಬೆಳಿಗ್ಗೆಯಷ್ಟೇ ನಾನು ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಏನೂ ಮಾತನಾಡಲಾರೆ. ನಾನು ಮುಖ್ಯಮಂತ್ರಿ ಹುದ್ದೆಗೆ ಫ್ರಂಟ್ ರನ್ನರ್ ಅಲ್ಲ ಎಂದು ಹೇಳಿಕೆ ನೀಡಿದ್ದ ಜೋಶಿ ಹಾಗೂ ಬೊಮ್ಮಾಯಿ ಅವರ ರಹಸ್ಯ ಮಾತುಕತೆ ರಾಜ್ಯ ರಾಜಕಾರಣದಲ್ಲಿ ಚರ್ಚೆಗೆ ಗ್ರಾಸ ಒದಗಿಸಿದೆ.
ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಬೊಮ್ಮಾಯಿ , ಬಹಳ ದಿನಗಳ ನಂತರ ಜೋಶಿ ಅವರನ್ನು ಭೇಟಿಯಾಗುತ್ತಿದ್ದೇನೆ. ಕೋವಿಡ್ ಕಾರಣದಿಂದ ಮೂರುನಾಲ್ಕು ತಿಂಗಳಿಂದ ಭೇಟಿ ಸಾಧ್ಯವಾಗಿರಲಿಲ್ಲ. ಜೋಶಿಯವರು ಕರೆ ಮಾಡಿ, ಭೇಟಿಯಾಗುವಂತೆ ಸೂಚಿಸಿದ್ದರು. ನನ್ನ ಶಿಗ್ಗಾಂವಿ ಕ್ಷೇತ್ರ ಜೋಶಿಯವರ ಸಂಸತ್ ಕ್ಷೇತ್ರದ ವ್ಯಾಪ್ತಿಗೆ ಬರಲಿದೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಮಳೆಯಿಂದ ಹಾನಿ ಹೆಚ್ಚಾಗಿದೆ. ಮಳೆಹಾನಿ ಬಗ್ಗೆ ಚರ್ಚಿಸಲು ಭೇಟಿ ಮಾಡಿದ್ದೆ. ನಮ್ಮ ಭೇಟಿ ಅತ್ಯಂತ ಸಹಜವಾದದ್ದು. ನಾಯಕತ್ವದ ಬದಲಾವಣೆ ಚರ್ಚೆ ಜೋಶಿ ಮತ್ತು ನನ್ನ ನಡುವೆ ಅಪ್ರಸ್ತುತ. ಆ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಹೇಳಿದರು.
ನಿಮ್ಮ ಕಾಮೆಂಟ್ ಬರೆಯಿರಿ