ಅಭಿನಯ ಶಾರದೆ ಕನ್ನಡದ ಹಿರಿಯ ನಟಿ ಜಯಂತಿ ನಿಧನ

ಬೆಂಗಳೂರು: ಅಭಿನಯ ಶಾರದೆ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಯಂತಿ ಸೋಮವಾರ ನಿಧನರಾಗಿದ್ದಾರೆ..ಅವರಿಗೆ 76 ವರ್ಷ ವಯಸ್ಸಾಗಿತ್ತು.

ಸೋಮವಾರ ಬೆಳಗಿನ ಜಾವ  ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬದುಕಿಗೆ ವಿದಾಯ ಹೇಳಿದ್ದಾರೆ.

ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ಜಯಂತಿವರದ್ದು ಖ್ಯಾತನಾಮ. ಕನ್ನಡದಲ್ಲಿಯೇ 190 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಅವರು ತೆಲುಗು, ತಮಿಳು, ಮಲಯಾಳಂ, ಹಿಂದಿ ಮತ್ತು ಮರಾಠಿ ಸೇರಿದಂತೆ 500ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ಕನ್ನಡದಲ್ಲಿ ನಟ ಸಾರ್ವಭೌಮ ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದಾರೆ.

ಒಟ್ಟು ಆರು ಭಾಷೆಯ ಚಿತ್ರಗಳಲ್ಲಿ ಅಭಿನಯಿಸಿರುವ ಜಯಂತಿ ನಿರ್ಮಾಪಕಿಯೂ ನಿರ್ದೇಶಕಿಯೂ ಆಗಿದ್ದರು. ಇವರು 1965 ‘ಮಿಸ್ ಲೀಲಾವತಿ’ ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ.’ಎರಡು ಮುಖ'(1969),ಮನಸ್ಸಿನಂತೆ ಮಾಂಗಲ್ಯ'(1976),’ಧರ್ಮ ದಾರಿ ತಪ್ಪಿತು'(1981),ಮಸಣದ ಹೂವು (1985),’ಆನಂದ್ ‘(1989) ಚಿತ್ರಗಳ ಅಭಿನಯಕ್ಕಾಗಿ ಐದು ಬಾರಿ ರಾಜ್ಯ ಪ್ರಶಸ್ತಿ ಗಳಿಸಿದ್ದಾರೆ. ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರ ಅಭಿಯನ ಮೆಚ್ಚುಗೆಗೆ ಪಾತ್ರವಾಯಿತು.

ಪ್ರಮುಖ ಸುದ್ದಿ :-   ಕನ್ನಡ ಚಿತ್ರರಂಗದ ಹಿರಿಯ ನಟ ದ್ವಾರಕೀಶ ಇನ್ನಿಲ್ಲ

1950ರಲ್ಲಿ ಬಳ್ಳಾರಿಯಲ್ಲಿ ಜನಿಸಿದ್ದ ಜಯಂತಿ ಮೂಲ ಹೆಸರು ಕಮಲಾ ಕುಮಾರಿ. ಚಿತ್ರರಂಗಕ್ಕೆ ಬಂದ ನಂತರ ಜಯಂತಿಯಾದರು. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದರೆ, ತಾಯಿ ಸಂತಾನಲಕ್ಷ್ಮಿ ಗೃಹಿಣಿ.

ವೈ. ಆರ್. ಪುಟ್ಟಸ್ವಾಮಿಯವರ ಮೂಲಕ ಜಯಂತಿ  ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ‘ಜೇನುಗೂಡು’ ಚಿತ್ರದ ಮೂಲಕ ಪದಾರ್ಪಣೆ. ಅಲ್ಲಿಂದಲೇ ಕಮಲಾ ಕುಮಾರಿ ಜಯಂತಿಯಾಗಿದ್ದು.

ಕನ್ನಡ ಚಿತ್ರರಂಗದಲ್ಲೇಮೊದಲ ಬಾರಿಗೆ ಬಿಕಿನಿ ತೊಟ್ಟು ಸುದ್ದಿಯಾಗಿದ್ದ ನಟಿ ಜಯಂತಿಯವರು ತಾವು ನಿರ್ವಹಿಸುವ ಪಾತ್ರಕ್ಕೆ ನ್ಯಾಯ ಒದಗಿಸುತ್ತಿದ್ದರು.

ಚಿತ್ರರಂಗದಲ್ಲಿ ಬಹುಬೇಡಿಕೆಯಲ್ಲಿದ್ದಾಗಲೇ ಪುಟ್ಟಣ್ಣ ಕಣಗಾಲ್ ಅವರ ನಾಗರಹಾವು ಚಿತ್ರದ ಒಂದೇ ಒಂದು ಹಾಡಿನಲ್ಲಿ ಕಾಣಿಸಿಕೊಂಡು ಕನ್ನಡ ಚಿತ್ರರಂಗದಲ್ಲಿ ಇತಿಹಾಸ ಸೃಷ್ಟಿಸಿದರು. ಒನಕೆ ಓಬವ್ವನ ಹಾಡಿನಲ್ಲಿ ಜಯಂತಿಯವರ ಅಭಿನಯ ಇಂದಿಗೂ ಜನಪ್ರಿಯ.

ನಟಿ ಜಯಂತಿ, 6 ಬಾರಿ ಅತ್ಯುತ್ತಮ ನಟಿ ಪ್ರಶಸ್ತಿಗೆ ಭಾಜನರಾಗಿದ್ದರು. 1960 ರಿಂದ 1980ರ ದಶಕದವರೆಗೂ ಚಿತ್ರರಂಗದಲ್ಲಿ ಬೇಡಿಕೆ ಉಳಿಸಿಕೊಂಡಿದ್ದರು.

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement