ಕರ್ನಾಟಕದಲ್ಲಿ ಆಗಸ್ಟ್‌ 23ರಿಂದ ಪದವಿ ವಿದ್ಯಾರ್ಥಿಗಳ ದಾಖಲು ಪ್ರಕ್ರಿಯೆ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜೊತೆ ಸೋಮವಾರ ಮಹತ್ವದ ಸಭೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ, ಈ ತಿಂಗಳ 23ರಿಂದಲೇ ಪದವಿ ಕಾಲೇಜುಗಳ ಪ್ರವೇಶ ಪ್ರಕ್ರಿಯೆ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಕುಲಪತಿಗಳ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು; ಹೊಸದಾಗಿ ರೂಪಿಸಲಾಗಿರುವ ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣಾ ವ್ಯವಸ್ಥೆ ಮೂಲಕ ದಾಖಲಾತಿ ಪ್ರಕ್ರಿಯೆ ಆರಂಭ ಮಾಡಲಾಗುವುದು. ಅದರ ಮಾದರಿಯನ್ನೂ ಉದ್ಘಾಟಿಸಲಾಗುವುದು ಎಂದು ತಿಳಿಸಿದರು
ಶಿಕ್ಷಣ ನೀತಿ ಜಾರಿಗೆ ಕೇಂದ್ರ ಸರ್ಕಾರ 15 ವರ್ಷಗಳ ಕಾಲಾವಕಾಶ ನೀಡಿದ್ದು, ರಾಜ್ಯ ಸರ್ಕಾರ ಹತ್ತ ವರ್ಷಗಳಲ್ಲೇ ಅನುಷ್ಠಾನಕ್ಕೆ ತರಲು ನಿರ್ಧರಿಸಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿ ಮಾಡುವುದಕ್ಕೆ ಅಗಸ್ಟ್‌ 7ರಂದು ಆದೇಶ ಹೊರಡಿಸಲಾಗಿದ್ದು, ಅದರ ಮಾರ್ಗಸೂಚಿ ಪ್ರಕಟಿಸಲಾಗಿದೆ ಎಂದರು
ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಮಾತೃಭಾಷೆಗೆ ಹೆಚ್ಚು ಒತ್ತು ನೀಡಲಾಗಿದೆ. ಮೊದಲಿಗಿಂತ ಹೆಚ್ಚು ವಿಸ್ತೃತವಾಗಿ ಕನ್ನಡವನ್ನು ಕಲಿಯುವ ಅವಕಾಶ ಕಲ್ಪಿಸಲಾಗಿದೆ. ಎರಡು ವರ್ಷಗಳ ಕನ್ನಡ ಕಲಿಕೆ ಇತ್ತು. ಈಗ ಕಡ್ಡಾಯ ಮಾಡಲಾಗಿದೆ ಎಂದು ಹೇಳಿದರು.
2021-22ರಿಂದಲೇ ಶಿಕ್ಷಣ ನೀತಿ ಜಾರಿಗೆ ಬರುತ್ತಿರುವ ಹಿನ್ನೆಲೆಯಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಗಳ‌ ವಿಷಯವಾರು ಮಾದರಿ ಪಠ್ಯಕ್ರಮಗಳನ್ನು ಸಿದ್ಧಪಡಿಸಲು ವಿಷಯ ತಜ್ಞರ 32 ಸಮಿತಿ ರಚಿಸಲಾಗಿದೆ. ಈ ಪ್ರಕಾರವಾಗಿ 3 ವರ್ಷದ ಪದವಿ ಪ್ಲಸ್‌ 2 ವರ್ಷದ ಸ್ನಾತಕೋತ್ತರ ಅಥವಾ 4 ವರ್ಷದ ಆನರ್ಸ್‌ ಪದವಿ ಪ್ಲಸ್‌ 1 ವರ್ಷದ ಸ್ನಾತಕೋತ್ತರ ಪದವಿ ಅಧ್ಯಯನದ ಬಗ್ಗೆ ವಿಷಯವಾರು ಮಾದರಿ ಪಠ್ಯ ತಯಾರಿಸುವಂತೆ ನಿರ್ದಿಷ್ಟ ಸಮಿತಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
ಈ ಎಲ್ಲ ವಿಷಯವಾರು ಸಮಿತಿಗಳು ಸಲ್ಲಿಸುವ ವರದಿಗಳ ಆಧಾರದ ಪಠ್ಯಗಳು ರಚನೆಯಾಗಲಿವೆ, ಆಗಸ್ಟ್‌ 31ರೊಳಗೆ ಪಠ್ಯ ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಎತ್ತಿರುವ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇವೆ. ಅಗತ್ಯಬಿದ್ದರೆ, ಮತ್ತಷ್ಟು ವಿವರ ನೀಡಲಾಗುವುದು. ಇದರಲ್ಲಿ ಮುಚ್ಚುಮರೆ ಏನಿಲ್ಲ. ಅತ್ಯಂತ ಪಾರದರ್ಶಕವಾಗಿ, ರಾಷ್ಟ್ರದ ಹಿತದೃಷ್ಟಿಯಿಂದ ಹೊಸ ಶಿಕ್ಷಣ ನೀತಿ ಜಾರಿಗೆ ತರಲಾಗುತ್ತಿದ್ದು. ಮುಖ್ಯವಾಗಿ ಕನ್ನಡದ ಕಲಿಕೆಯ ಬಗ್ಗೆ ಸಿದ್ದರಾಮಯ್ಯ ಹೇಳಿರುವ ಮಾತು ಸತ್ಯಕ್ಕೆ ದೂರವಾದದ್ದು ಎಂದು ಹೇಳಿದರು
ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಆಗುತ್ತಿರುವ ಹಿನ್ನೆಲೆಯಲ್ಲಿ ಇನ್ನಷ್ಟು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೇಡಿಕೆ ಇಡುತ್ತೇವೆ. ಉನ್ನತ ಶಿಕ್ಷಣ ಸುಧಾರಣೆಗೆ ಕನಿಷ್ಠ 3000 ಕೋಟಿ ರೂ.ಗಳು ಬೇಕು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು.
ಉನ್ನತ ಶಿಕ್ಷಣ ಪರಿಷತ್‌ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್‌, ವಿವಿಧ ವಿವಿಗಳ ಕುಲಪತಿಗಳು ಸಭೆಯಲ್ಲಿ ಹಾಜರಿದ್ದರು.

ಪ್ರಮುಖ ಸುದ್ದಿ :-   ಎಸ್ ಎಸ್ ಎಲ್ ಸಿ ಪರೀಕ್ಷೆ ವಿದ್ಯಾರ್ಥಿಗಳ ಮಾರಾಮಾರಿ : ಚಾಕು ಇರಿತ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement