ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸ್ ಗೌರವ ವಂದನೆ ಇಲ್ಲ: ಸಿಎಂ

ಮಂಗಳೂರು: ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಪೊಲೀಸರು ಗೌರವ ವಂದನೆ ಸಲ್ಲಿಸುವುದನ್ನು ನಿಲ್ಲಿಸುವಂತೆ ನಾಳೆ (ಶುಕ್ರವಾರ) ನಿರ್ದೇಶನ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಕೋವಿಡ್ -19 ಪರಿಸ್ಥಿತಿ ಕುರಿತ ಪರಿಶೀಲನಾ ಸಭೆಗೆ ತೆರಳುವ ಮುನ್ನ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಗೌರವ ವಂದನೆ ಸ್ವೀಕರಿಸಿದ ನಂತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ತಮ್ಮ ಆಗಮನದ ಸಮಯದಲ್ಲಿ ಗೌರವ ವಂದನೆ ನೀಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ವಿಮಾನ ನಿಲ್ದಾಣ, ರೈಲ್ವೆ ನಿಲ್ದಾಣ ಮತ್ತು ಇತರ ಸಾರ್ವಜನಿಕ ಸ್ಥಳಗಳಲ್ಲಿ ಗೌರವ ವಂದನೆ ಜನರಿಗೆ ತೊಂದರೆ ಉಂಟು ಮಾಡುತ್ತದೆ ಎಂದರು.
ಕೋವಿಡ್ -19 ರ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಹೀಗಾಗಿ ಮಕ್ಕಳ ಚಿಕಿತ್ಸೆಗಾಗಿ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಮಕ್ಕಳ ವಿಭಾಗಗಳನ್ನು ಆರಂಭಿಸಲಾಗುವುದು ಎಂದರು.
ನಾವು ಗ್ರಾಮೀಣ ಮಟ್ಟದಲ್ಲಿ ಕಾರ್ಯಪಡೆಗಳನ್ನು ಸಕ್ರಿಯಗೊಳಿಸುತ್ತಿದ್ದೇವೆ. ಪ್ರಕರಣಗಳು ಹೆಚ್ಚಾಗದಂತೆ ನೋಡಿಕೊಳ್ಳಲು ಹೋಮ್ ಐಸೊಲೇಷನ್ ಮತ್ತು ಕೋವಿಡ್ ಕೇರ್ ಸೆಂಟರ್‌ಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲಾಗುವುದು. ಹೆಚ್ಚು ಪಾಸಿಟಿವ್ ಪ್ರಕರಣಗಳು ಇರುವ ಪ್ರದೇಶಗಳ ಮೇಲೆ ನಾವು ನಿಗಾ ವಹಿಸುತ್ತಿದ್ದೇವೆ ಎಂದರು.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಪ್ರಕರಣಗಳು ಹೆಚ್ಚಾಗುತ್ತಿವೆ; ವೈರಸ್ ನಿಯಂತ್ರಿಸಲು ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ. “ನಾನು ಜನರಿಗೆ ತೊಂದರೆಯನ್ನುಂಟು ಮಾಡುವ ಲಾಕ್‌ಡೌನ್ ಅನ್ನು ಜಾರಿಗೊಳಿಸಲು ಬಯಸುವುದಿಲ್ಲ. ಸೋಖು ತಗುಲಿ ಗುಣಪಡಿಸುವುದಕ್ಕಿಂತ ತಡೆಗಟ್ಟುವುದು ಉತ್ತಮ. ನಾವು ನಮ್ಮ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಿಕೊಳ್ಳಲು, ಕೋವಿಡ್ ಪರೀಕ್ಷೆ ಮತ್ತು ಟ್ರ್ಯಾಕ್ ಮಾಡುವ ಬಗ್ಗೆ ಗಮನ ಹರಿಸುತ್ತಿದ್ದೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ಆರ್‌ಎಸ್‌ಎಸ್‌ ನೋಂದಣಿ- ಕಾನೂನುಬದ್ಧ ಸ್ಥಿತಿಗತಿಯ ಬಗ್ಗೆ ಸ್ಪಷ್ಟನೆ ಕೋರಿ ಮುಖ್ಯಸ್ಥ ಮೋಹನ ಭಾಗವತ್‌ಗೆ ಪತ್ರ ಬರೆದ ಪ್ರಿಯಾಂಕ್ ಖರ್ಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement