ತಾರತಮ್ಯ ಮಾಡ್ತಾರೆ ಎಂದು ಆರೋಪಿಸಿ ತಮ್ಮದೇ ಸರ್ಕಾರದ ವಿರುದ್ಧ ವಿಧಾನಸೌಧದ ಮುಂದೆ ಧರಣಿ ಕುಳಿತ ಬಿಜೆಪಿ ಶಾಸಕ..!

ಬೆಂಗಳೂರು: ಮೂಡಿಗೆರೆ ತಾಲೂಕನ್ನು ಅತಿವೃಷ್ಟಿಯ ಪಟ್ಟಿಗೆ ಸೇರಿಸದೇ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿ ತಮ್ಮದೇ ಸರ್ಕಾರದ ವಿರುದ್ಧವೇ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದ ವಿದ್ಯಮಾನ ನಡೆದಿದೆ.
ನಮ್ಮ ಧ್ವನಿಗೆ ನಮ್ಮ ಸರ್ಕಾರದಲ್ಲಿ ಬೆಲೆ ಸಿಗುತ್ತಿಲ್ಲ. ಮೀಸಲು ಕ್ಷೇತ್ರ ಎನ್ನುವ ಕಾರಣಕ್ಕೊ ಏನೋ ನನ್ನ ಕ್ಷೇತ್ರವನ್ನು ಕಡೆಗಣಿಸುತ್ತಿದ್ದಾರೆ. ನಮ್ಮ ಸರ್ಕಾರವೇ ಈ ರೀತಿ ತಾರತಮ್ಯ ಮಾಡಬಾರದು. ಆದಷ್ಟು ಬೇಗ ಸಾಮಾನ್ಯ ಕ್ಷೇತ್ರ ಆಗಲಿ ಎಂದು ಅನಿಸಲು ಶುರುವಾಗಿದೆ. ಏಕಾಏಕಿ ನಿನ್ನೆ ಕಂದಾಯ ಇಲಾಖೆ ಮಾಡಿದ ಅತಿವೃಷ್ಟಿ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರ ಕೈಬಿಡಲಾಗಿದೆ. ಇವರಿಗೆ ಬರಿ ಮಾತಲ್ಲಿ ಹೇಳಿದರೆ ಅರ್ಥ ಆಗುವುದಿಲ್ಲ. ಎನ್‍ಡಿಆರ್‍ಎಫ್ ಪಟ್ಟಿಯಲ್ಲಿ ಮೂಡಿಗೆರೆ ಸೇರಿಸಬೇಕು. ನಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಪರಿಹಾರ ಕೊಡಬೇಕು ಅದಕ್ಕಾಗಿ ನಾನು ಇಲ್ಲಿಯೇ ಕೂರುತ್ತೇನೆ ಎಂದು ಎಂ.ಪಿ ಕುಮಾರಸ್ವಾಮಿ ಪ್ರತಿಭಟನೆ ನಡೆಸಿದರು.
2019 ರಲ್ಲಿ ಅತಿವೃಷ್ಟಿ ಆಗಿತ್ತು. ಈ ವೇಳೆ ಮನೆಗಳು, ಕಾಫಿತೋಟ ಕೊಚ್ಚಿಕೊಂಡು ಹೋಗಿತ್ತು. ಅಲ್ಲದೇ 6 ಜನ ಮನೆ ಸಮೇತ ಕೊಚ್ಚಿಕೊಂಡು ಹೋಗಿದ್ದರು. ಆದರೂ ಪರಿಹಾರ ನೀಡದೇ ನಿರ್ಲಕ್ಷ್ಯ ಮಾಡಲಾಗಿತ್ತು. ಶಿವಮೊಗ್ಗ ನಗರ ಎನ್‌ಡಿಆರ್‌ಎಫ್‌ ವ್ಯಾಪ್ತಿಗೆ ಸೇರುತ್ತದೆ. ಮೂಡಿಗೆರೆಯಲ್ಲಿ 900 ಸೆಂಟಿ ಮೀಟರ್ ಮಳೆಯಾಗಿದೆ. ಕುಮಾರಸ್ವಾಮಿ ಮುಖ್ಯಮಂತ್ರಿ ಆದಾಗ ನಮಗೆ ಕ್ಷೇತ್ರಕ್ಕೆ ಅನುದಾನ ಬಿಡುಗಡೆ ಆಗಿತ್ತು. ಆದರೆ ನಮ್ಮದೇ ಸರ್ಕಾರ ಇದ್ದರೂ ನಿರ್ಲಕ್ಷ್ಯ ಮಾಡಲಾಗುತ್ತಿದೆ ಎಂದು ತಮ್ಮದೇ ಪಕ್ಷದ ಸರ್ಕಾರದ ಕಾರ್ಯವೈಖರಿ ವಿರುದ್ಧ ಆರೋಪಿಸಿದ್ದಾರೆ.
ಶಾಸಕ ಎಂಪಿ ಕುಮಾರಸ್ವಾಮಿ ಪ್ರತಿಭಟನೆ ಸುದ್ದಿ ತಿಳಿದು ಕಂದಾಯ ಸಚಿವ ಆರ್ ಅಶೋಕ್ ತಮ್ಮ ಆಪ್ತ ಕಾರ್ಯದರ್ಶಿಯನ್ನು ಸಂಧಾನಕ್ಕೆ ಕಳುಹಿಸಿದರು. ಅಶೋಕ್ ತಮ್ಮ ಆಪ್ತ ಕಾರ್ಯದರ್ಶಿ ಮೂಲಕ ಫೋನ್‌ನಲ್ಲಿ ಸಂಪರ್ಕಿಸಿ ಎಂಪಿ ಕುಮಾರಸ್ವಾಮಿ ಜೊತೆ ಮಾತನಾಡಲು ಪ್ರಯತ್ನಿಸಿದ್ದಾರೆ. ಈ ವೇಳೆ ಎಂ.ಪಿ ಕುಮಾರಸ್ವಾಮಿಯವರು ಕರೆಯನ್ನು ನಿರಾಕರಿಸಿ ಹೇಳಿದ ಒಂದು ಕೆಲಸವನ್ನೂ ಮಾಡಿಕೊಡಲ್ಲ, ಅಶೋಕ ಅವರೇ ಸ್ಥಳಕ್ಕೆ ಬರಲಿ ಎಂದು ಹೇಳಿದ್ದಾರೆ.
ನಂತರ ಎಂಪಿ ಕುಮಾರಸ್ವಾಮಿ ಸಿಟ್ಟಿಗೆ ಬೆದರಿ ಪ್ರತಿಭಟನಾ ಸ್ಥಳಕ್ಕೆ ಆರ್. ಅಶೋಕ್ ಆಗಮಿಸಿದ್ದಾರೆ. ಈ ವೇಳೆ ಕುಮಾರಸ್ವಾಮಿಯವರು ನಾನು ಹಿರಿಯ ಶಾಸಕ, ನನಗೆ ಹೀಗೆ ಮಾಡೋದು ಸರಿಯಾ? ಎಷ್ಟು ಬೇಜಾರಾಗಲ್ಲ ನಮಗೆ ಹೇಳಿ ಮಂತ್ರಿ ಸ್ಥಾನ ಕೊಡದೇ ಇದ್ದಾಗಲೂ ಮಾತು ಕೇಳಿದ್ದೇನೆ. ನಾನು ಪಕ್ಷಕ್ಕೆ ಲಾಯಲ್ ಆಗಿಲ್ವಾ? ನನ್ನ ಮಾತಿಗೆ ತೂಕ ಇಲ್ಲ ಅಂದರೆ ಹೇಗೆ? ಎಂದು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ.ಈ ವೇಳೆ ಸಚಿವ ಅಶೋಕ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ನಂತರ ಕುಮಾರಸ್ವಾಮಿ ಧರಣಿ ಅಂತ್ಯಗೊಳಿಸಿದ್ದಾರೆ.
ಅನುದಾನ ಸಮಸ್ಯೆ ಆಗಿದೆ. ಬೆಳೆ ಪರಿಹಾರ ವಿನಂತಿ ಇದೆ. ಸಿಎಂ ಬಳಿ ಮಾತನಾಡಿ ಬೆಳೆ ಪರಿಹಾರ ಕೊಡಬೇಕಾಗಿದ್ದನ್ನು ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುತ್ತೇವೆ ಎಂದು ಸಚಿವ ಅಶೋಕ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

 

 

 

 

 

 

 

 

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement