ಸೆ.30ರೊಳಗೆ 2ಎ ಮೀಸಲಾತಿ ಘೋಷಿಸದಿದ್ದರೆ ಅ 1ರಿಂದ ಧರಣಿ: ಜಯಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಪಂಚಮಸಾಲಿ ಸಮಾಜಕ್ಕೆ ಮುಂದಿನ ಸೆ.30ರ ಒಳಗೆ 2ಎ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೆಂಗಳೂರಿನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ನೂತನ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈ ಹಿಂದೆ ಧರಣಿ ವೇಳೆ ಗೃಹಸಚಿವರಾಗಿದ್ದರು. ಈಗ ಅವರೇ ಮುಖ್ಯಮಂತ್ರಿಯಾಗಿದ್ದಾರೆ. ಶಿಗ್ಗಾಂವಿಯಲ್ಲಿ ಬೊಮ್ಮಾಯಿ 3 ಬಾರಿ ಗೆಲ್ಲಲು ನಮ್ಮ ಸಮಾಜ ಕಾರಣ. ಪಂಚಮಸಾಲಿ ಸಮುದಾಯಕ್ಕೆ ಸೇರಿದವರಿಗೆ ಮುಖ್ಯಮಂತ್ರಿ ಸ್ಥಾನ ಸಿಗದ ಕಾರಣ ಬೇಸರವಿದೆ. ಈ ಬೇಸರ ನಿವಾರಣೆ ಆಗಬೇಕಾದರೆ ಮೀಸಲಾತಿ ನೀಡಬೇಕು ಎಂದು ಹೇಳಿದರು.
ಪಂಚಮಸಾಲಿ ಹಾಗೂ ಗೌಡ ಲಿಂಗಾಯತರಿಗೆ 2ಎ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಬೃಹತ್ ಸಮಾವೇಶ ನಡೆಸಿ ನಮ್ಮ ಹಕ್ಕೊತ್ತಾಯ ಮಂಡಿಸಿದ್ದೆವು. ಈ ಬಗ್ಗೆ ಅಧಿವೇಶನದಲ್ಲಿ ಮಾತು ನೀಡಿದ್ದ ಸರ್ಕಾರವು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ಬೇಡಿಕೆ ಈಡೇರಿಸುವ ಭರವಸೆ ನೀಡಿತ್ತು. ಆದರೆ ಬದಲಾದ ಕಾಲಘಟ್ಟದಲ್ಲಿ ಮುಖ್ಯಮಂತ್ರಿ ಬದಲಾಗಿದ್ದಾರೆ. ನಮ್ಮ ಹಿಂದೆ ನಡೆಸಿದ ಸಮಾವೇಶಕ್ಕೆ ಸಹಕರಿಸಿದ್ದ ಬಸವರಾಜ ಬೊಮ್ಮಾಯಿಯವರು ಈಗ ಮುಖ್ಯಮಂತ್ರಿ ಆಗಿದ್ದಾರೆ. ಹಾಗಾಗಿ ಸರ್ಕಾರಕ್ಕೆ ನಮ್ಮ ಹಕ್ಕೊತ್ತಾಯಗಳನ್ನು ಮತ್ತೆ ನೆನಪಿಸುವ ಕಾರ್ಯ ಮಾಡುತ್ತೇವೆ ಎಂದರು.
ಆಗಸ್ಟ್ 26ರಿಂದ 30ರ ವರೆಗೆ ಪಂಚಮಸಾಲಿ ಪ್ರತಿಜ್ಞಾ ಪಂಚಾಯತ್ ಅಭಿಯಾನ ನಡೆಯಲಿದೆ. ಮಲೆಮಹದೇಶ್ವರ ಬೆಟ್ಟದಿಂದ ಬೆಂಗಳೂರಿನ ವರೆಗೆ ಜಾಗೃತಿ ಅಭಿಯಾನ ಸಂಚರಿಸಲಿದ್ದು, ಅಕ್ಟೋಬರ್ 1 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಧರಣಿ ಸತ್ಯಾಗ್ರಹ ನಡೆಸಲಾಗುವುದು. ರಾಜ್ಯದ ಪ್ರತಿ ತಾಲೂಕಿನಲ್ಲಿಯೂ ಪಂಚಮಸಾಲಿ ಗೌಡ ಹಾಗೂ ದೀಕ್ಷಾ ಪಂಚಮಸಾಲಿ ಸಮಾಜವನ್ನು ಒಗ್ಗೂಡಿಸುವ ಪ್ರಯತ್ನ ಮಾಡಲಾಗುವುದು ಎಂದು ಹೇಳಿದರು.

ಪ್ರಮುಖ ಸುದ್ದಿ :-   ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

\

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement