ಹುಬ್ಬಳ್ಳಿ-ಧಾರವಾಡ ಪಾಲಿಕೆ ಚುನಾವಣೆ: ಎರಡು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ

ಎರಡು ದಿನದಲ್ಲಿ ಪ್ರಣಾಳಿಕೆ ಬಿಡುಗಡೆ
ಹುಬ್ಬಳ್ಳಿ:ಹುಬ್ಬಳ್ಳಿ-ಧಾರವಾಡ ಮಹಾನಗರದ ಭವಿಷ್ಯದ ದೃಷ್ಟಿಯಿಂದ ಬಿಜೆಪಿ ಹಲವಾರು ಯೋಜನೆಗಳನ್ನು ಅನುಷ್ಠಾನಗೊಳಿಸಲು ಕನಸು ಕಂಡಿದೆ. ಆ ಯೋಜನೆಗಳ ಒಳಗೊಂಡ ಪ್ರಣಾಳಿಕೆಯನ್ನು ಎರಡು ದಿನದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದ್ದಾರೆ.
ಇಲ್ಲಿಯ ದೇಶಪಾಂಡೆ ನಗರದ ಪಕ್ಷದ ಪಾಲಿಕೆ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು,ಅಭಿವೃದ್ಧಿ ಕೆಲಸಗಳೇ ಪಕ್ಷಕ್ಕೆ ಶ್ರೀರಕ್ಷೆಯಾಗಲಿವೆ. ಪಾಲಿಕೆಯಲ್ಲಿ ಮೂರನೇ ಬಾರಿಗೆ ಕಮಲ ಅರಳಲಿದೆ ಎಂದರು.
೨೦೧೩ರಲ್ಲಿ ನಡೆದ ಚುನಾವಣೆಯಲ್ಲಿ ಪಕ್ಷವು ಬಿಜೆಪಿ, ಕೆಜೆಪಿ ಹಾಗೂ ಬಿಎಸ್ ಆರ್ ಕಾಂಗ್ರೆಸ್ ಆಗಿ ವಿಭಜನೆಯಾಗಿತ್ತು. ಆದರೂ ಸಂಘಟಿತ ಪ್ರಯತ್ನದಿಂದ ಪಾಲಿಕೆ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿತ್ತು ಎಂದರು.
ರಸ್ತೆ ಸೇರಿದಂತೆ ಮೂಲಸೌಕರ್ಯವಿಲ್ಲ ಎಂದು ಭೈರಿದೇವರಕೊಪ್ಪದ ರಾಜಧಾನಿ ಕಾಲೊನಿಯ ಚುನಾವಣೆ ಬಹಿಷ್ಕರಿಸಿರುವ ಸ್ಥಳೀಯರೊಂದಿಗೆ ಪಕ್ಷದ ಮುಖಂಡರು ಮಾತುಕತೆ ನಡೆಸಿದ್ದಾರೆ. ಚುನಾವಣಾ ಬಳಿಕ ಬೇಡಿಕೆ ಈಡೇರಿಸುವ ಭರವಸೆ ನೀಡಿ ಮನವೊಲಿಸುವ ಯತ್ನ ನಡೆಸಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ತಿಳಿಸಿದರು.
ಪಕ್ಷದಲ್ಲಿ ಗೂಂಡಾಗಿರಿಗೆ ಅವಕಾಶವಿಲ್ಲ. ಕ್ಷೇತ್ರದ ಕೆಲ ವಾರ್ಡ್‌ಗಳ ಅಭ್ಯರ್ಥಿಗಳು ಇತರ ಪಕ್ಷಗಳ ಅಭ್ಯರ್ಥಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ. ನಮ್ಮಲ್ಲಿ ಗೂಂಡಾಗಿರಿ ಅವಕಾಶವಿಲ್ಲ ಎಂದರು.
ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಅವಳಿನಗರಕ್ಕೆ ಜಗದೀಶ ಶೆಟ್ಟರ ಮತ್ತು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೊಡುಗೆ ಅಪಾರ. ಕುಡಿಯುವ ನೀರಿನ ಯೋಜನೆ, ಸ್ಮಾರ್ಟ್ ಸಿಟಿ, ವಿಮಾನ ನಿಲ್ದಾಣ ಅಭಿವೃದ್ಧಿ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳು ನಡೆದಿವೆ. ಜನ ಅಭಿವೃದ್ಧಿ ಗುರುತಿಸಿ ಪಕ್ಷದ ಅಭ್ಯರ್ಥಿಗಳಿಗೆ ಮತ ನೀಡುವ ವಿಶ್ವಾಸವಿದೆ ಎಂದರು.
ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಪಕ್ಷದ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ ಪಾಟೀಲ, ನಾಗೇಶ ಕಲಬುರ್ಗಿ, ಜಿಲ್ಲಾ ವಕ್ತಾರ ರವಿ ನಾಯಕ, ಬಸವರಾಜ ಕುಂದಗೋಳಮಠ, ದತ್ತು ಮೂರ್ತಿ ಕುಲಕರ್ಣಿ ಇದ್ದರು.

ಪ್ರಮುಖ ಸುದ್ದಿ :-   ನೇಹಾ ಹಿರೇಮಠ ಕೊಲೆ ಪ್ರಕರಣ: ಆರೋಪಿ ಫಯಾಜ್‌ ಆರು ದಿನ ಸಿಐಡಿ ಕಸ್ಟಡಿಗೆ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement