ಮದುವೆ ಸಮಾರಂಭ: ಕಲ್ಯಾಣ ಮಂಟಪಗಳಲ್ಲಿ 400 ಜನರಿಗೆ ಅವಕಾಶ

ಬೆಂಗಳೂರು: ಮದುವೆ, ಮತ್ತಿತರೆ ಸಮಾರಂಭಗಳಲ್ಲಿ 400 ಜನಕ್ಕೆ ಅವಕಾಶ ನೀಡಲಾಗಿದೆ ಎಂದು ಆರ್. ಅಶೋಕ್ ಮಾಹಿತಿ ನೀಡಿದ್ಧಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹಕಚೇರಿ ಕೃಷ್ಣಾದಲ್ಲಿ ಇಂದು(ಸೋಮವಾರ) ತಜ್ಞರ ಜೊತೆ ಮಹತ್ವದ ಸಭೆ ನಡೆಸಿದ ನಂತರ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದರು.
ಮದುವೆ ಸಮಾರಂಭಕ್ಕೆ ಶೇ.50 ರಷ್ಟು ಅನುಮತಿ ನೀಡಲಾಗಿದೆ. ಕಲ್ಯಾಣ ಮಂಟಪಗಳಲ್ಲಿ ಗರಿಷ್ಠ 400 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಈ ಸಂಬಂಧ ಕಲ್ಯಾಣ ಮಂಟಪಗಳ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.ವಛತ್ರಗಳ ಮಾಲೀಕರು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಮಾಡಿದ್ದರು. ಹೀಗಾಗಿ ಈ ನಿರ್ಧಾರ ಮಾಡಲಾಗಿದೆ. ಆದರೆ ಕೋವಿಡ್‌ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದರು.

ಗಣೇಶೋತ್ಸವಕ್ಕೆ ಯಾವ ರೀತಿ ಅನುಮತಿ ನೀಡಬೇಕೆಂದು ಸೆಪ್ಟೆಂಬರ್ 5ರಂದು ಮುಖ್ಯಮಂತ್ರಿಗಳು ಸಭೆ ನಡೆಸಲಿದ್ದಾರೆ ಎಂದು ಸಚಿವ ಅಶೋಕ್ ಹೇಳಿದರು.
ಇಂದಿನ ಸಭೆಯಲ್ಲಿ ಗಣೇಶೋತ್ಸವ ಆಚರಣೆ ಕುರಿತು ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ. ಗಣೇಶ ಹಬ್ಬದ ಕುರಿತು ದೊಡ್ಡ ಹೆಜ್ಜೆ ಇರಿಸಬೇಕಾಗುತ್ತದೆ. ಹಲವು ಜಿಲ್ಲೆಗಳಲ್ಲಿ ದೊಡ್ಡದಾಗಿ ಹಬ್ಬವನ್ನ ಆಚರಣೆ ಮಾಡಲಾಗುತ್ತದೆ. ಈ ಸಂಬಂಧ ಜಿಲ್ಲಾಧಿಕಾರಿಗಳು ಮತ್ತು ಎಸ್.ಪಿ ಅವರಿಂದ ಮಾಹಿತಿ ಪಡೆದುಕೊಳ್ಳಲಾಗುತ್ತದೆ. ಜೊತೆಗೆ ದೊಡ್ಡ ಮಟ್ಟದಲ್ಲಿ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡುವ ಆಯೋಜಕರೊಂದಿಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ತಿಳಿಸಿದರು.
2,912 ಗ್ರಾಮ ಪಂಚಾಯತಿ ಗಳಲ್ಲಿ ಪಾಸಿಟಿವ್ ದರ ಶೂನ್ಯವಿದೆ. 6,472 ಮಕ್ಕಳ ಸ್ಯಾಂಪಲ್ ಸಂಗ್ರಹ ಮಾಡಲಾಗಿದ್ದು, ಇದರಲ್ಲಿ 14 ಮಕ್ಕಳಿಗೆ ಮಾತ್ರ ಪಾಸಿಟಿವ್ ಬಂದಿದೆ. ಗಣೇಶ ಹಬ್ಬಕ್ಕೂ ಮುನ್ನವೇ ಆರರಿಂದ ಎಂಟನೇ ತರಗತಿಗಳು ಶೇ.50ರಷ್ಟು ಸಾಮರ್ಥ್ಯದೊಂದಿಗೆ ಆರಂಭಿಸಲಾಗುತ್ತದೆ ಎಂದು ಕಂದಾಯ ಸಚಿವರು ಮಾಹಿತಿ ನೀಡಿದರು.
ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ವಿಧಿಸಿದ್ದ ಕೊರೊನಾ ನಿರ್ಬಂಧ ಸಡಿಲಿಕೆ ಮಾಡಲಾಗುವುದು. ಕೊಡಗು, ದಕ್ಷಿಣ ಕನ್ನಡ ಹೊರತುಪಡಿಸಿ ಉಳಿದೆಡೆ ಕೊರೊನಾ ನಿರ್ಬಂಧ ಸಡಿಲಿಸಲಾಗುವುದು. ಉಳಿದ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹಿಂಪಡೆಯುತ್ತಿದ್ದೇವೆ ಎಂದು ತಿಳಿಸಿದರು.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement