ಹು -ಧಾ ಮಹಾನಗರ ಪಾಲಿಕೆ ಚುನಾವಣೆ: ಸೆ.3ರ ಮತದಾನ ದಿನ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಕಚೇರಿ, ಶಾಲಾ ಕಾಲೇಜುಗಳಿಗೆ ಸಾರ್ವತ್ರಿಕ ರಜೆ; ಖಾಸಗಿ ವಲಯ ನೌಕರರಿಗೆ ವೇತನ ಸಹಿತ ರಜೆ

ಧಾರವಾಡ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾರ್ವತ್ರಿಕ ಚುನಾವಣೆಯು ಸೆಪ್ಟೆಂಬರ್ 3 ರಂದು ನಡೆಯಲಿದೆ. ಅಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 6 ಗಂಟೆ ವರೆಗೆ ಮತದಾನ ನಡೆಯಲಿದ್ದು, ಮತದಾನ ದಿನದಂದು ಎಲ್ಲ ವರ್ಗದ ನೌಕರ ಮತದಾರರಿಗೆ ವೇತನ ಸಹಿತ ರಜೆ ಮಂಜೂರು ಮಾಡಿ, ರಾಜ್ಯ ಚುನಾವಣಾ ಆಯೋಗವು ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ವ್ಯಾಪ್ತಿಯ ಎಲ್ಲ ಸರಕಾರಿ, ಅರೆ ಸರಕಾರಿ ಇಲಾಖೆ, ಖಾಸಗಿ ಉದ್ಯೋಗದಾತರು ಈ ಕುರಿತು ಕ್ರಮವಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ ಪಾಟೀಲ ತಿಳಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಮಹಾನಗರ ಪಾಲಿಕೆ ಚುನಾವಣಾ ವೇಳಾಪಟ್ಟಿಯಂತೆ ಸೆಪ್ಟಂಬರ್ 3 ರಂದು ಶುಕ್ರವಾರ ಮತದಾನ ನಡೆಯಲಿದ್ದು, ಚುನಾವಣೆ ನಡೆಯುವ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ಸಾರ್ವಜನಿಕ ಉದ್ದಿಮೆಗಳು, ವ್ಯವಹಾರಿಕ ಸಂಸ್ಥೆಗಳು, ಖಾಸಗಿ ಕಂಪನಿಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ನೀಡಬೇಕು ಎಂದು ಸೂಚಿಸಿದ್ದಾರೆ.
ಸಾರ್ವತ್ರಿಕ ಚುನಾವಣೆ ನಡೆಯುವ ನಗರ ಪ್ರದೇಶಗಳ ವ್ಯಾಪ್ತಿಯಲ್ಲಿ ಮತದಾರರಿಗೆ ಮತ ನೀಡಲು ಅನುಕೂಲವಾಗಲು ಆಯಾ ವಾರ್ಡಿನ ವ್ಯಾಪ್ತಿಯಲ್ಲಿರುವ ಎಲ್ಲಾ ಸರ್ಕಾರಿ ಕಚೇರಿಗಳು, ಶಾಲಾ ಕಾಲೇಜುಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಚುನಾವಣೆ ನಡೆಯುವ ವಾರ್ಡ್ ಗಳ ವ್ಯಾಪ್ತಿಯ ಹೊರಗಡೆ ಕೆಲಸ ನಿರ್ವಹಿಸುತ್ತಿದ್ದು, ಆದರೆ ಚುನಾವಣೆ ನಡೆಯುತ್ತಿರುವ ವಾರ್ಡಿನ ವ್ಯಾಪ್ತಿಯಲ್ಲಿ ನೊಂದಾಯಿತ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ವೇತನ ಸಹಿತ ರಜೆ ಘೋಷಿಸಲಾಗಿದೆ.
ಈ ರಜೆಯು ತುರ್ತು ಸೇವೆಗಳ ಮೇಲೆ ಇರುವ ಸರ್ಕಾರಿ ನೌಕರರಿಗೆ ಅನ್ವಯವಾಗುವುದಿಲ್ಲ, ತುರ್ತುಸೇವೆ ಅಡಿ ಕೆಲಸ ಮಾಡುವ ನೌಕರರಿಗೆ ಮತಚಲಾಯಿಸಲು ಅನುಕೂಲವಾಗುವಂತೆ ವ್ಯವಸ್ಥೆ ಮಾಡಲಾಗುತ್ತದೆ. ಮತ್ತು ಈ ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ಸರಕಾರಿ ನೌಕರರು ಚುನಾವಣಾ ಕಾರ್ಯಕ್ಕೆ ಹಾಜರಾಗಬೇಕು. ಈ ಆದೇಶವು ಸೆಕ್ಷನ್ 25, ನೆಗೋಷಿಯೆಬಲ್ ಇನ್ಸ್ಟ್ರಮೆಂಟ್ ಆಕ್ಟ್ 1881 ರಡಿ ಬರುವ ಎಲ್ಲಾ ಸಂಸ್ಥೆಗಳಿಗೂ ಸಹ ಅನ್ವಯಿಸುತ್ತದೆ.
ಸಂಬಂಧಿಸಿದ ಎಲ್ಲ ಸಾರ್ವಜನಿಕ ಉದ್ದಿಮೆಗಳು, ಖಾಸಗಿ ಕಂಪನಿ, ವ್ಯವಹಾರಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳವರು ಈ ಅಧಿಸೂಚನೆ ಯನ್ನು ಪಾಲಿಸಿ, ಎಲ್ಲ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಸೆ. 3 ರಂದು ವೇತನ ಸಹಿತ ರಜೆ ನೀಡಬೇಕೆಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಕೆ. ಪಾಟೀಲ ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಮುಖ ಸುದ್ದಿ :-   ಲೋಕಸಭಾ ಚುನಾವಣೆ ವೇಳೆ ಬಿಜೆಪಿಗೆ ಶಾಕ್ : ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿಜೆಪಿ ಸದಸ್ಯ ಕೆ.ಪಿ.ನಂಜುಂಡಿ

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement