ಶಾಸಕರು, ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣ ಹಿಂಪಡೆದ ಬಗ್ಗೆ ದಾಖಲೆ ಸಲ್ಲಿಕೆ: ಸರ್ಕಾರಕ್ಕೆ ಒಂದು ವಾರ ಕಾಲಾವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದ ಮಾಜಿ, ಹಾಲಿ ಸಂಸದರು ಮತ್ತು ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಸಂಬಂಧ ಹೊರಡಿಸಿರುವ ಆದೇಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.
ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮೇಲ್ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನದ ಮೇರೆಗೆ ದಾಖಲಿಸಿಕೊಂಡಿರುವ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರ ನೇತೃತ್ವದ ವಿಭಾಗೀಯ ಪೀಠ ಇತ್ತೀಚೆಗೆ ವಿಚಾರಣೆ ನಡೆಸಿತು ಎಮದು ಬಾರ್‌ ಎಮಡ್‌ ಬೆಂಚ್‌ ವರದಿ ಮಾಡಿದೆ.
ವರದಿ ಪ್ರಕಾರ, ಪ್ರಕರಣದಲ್ಲಿ ಅಮಿಕಸ್ ಕ್ಯೂರಿಯಾಗಿರುವ ಹಿರಿಯ ವಕೀಲ ಆದಿತ್ಯ ಸೋಂಧಿ ಅವರು ”ಹೈಕೋರ್ಟ್ ಅನುಮತಿ ಪಡೆಯದೇ ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸರ್ಕಾರ ಹಿಂಪಡೆಯುವಂತಿಲ್ಲ. ಈ ಕುರಿತು ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಮೇಲ್ವಿಚಾರಣೆ ನಡೆಸಬಹುದು. ಹಿಂಪಡೆದ ಪ್ರಕರಣಗಳನ್ನು ಪರೀಕ್ಷಿಸಬಹುದು. ಹಿಂಪಡೆದ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಹೈಕೋರ್ಟ್ ರಾಜ್ಯ ಸರ್ಕಾರದಿಂದ ಪಡೆದುಕೊಳ್ಳಬಹುದು ಎಂದು ಸುಪ್ರೀಂ ಕೊರ್ಟ್ ೨೦೨೧ರ ಆಗಸ್ಟ್‌ ೧೦ರಂದು ಆದೇಶ ನೀಡಿದೆ. ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಆದೇಶಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸುವಂತೆ ಸರ್ಕಾರಕ್ಕೆ ನ್ಯಾಯಾಲಯ ನಿರ್ದೇಶಿಸಬಹುದು” ಎಂದು ತಿಳಿಸಿದರು.
ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆದಿರುವುದಕ್ಕೆ ಸಂಬಂಧಿಸಿದ ವಿವರ ಹಾಗೂ ದಾಖಲೆಗಳನ್ನು ಸಲ್ಲಿಸಲು ಒಂದು ವಾರ ಕಾಲಾವಕಾಶ ನೀಡಬೇಕು ಎಂದು ಆಗ ಸರ್ಕಾರಿ ವಕೀಲರು ನ್ಯಾಯಪೀಠವನ್ನು ಕೋರಿದರು. ಇದಕ್ಕೆ ಒಪ್ಪಿದ ಪೀಠವು ರಾಜ್ಯ ಸರ್ಕಾರಕ್ಕೆ ಒಂದು ವಾರ ಕಾಲಾವಕಾಶ ನೀಡಿದ್ದು, ಸೆಪ್ಟೆಂಬರ್‌ 13ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಪ್ರಮುಖ ಸುದ್ದಿ :-   ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement