ಸೆಪ್ಟೆಂಬರ್ 20ರಂದು ಕರ್ನಾಟಕ ಸಿಇಟಿ -2021 ಫಲಿತಾಂಶ

ಬೆಂಗಳೂರು: ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ನಡೆದ ಸಿಇಟಿ ಪರೀಕ್ಷೆ ಫಲಿತಾಂಶ (CET Result -2021) ಸೆಪ್ಟೆಂಬರ್ 20ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಅವರು, ಆಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ-ಸಮಸ್ಯೆ ಇಲ್ಲದೆ ಪೂರ್ಣ ಗೊಳಿಸಲಾಗುವುದು. ಸಕಾಲಕ್ಕೆ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ (CET Counseling) ಮುಗಿಸಲಾಗುವುದು. ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವರು, ಈ ಬಗ್ಗೆ ಮುಂದಿನ ವಾರ ಸಭೆ ನಡೆಸಲಾಗುವುದು. ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ವಿದ್ಯಾರ್ಥಿಗಳ ಹಿತ ದೃಷ್ಟಿಯಲ್ಲಿಟ್ಟುಕೊಂಡು ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಕ್ರಮ:
ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರ್ಕಾರದ ಉದ್ದೇಶ. ಈ ಬಗ್ಗೆ ದೂರುಗಳು ಬಂದರೆ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ವಿದ್ಯಾರ್ಥಿಗಳು ಸರ್ಕಾರಿ ಕಾಲೇಜುಗಳಲ್ಲೇ ದಾಖಲಾಗಬೇಕು. ಅಲ್ಲಿ ಕಡಿಮೆ ಶುಲ್ಕದಲ್ಲಿ ಪದವಿ ನೀಡಲಾಗುವುದು. ಅದರಲ್ಲೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಸೌಲಭ್ಯವಿದೆ. ಕೆಲ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿವೆ. ಆ ಬಗ್ಗೆ ಕ್ರಮಕೈಗೊಳ್ಳಲಾಗುತ್ತದೆ ಎಂದು ಅವರು ಹೇಳಿದರು.
ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರ್ಕಾರದ ಸಮಿತಿ ಇಲ್ಲ. ಹೀಗಾಗಿ, ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದ ಅವರು ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರವರೆಗೂ ದಾಖಲಾಗಲು ಅವಕಾಶ ನೀಡಲಾಗಿದೆ ಎಂದರು.

ಪ್ರಮುಖ ಸುದ್ದಿ :-   ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ ; ತಕ್ಷಣವೇ ಸಿಪಿಆರ್‌ ಮಾಡಿ ಜೀವ ಉಳಿಸಿದ ಮತದಾನ ಮಾಡಲು ಬಂದಿದ್ದ ವೈದ್ಯ

 

0 / 5. 0

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement