ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ. ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಉಳಿದ ಜಿಲ್ಲೆಗಳಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಶೃಂಗೇರಿ, ಕೊಪ್ಪ, ಕಳಸ, ಹೊರನಾಡು, ಮೂಡಿಗೆರೆ, ಕೊಟ್ಟಿಗೆಹಾರ, ವಿರಾಜಪೇಟೆ, ಸೋಮವಾರ ಪೇಟೆ, ಮಡಿಕೇರಿ, ಕುಶಾಲನಗರ, ತೀರ್ಥಹಳ್ಳಿ, ಹೊಸನಗರ, ಸಾಗರ ಮೊದಲಾದಡೆ ಎರಡು ದಿನಗಳಿಂದ ಮಳೆಯಾಗುತ್ತಿದೆ.
ಕರ್ನಾಟಕದಲ್ಲಿ ಜುಲೈನಲ್ಲಿ ಶೇ 7, ಆಗಸ್ಟ್ನಲ್ಲಿ ಶೇ 24ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ
ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಯಾದಗಿರಿ ಜಿಲ್ಲೆಯಲ್ಲಿ ಭೀಮಾ ನದಿಯಲ್ಲಿ ಪ್ರವಾಹದ ಭೀತಿ ಎದುರಾಗಿದೆ. ನದಿ ತೀರಕ್ಕೆ ಜನರು ತೆರಳಬಾರದು, ಮೀನುಗಾರಿಕೆ ಮಾಡಬಾರದು ಎಂದು ಜಿಲ್ಲಾಧಿಕಾರಿ ಡಾ. ರಾಗಪ್ರಿಯಾ ಸೂಚನೆಯನ್ನು ನೀಡಿದ್ದಾರೆ.
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮುಂದಿನ 24 ಗಂಟೆಯಲ್ಲಿ ಪಶ್ಚಿಮ ವಾಯವ್ಯ ದಿಕ್ಕಿನಲ್ಲಿ ಚಲಿಸುವ ನಿರೀಕ್ಷೆ ಇದೆ. ಇದರಿಂದಾಗಿ ಭಾರತದ ವಿವಿಧ ರಾಜ್ಯಗಳಲ್ಲಿ ಮಳೆಯಾಗಲಿದೆ.


ನಿಮ್ಮ ಕಾಮೆಂಟ್ ಬರೆಯಿರಿ