ದೆಹಲಿ ಗಡಿಗಳಲ್ಲಿ ರೈತರ ಪ್ರತಿಭಟನೆ: ಕೇಂದ್ರ, ರಾಜ್ಯಗಳಿಂದ ವರದಿ ಕೇಳಿದ ಎನ್‌ಎಚ್‌ಆರ್‌ಸಿ

ನವದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ದೆಹಲಿಯ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಿಂದ ವಾಣಿಜ್ಯ ಚಟುವಟಿಕೆಗಳು ಹಾಗೂ ಜನರ ಸಂಚಾರದ ಮೇಲಾಗುತ್ತಿರುವ ಪರಿಣಾಮಗಳ ಕುರಿತು ವರದಿ ಪಡೆಯಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ಮುಂದಾಗಿದೆ.
ಈ ಸಂಬಂಧ ವರದಿ ಸಲ್ಲಿಸುವಂತೆ ಕೇಂದ್ರ ಸರ್ಕಾರ, ದೆಹಲಿ, ರಾಜಸ್ಥಾನ, ಹರಿಯಾಣ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರಗಳಿಗೆ ಅದು ಸೂಚನೆ ನೀಡಿದೆ.
ರೈತರ ಪ್ರತಿಭಟನೆಯಿಂದ ವಿವಿಧ ಕ್ಷೇತ್ರಗಳ ಮೇಲೆ ಆಗುತ್ತಿರುವ ಪರಿಣಾಮಗಳ ಕುರಿತು ಅಧ್ಯಯನ ನಡೆಸಿ, ಅಕ್ಟೋಬರ್‌ 10ರ ಒಳಗಾಗಿ ವರದಿ ಸಲ್ಲಿಸುವಂತೆ ಆರ್ಥಿಕ ಪ್ರಗತಿ ಸಂಸ್ಥೆ (ಐಇಜಿ), ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ಹಾಗೂ ದೆಹಲಿ ವಿಶ್ವವಿದ್ಯಾಲಯದ ದೆಹಲಿ ಸ್ಕೂಲ್‌ ಆಫ್‌ ಸೋಷಿಯಲ್‌ ವರ್ಕ್‌ಗೆ ಸೂಚನೆ ನೀಡಲಾಗಿದೆ ಎಂದು ಆಯೋಗವು ಪ್ರಕಟಣೆಯಲ್ಲಿ ತಿಳಿಸಿದೆ.
ರೈತರು ಪ್ರತಿಭಟನೆ ಮುಂದುವರಿಸಿದ್ದರಿಂದ ಉದ್ದಿಮೆಗಳ ಮೇಲೆ ಸಾಕಷ್ಟು ದುಷ್ಪರಿಣಾಮವಾಗುತ್ತಿದೆ ಎಂಬ ಬಗ್ಗೆ ದೂರುಗಳು ಬಂದಿವೆ. ಸೂಕ್ಷ್ಮ, ಮಧ್ಯಮ ಹಾಗೂ ಬೃಹತ್‌ ಕೈಗಾರಿಕೆಗಳು ಸೇರಿದಂತೆ 9,000ಕ್ಕೂ ಅಧಿಕ ಉದ್ದಿಮೆಗಳ ಮೇಲೆ ಗಂಭೀರ ಪರಿಣಾಮವುಂಟಾಗಿದೆ ಎಂಬ ದೂರುಗಳು ಬಂದಿವೆ’ ಎಂದು ಆಯೋಗ ಹೇಳಿದೆ.

ಮೇಲಿನ ಸುದ್ದಿಗೆ ರೇಟಿಂಗ್ ನೀಡಿ

0 / 5. ಒಟ್ಟು ವೋಟುಗಳು 0

ನಿಮ್ಮ ಕಾಮೆಂಟ್ ಬರೆಯಿರಿ