ಸೆ.17ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ: ಒಂದೇ ದಿನ 30 ಲಕ್ಷ ಲಸಿಕೆ ನೀಡುವ ಗುರಿ ನಿಗದಿ

ಬೆಂಗಳೂರು: ಸೆಪ್ಟೆಂಬರ್ 17 ರಂದು ಬೃಹತ್ ಕೋವಿಡ್ ಲಸಿಕೆ ಅಭಿಯಾನ ಆಯೋಜಿಸಿದ್ದು, ಈ ಕಾರ್ಯಕ್ರಮದಡಿ 30 ಲಕ್ಷ ಲಸಿಕೆ ಹಾಕಬೇಕು ಎಂದು ನಿರ್ಧರಿಸಲಾಗಿದೆ. ಅದಕ್ಕೆ ಸೂಕ್ತ ತಯಾರಿ ಮಾಡಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು (ಮಂಗಳವಾರ) ಬೃಹತ್ ಲಸಿಕೆ ಕಾರ್ಯಕ್ರಮದ ಪೂರ್ವಭಾವಿಯಾಗಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.
ರಾಜ್ಯದಲ್ಲಿ ಲಸಿಕೆ ಕಾರ್ಯಕ್ರಮ ಚುರುಕಾಗಿ ಸಾಗಿದ್ದು, ಉತ್ತರ ಪ್ರದೇಶದ ನಂತರ ಅತಿ ಹೆಚ್ಚು ಲಸಿಕೆ ನೀಡಿದ ರಾಜ್ಯ ಕರ್ನಾಟಕವಾಗಿದೆ. ಆಗಸ್ಟ್ ತಿಂಗಳಲ್ಲಿ ಅತಿ ಹೆಚ್ಚು, ಅಂದರೆ 1.10 ಕೋಟಿ ಲಸಿಕೆ ನೀಡಲಾಗಿದೆ. ನವೆಂಬರ್ ಅಂತ್ಯದ ವೇಳೆಗೆ ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಎರಡೂ ಡೋಸ್ ಲಸಿಕೆ ನೀಡಬೇಕು ಎಂಬ ಚಿಂತನೆ ಇದೆ ಎಂದು ಬೊಮ್ಮಾಯಿ ತಿಳಿಸಿದರು.
ವಾರದಲ್ಲಿ ಒಂದು ದಿನ ಅಂದರೆ ಬುಧವಾರ 15 ಲಕ್ಷ ಲಸಿಕೆ ಹಾಕುವ ಗುರಿ ಇದೆ. ದಿನಕ್ಕೆ 5 ಲಕ್ಷ ಲಸಿಕೆಯ ಗುರಿ ಹೊಂದಲಾಗಿದೆ. ಬೃಹತ್ ಲಸಿಕೆ ಕಾರ್ಯಕ್ರಮದಂದು ಕೇಂದ್ರ ಸರ್ಕಾರ ಒಂದೇ ದಿನ 2 ರಿಂದ 3 ಕೋಟಿ ಲಸಿಕೆ ನೀಡುವ ಉದ್ದೇಶ ಹೊಂದಿದೆ. ಲಸಿಕೆ ಪೂರೈಕೆಗೆ ವಿಶೇಷ ಬೇಡಿಕೆ ಸಲ್ಲಿಸಲಾಗಿದ್ದು, ಕೇಂದ್ರ ಸರ್ಕಾರ ಒದಗಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
ಬಡತನ ರೇಖೆಗಿಂತ ಕೆಳಗಿರುವ ದುರ್ಬಲ ವರ್ಗದವರಿಗೆ ಹಾಗೂ ದುಡಿಯುವ ವರ್ಗಗಳಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು. ನಗರ ಪ್ರದೇಶಗಳಲ್ಲಿ, ಬೆಂಗಳೂರಿನಲ್ಲಿ ಕೊಳಚೆ ಪ್ರದೇಶಗಳಲ್ಲಿ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.
ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜು ಹಾಗೂ ನರ್ಸಿಂಗ್ ಕಾಲೇಜುಗಳ ಸಹಯೋಗ ಪಡೆಯಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಮುಖ್ಯಮಂತ್ರಿ ಬೊಮ್ಮಾಯಿ ಈ ಬೃಹತ್ ಲಸಿಕೆ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ.
ದಿನದಿಂದ ದಿನಕ್ಕೆ ಕೋವಿಡ್ 19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದ್ದು, ಲಸಿಕೆ ಪ್ರಮಾಣ ಹೆಚ್ಚಾಗಿರುವುದೇ ಇದಕ್ಕೆ ಕಾರಣ. ರಾಜ್ಯದಲ್ಲಿ ಸರಾಸರಿ ಶೇ. 71 ಜನರಿಗೆ ಮೊದಲ ಡೋಸ್ ಹಾಕಲಾಗಿದೆ ಎಂದರು.
ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್, ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಅಭಿವೃದ್ಧಿ ಆಯುಕ್ತರು ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಮುಖ ಸುದ್ದಿ :-   ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

5 / 5. 1

ಶೇರ್ ಮಾಡಿ :

ನಿಮ್ಮ ಕಾಮೆಂಟ್ ಬರೆಯಿರಿ

advertisement