ನಿಗಮ, ಮಂಡಳಿಗಳಲ್ಲಿ ತೃತೀಯ ಲಿಂಗಿಗಳಿಗೆ ಮೀಸಲಾತಿ: ರಾಜ್ಯ ಸರ್ಕಾರಕ್ಕೆ ಕೊನೆಯ ಅವಕಾಶ ನೀಡಿದ ಹೈಕೋರ್ಟ್‌

ಬೆಂಗಳೂರು: ರಾಜ್ಯ ಸರ್ಕಾರದ ಪ್ರಾಧಿಕಾರಗಳು ಮತ್ತು ನಿಗಮ ಮಂಡಳಿಗಳ ನೇಮಕಾತಿಗಳಲ್ಲಿ ತೃತೀಯ ಲಿಂಗಿಗಳಿಗೆ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸುವಂತೆ ಸಲಹೆ ನೀಡುವ ವಿಚಾರದಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಬುಧವಾರ ಕೊನೆಯದಾಗಿ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ ಎಂದು ಬಾರ್‌ ಎಂಡ್‌ ಬೆಂಚ್‌ ವರದಿ ಮಾಡಿದೆ.
ಲೈಂಗಿಕ ಅಲ್ಪಸಂಖ್ಯಾತರು, ಎಚ್‌ಐವಿ ಪೀಡಿತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸಂಗಮ ಸ್ವಯಂ ಸೇವಾ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮತ್ತು ʼಜೀವʼ ಎನ್‌ಜಿಓ ಸಲ್ಲಿಸಿರುವ ಮಧ್ಯಂತರ ಅರ್ಜಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್‌ ಶಂಕರ್‌ ಮಗದುಮ್‌ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ಜೀವ ಎನ್‌ಜಿಒ ಪರ ಹಿರಿಯ ವಕೀಲೆ ಜಯ್ನಾ ಕೊಠಾರಿ“ರಾಜ್ಯ ಸರ್ಕಾರದ ಎಲ್ಲ ಹುದ್ದೆಗಳ ನೇಮಕಾತಿ ವೇಳೆ ತೃತೀಯ ಲಿಂಗಿಗಳಿಗೆ ಎಲ್ಲಾ ವರ್ಗಗಳಲ್ಲಿ ಶೇ.1ರಷ್ಟು ಸಮತಲ ಮೀಸಲಾತಿ ಕಲ್ಪಿಸಲು ಕರ್ನಾಟಕ ನಾಗರಿಕ ಸೇವಾ ನೇಮಕಾತಿ ನಿಯಮ-1977ರ ನಿಯಮ 9ಕ್ಕೆ ತಿದ್ದುಪಡಿ ತಂದು 1(ಡಿ)ಯನ್ನು ಸೇರ್ಪಡೆಗೊಳಿಸಿ 2021ರ ಜುಲೈ 6ರಂದು ಅಂತಿಮ ಅಧಿಸೂಚನೆ ಪ್ರಕಟಿಸಿದೆ. ಸರ್ಕಾರದ ತಿದ್ದುಪಡಿ ನಿಯಮವು ಕೇವಲ ಸರ್ಕಾರಿ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತದೆ. ಸರ್ಕಾರದ ಇತರೆ ಪ್ರಾಧಿಕಾರ ಹಾಗೂ ನಿಗಮ-ಮಂಡಳಿಗಳ ನೇಮಕಾತಿಯಲ್ಲಿ ಈ ತಿದ್ದುಪಡಿ ನಿಯಮವನ್ನು ಜಾರಿಗೆ ತರಲು ನಿರ್ದೇಶನ ನೀಡಬೇಕು ಎಂಬುದು ನಮ್ಮ ಮನವಿ. ಈ ನಿಟ್ಟಿನಲ್ಲಿ ಸರ್ಕಾರಿ ಪ್ರಾಧಿಕಾರ, ನಿಗಮ-ಮಂಡಳಿಗಳಿಗೆ ಸಲಹೆ ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸರ್ಕಾರಕ್ಕೆ ಆ.18ರಂದು ನಿರ್ದೇಶಿಸಿತ್ತು. ಆ ಆದೇಶ ಪಾಲನೆಯಾಗಿಲ್ಲ” ಎಂದು ಪೀಠದ ಗಮನಕ್ಕೆ ತಂದರು.
ಇದನ್ನು ಪರಿಗಣಿಸಿದ ಪೀಠವು 2021ರ ಆಗಸ್ಟ್‌ 18ರಂದು ನ್ಯಾಯಾಲಯ ಹೊರಡಿಸಿರುವ ನಿರ್ದೇಶನವನ್ನು ಪಾಲಿಸಲು ರಾಜ್ಯ ಸರ್ಕಾರಕ್ಕೆ ಕೊನೆಯದಾಗಿ ನಾಲ್ಕು ವಾರ ಕಾಲಾವಕಾಶ ನೀಡಲಾಗುವುದು ಎಂದು ಹೇಳಿ ವಿಚಾರಣೆಯನ್ನು ನವೆಂಬರ್‌ 17ಕ್ಕೆ ಮುಂದೂಡಿತು ಎಂದು ವರದಿ ತಿಳಿಸಿದೆ.

ಪ್ರಮುಖ ಸುದ್ದಿ :-   ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

0 / 5. 0

ನಿಮ್ಮ ಕಾಮೆಂಟ್ ಬರೆಯಿರಿ

advertisement